
ಬೆಂಗಳೂರು(ನ.10): ಪಾರದರ್ಶಕ ಆಡಳಿತದ ದೃಷ್ಟಿಯಿಂದ ಲೋಕಾಯುಕ್ತರು, ಉಪಲೋಕಾಯುಕ್ತರು ಸೇರಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು, ನೌಕರರು ಪ್ರತೀ ವರ್ಷ ತಮ್ಮ ಆಸ್ತಿ ವಿವರ ಪ್ರಕಟಿಸುವಂತೆ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಬೇಕೆಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಪತ್ರ ಬರೆದಿರುವ ಅವರು, ಶಾಸಕರು, ಪರಿಷತ್ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಕೆ ಮಾಡಬೇಕಾಗಿರುತ್ತದೆ. ಸಾರ್ವಜನಿಕ ಹಿತದೃಷ್ಟಿಯಿಂದ ಇದು ಅವಶ್ಯಕ. ಅದೇ ರೀತಿ ಲೋಕಾಯುಕ್ತ ಸಂಸ್ಥೆ ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗಿರುವುದು ಸಾರ್ವಜನಿಕ ಹಿತದೃಷ್ಟಿಯಂದ ಪ್ರಮುಖವಾಗಿರುತ್ತದೆ. ಹೀಗಾಗಿ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕೋರಿದ್ದಾರೆ.
ಹಾಗಾಗಿ ಲೋಕಾಯುಕ್ತರು, ಉಪಲೋಕಾಯುಕ್ತರು ಸೇರಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿ, ನೌಕರರು ಪ್ರತೀ ವರ್ಷ ತಮ್ಮ ಆಸ್ತಿ ವಿವರ ಪ್ರಕಟಿಸುವಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕೋರಿದ್ದಾರೆ.
ಹೈಕೋರ್ಟ್ ನ್ಯಾಯಮೂರ್ತಿಗಳು ಸ್ವಯಂ ಪ್ರೇರಿತವಾಗಿ ತಮ್ಮ ಆಸ್ತಿ ವಿವರಗಳನ್ನು ಪ್ರಕಟಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ನ್ಯಾಯಮೂರ್ತಿಗಳೂ ಮತ್ತು ಸರ್ಕಾರಿ ನೌಕರರು ತಮ್ಮ ಆಸ್ತಿ ವಿವರ ಬಹಿರಂಗಪಡಿಸುವುದು ಆರೋಗ್ಯಕರ ಮತ್ತು ಅವಶ್ಯಕ ಕ್ರಮವಾಗಿರುತ್ತದೆ. ಹಾಗಾಗಿ ನಾನು 2021ರಲ್ಲೂ ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರಕ್ಕೆ ಪತ್ರ ಬರೆದಿದ್ದೆ. ನನ್ನ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪತ್ರ ಬರೆದು ಲೋಕಾಯುಕ್ತ ಕಾಯ್ದೆ ತಿದ್ದುಪಡಿಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಿತ್ತು. ಆದರೆ, ಇಲಾಖೆಯು ಲೋಕಾಯುಕ್ತಕ್ಕೆ ಪತ್ರ ಬರೆದು ಕಾಯ್ದೆ ತಿದ್ದುಪಡಿ ಸಂಬಂಧ ಅಭಿಪ್ರಾಯ ಕೇಳಿತ್ತು. ಇದುವರೆಗೆ ಯಾವುದೇ ಉತ್ತರ, ಮಾಹಿತಿಯನ್ನು ನೀಡಿಲ್ಲ ಎಂಬುದನ್ನು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ