ಸರ್ಕಾರ ಡ್ರಗ್ಸ್ ಹಾಗೂ ಮಾದಕ ಪದಾರ್ಥಗಳ ಮಾರಾಟಕ್ಕೆ ಕಡಿವಾಣ ಹಾಕುವ ಸಂಬಂಧ ಆರೋಗ್ಯ, ಆಹಾರ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಶೀಘ್ರವೇ ಹುಕ್ಕಾ ಬಾರ್ ನಿಯಂತ್ರಣಕ್ಕೆ ಕಾನೂನು ರೂಪಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರು (ಡಿ.14): ಸರ್ಕಾರ ಡ್ರಗ್ಸ್ ಹಾಗೂ ಮಾದಕ ಪದಾರ್ಥಗಳ ಮಾರಾಟಕ್ಕೆ ಕಡಿವಾಣ ಹಾಕುವ ಸಂಬಂಧ ಆರೋಗ್ಯ, ಆಹಾರ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಶೀಘ್ರವೇ ಹುಕ್ಕಾ ಬಾರ್ ನಿಯಂತ್ರಣಕ್ಕೆ ಕಾನೂನು ರೂಪಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬಿಜೆಪಿ ಸದಸ್ಯ ಸಿ.ಕೆ.ರಾಮಮೂರ್ತಿ ಪ್ರಶ್ನೆಗೆ ಉತ್ತರಿಸಿದ ಅವರು, ಹುಕ್ಕಾ ಬಾರ್ ಸ್ಥಾಪನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ (ಬಿಬಿಎಂಪಿ) ಯಾವುದೇ ರೀತಿಯ ವ್ಯಾಪಾರ ಪರವಾನಿಗೆ ನೀಡುವುದಿಲ್ಲ.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪರವಾನಗಿ ಪಡೆದು ವ್ಯಾಪಾರಿಗಳು ಹುಕ್ಕಾ ಬಾರ್ ನಡೆಸುತ್ತಿದ್ದಾರೆ. ನ್ಯಾಯಾಲಯವು ಸಹ ಹುಕ್ಕಾ ಸೇವನೆ ಮಾಡುವವರಿಗೆ ಪ್ರತ್ಯೇಕ ಸ್ಥಳ ನಿಗದಿ ಪಡಿಸಬೇಕು ಎಂದಿದೆ. ಆದರೂ ಯುವ ಜನಾಂಗದ ಸ್ವಾಥ್ಯದ ದೃಷ್ಠಿಯಿಂದ ಹುಕ್ಕಾ ಬಾರ್ ನಿಯಂತ್ರಣಕ್ಕೆ ಕಾನೂನು ರೂಪಿಸಲಾಗುವುದು ಎಂದು ಹೇಳಿದರು. ಹುಕ್ಕಾಬಾರ್‌ಗಳು ನಿಯಮಗಳನ್ನು ಪಾಲನೆ ಮಾಡದಿರುವ ಬಗ್ಗೆ ದೂರುಗಳು ಬಂದರೆ ಪೊಲೀಸರು ಸ್ಥಳ ಪರಿಶೀಲನೆ ಮಾಡಲು ಮಾತ್ರ ಅವಕಾಶವಿದೆ. ಆದರೆ ಹುಕ್ಕಾಬಾರ್‌ಗಳ ಮೇಲೆ ನಿಯಂತ್ರಣ ಸಾಧಿಸಲು ನಮಗೆ ಅವಕಾಶಗಳಿಲ್ಲ.
ಲೋಕಸಭೆಗೆ ನಿಖಿಲ್ ಸ್ಪರ್ಧಿಸದಿದ್ದರೆ ನಾನು ರೆಡಿ: ಮಾಜಿ ಶಾಸಕ ಸುರೇಶ್‌ಗೌಡ
ಆದರೂ ಕಾನೂನು ರೂಪಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು. ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಮಾತನಾಡಿ, ಹುಕ್ಕಾ ಸೇದುವುದು ಸಿಗರೇಟ್ ಸೇದುವುದಕ್ಕಿಂತಲ್ಲೂ 200 ಪಟ್ಟು ಹೆಚ್ಚು ಹಾನಿ ಎಂಬುದು ಸಾಬೀತಾಗಿದೆ. ಪಂಜಾಬ್, ರಾಜಸ್ಥಾನ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಹುಕ್ಕಾ ಬಾರ್‌ಗಳನ್ನು ನಿಷೇಧಿಸಲಾಗಿದೆ. ಅದೇ ರೀತಿ ರಾಜ್ಯದಲ್ಲಿಯೂ ನಿಷೇಧಿಸಬೇಕು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ಹುಕ್ಕಾ ಬಾರ್ ನಿಷೇಧಕ್ಕೆ ಒಲವು ವ್ಯಕ್ತಪಡಿಸಿದ್ದು, ಸರ್ಕಾರ ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.