ಮಹಿಳೆಯರು ಶೇ.100 ಸಾಕ್ಷರರಾಗಿ: ಸಿದ್ದರಾಮಯ್ಯ ಕರೆ

Kannadaprabha News   | Kannada Prabha
Published : Nov 29, 2025, 06:41 AM IST
siddaramaiah

ಸಾರಾಂಶ

ಮಹಿಳೆಯರು ನೂರಕ್ಕೆ ನೂರರಷ್ಟು ಸಾಕ್ಷರರಾಗಿಲ್ಲ. ಶೇ.100 ಸಾಕ್ಷರತೆ ಸಾಧಿಸುವುದರ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನ ಹೆಚ್ಚಿಸಿಕೊಂಡು ಆರ್ಥಿಕ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು : ಪ್ರತಿ ಶೈಕ್ಷಣಿಕ ವರ್ಷದ ಫಲಿತಾಂಶದಲ್ಲಿ ಬಾಲಕಿಯರೇ ಮೆಲುಗೈ ಸಾಧಿಸಿದ್ದರೂ ಮಹಿಳೆಯರು ನೂರಕ್ಕೆ ನೂರರಷ್ಟು ಸಾಕ್ಷರರಾಗಿಲ್ಲ. ಶೇ.100 ಸಾಕ್ಷರತೆ ಸಾಧಿಸುವುದರ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನ ಹೆಚ್ಚಿಸಿಕೊಂಡು ಆರ್ಥಿಕ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್) ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆ, ವಿಶ್ವ ಹಿರಿಯ ನಾಗರೀಕರ ದಿನಾಚರಣೆ, ಮೂರು ಮಹತ್ವಕಾಂಕ್ಷಿ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಮಹಿಳೆಯರ ಸ್ವಾವಲಂಬನೆಗಾಗಿ ಆರಂಭಿಸಲಾಗಿರುವ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ, ಮಹಿಳೆಯರ ರಕ್ಷಣೆಗಾಗಿ ಅಕ್ಕಪಡೆ ಹಾಗೂ ಬಡಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವ ಯೋಜನೆಗೆ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು.

ಈ ವೇಳೆ ಸಿದ್ದರಾಮಯ್ಯ, ‘ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಗಳಾಗದೆ ಹೋದರೆ, ಸಮಾಜ ಮುಂದುವರೆಯುವುದು ಕಷ್ಟ. ಈ ಹಿಂದೆ ಸಮಾಜದಲ್ಲಿ ಅಸಮಾನತೆ ಇದ್ದು , ಮಹಿಳೆಯರೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಸುಶಿಕ್ಷಿತರಾಗುತ್ತಿರುವುದು ಸಂತಸದ ಸಂಗತಿ. ಆದರೂ ಶೇ.100 ನೂರರಷ್ಟು ಸಾಕ್ಷರತೆ ಹೊಂದಬೇಕು’ ಎಂದರು.

ಐಸಿಡಿಎಸ್ ಯೋಜನೆ ತಾಯಿ, ಶಿಶು ಮರಣ ಹಾಗೂ ಅಪೌಷ್ಟಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ. ಅ.2ಕ್ಕೆ ಐಸಿಡಿಎಸ್ ಕಾರ್ಯಕ್ರಮಕ್ಕೆ 50 ವರ್ಷ ತುಂಬಿದ್ದು ಮೈಲುಗಲ್ಲು ಸಾಧನೆ. ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರು ಹಮ್ಮಿಕೊಂಡಿದ್ದ ದೂರದೃಷ್ಟಿಯ ಯೋಜನೆಯೇ ಐಸಿಡಿಎಸ್ ಎಂದು ಹೇಳಿದರು.

ಅಪೌಷ್ಟಿಕತೆ ನಿವಾರಣೆಗೆ ಜಾರಿ:

ಎಪ್ಪತ್ತರ ದಶಕದಲ್ಲಿ ತಾಯಿ ಮತ್ತು ಮಕ್ಕಳ ಮರಣ ತಡೆಗಟ್ಟಲು ಹಾಗೂ ಅವರಲ್ಲಿ ಅಪೌಷ್ಟಿಕತೆ ನಿವಾರಿಸುವ ಉದ್ದೇಶದಿಂದ ಈ ಯೋಜನೆ ಜಾರಿ ಮಾಡಿದರು. ಟಿ.ನರಸೀಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೊದಲು ಪ್ರಾರಂಭಗೊಂಡ ಅಂಗನವಾಡಿ ಕೇಂದ್ರ, 33 ತಾಲೂಕುಗಳಲ್ಲಿ ಕಾರ್ಯನಿರ್ವಹಿಸಿತು. ಪ್ರಸ್ತುತ ರಾಜ್ಯಾದ್ಯಂತ 69,922 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಮಕ್ಕಳ ಆರೈಕೆಯಲ್ಲಿ ನಿರತವಾಗಿರುವ ಎರಡನೇ ತಾಯಿಯಂತೆ ಎಂದು ಅಭಿನಂದಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 1.04 ಲಕ್ಷ ಕೋಟಿ ರು.ಗಳಿಗೂ ಹೆಚ್ಚು ಹಣ ವೆಚ್ಚ

ಐದು ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 1.04 ಲಕ್ಷ ಕೋಟಿ ರು.ಗಳಿಗೂ ಹೆಚ್ಚು ಹಣ ವೆಚ್ಚ ಮಾಡಲಾಗಿದೆ. ಜತೆಗೆ ಅಭಿವೃದ್ಧಿ ಯೋಜನೆಗಳಿಗೂ ಅನುದಾನದ ಕೊರತೆಯಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಮಹಿಳಾ ಕಲ್ಯಾಣಕ್ಕಾಗಿ 95 ಸಾವಿರ ಕೋಟಿ ರು. ಗಳನ್ನು ಮೀಸಲಿಟ್ಟಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಕೆ.ಎಚ್.ಮುನಿಯಪ್ಪ, ಡಾ.ಎಚ್.ಸಿ. ಮಹದೇವಪ್ಪ, ಲಕ್ಷ್ಮಿಹೆಬ್ಬಾಳ್ಕರ್‌, ಈಶ್ವರ ಖಂಡ್ರೆ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ