ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಿದೆ ಕಾಂಗ್ರೆಸ್ : ಅಭ್ಯರ್ಥಿ ಯಾರು..?

By Web DeskFirst Published Feb 1, 2019, 11:12 AM IST
Highlights

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ಮೂಲಕ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದು, ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್ , ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧರಿಸಿದೆ. 

ಬೆಂಗಳೂರು :  ಕಾಂಗ್ರೆಸ್‌ ಸಂಸದರು ಹೊಂದಿರುವ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಜೆಡಿಎಸ್‌ ಪಟ್ಟು ಹಿಡಿದರೆ ಕಾಂಗ್ರೆಸ್‌ ಸಂಸದ ಮುದ್ದಹನುಮೇಗೌಡ ಗೆದ್ದಿರುವ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಮುದ್ದ ಹನುಮೇಗೌಡ ಅವರನ್ನು ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್‌ ವಲಯದಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣಾ ಪೂರ್ವ ಮೈತ್ರಿಯ ಪ್ರಾಥಮಿಕ ಹಂತದ ಮಾತುಕತೆ ಪ್ರಕಾರ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪೈಕಿ ಹಾಲಿ ಸಂಸದರನ್ನು ಹೊಂದಿರುವ ಪಕ್ಷವು ಕ್ಷೇತ್ರ ಬಿಟ್ಟುಕೊಡುವಂತಿಲ್ಲ. ಆದರೆ, ಇನ್ನೊಂದು ಮೂಲದ ಪ್ರಕಾರ ಕಾಂಗ್ರೆಸ್‌ನಂತೆಯೇ ಜೆಡಿಎಸ್‌ ಕೂಡ ಕಾಂಗ್ರೆಸ್‌ನ ಹಾಲಿ ಸಂಸದರಿರುವ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಒಂದೊಮ್ಮೆ ಈ ರೀತಿ ಬಿಟ್ಟುಕೊಡುವ ಸಂದರ್ಭ ಸೃಷ್ಟಿಯಾದರೆ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಹಾಲಿ ಕಾಂಗ್ರೆಸ್‌ ಸಂಸದರಾಗಿರುವ ಮುದ್ದ ಹನುಮೇಗೌಡ ಅವರನ್ನು ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆಯೂ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಯಾಗಿದೆ ಎಂದು ಉನ್ನತ ಮೂಲಗಳು ‘ಕನ್ನಡಪ್ರಭಕ್ಕೆ’ ತಿಳಿಸಿವೆ.

ಇದೇ ವೇಳೆ ಹಾಸನ ಹಾಗೂ ಮಂಡ್ಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಜೆಡಿಎಸ್‌ನಿಂದ ಆಗುತ್ತಿರುವ ತೊಂದರೆ ಹಾಗೂ ಅದನ್ನು ನಿಭಾಯಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

click me!