
ಕಲಬುರಗಿ (ಮೇ.1): ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ನಾಯಕತ್ವ ಬದಲಾವಣೆಯ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡಬೇಡಿ ಎಂದು ಮನವಿ ಮಾಡಿದ್ದಾರಲ್ಲದೆ, ಅಂತಿಮ ನಿರ್ಧಾರ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
"ಸಿಎಂ ಬದಲಾವಣೆ ಬಗ್ಗೆ ಪದೇ ಪದೇ ಪ್ರಶ್ನಿಸಿದರೆ ನಾನೇನು ಹೇಳಲಿ? ಹೈಕಮಾಂಡ್ ಅಂದ್ರೆ ಕೇವಲ ಒಬ್ಬ ವ್ಯಕ್ತಿಯಲ್ಲ. ನಾನು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ನಾವೆಲ್ಲರೂ ಕುಳಿತು ಒಮ್ಮತದ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾನೊಂದು ಹೇಳಿದರೆ ನೀವು ಇನ್ನೊಂದನ್ನು ಅರ್ಥೈಸಬೇಡಿ" ಎಂದು ಮಾಧ್ಯಮಗಳಿಗೆ ಖರ್ಗೆ ಕಿವಿಮಾತು ಹೇಳಿದರು.
ನಾಯಕತ್ವ ಬದಲಾವಣೆಯ ದಿನಾಂಕದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, "ಬದಲಾವಣೆಯ ಬಗ್ಗೆ ಇನ್ನೂ ಯಾವುದೇ ದಿನಾಂಕ ನಿಗದಿಯಾಗಿಲ್ಲ. ಸಮಯ ನಿಗದಿಯಾಗದ ಹೊರತು ಬದಲಾವಣೆ ಆಗುತ್ತದೋ ಇಲ್ಲವೋ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಸೂಕ್ತ ಸಮಯ ಬಂದಾಗ ಪಕ್ಷದ ಹಿತದೃಷ್ಟಿಯಿಂದ ಮತ್ತು ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಏನು ನಿರ್ಧಾರ ತೆಗೆದುಕೊಳ್ಳಬೇಕೋ ಅದನ್ನು ಖಂಡಿತ ತೆಗೆದುಕೊಳ್ಳುತ್ತೇವೆ" ಎಂದರು.
ಯಾವುದೇ ನಿರ್ಣಯ ಕೈಗೊಂಡರೂ ಅದರ ಸಾಧಕ-ಬಾಧಕಗಳನ್ನು ಚರ್ಚಿಸಿ ಮುಂದುವರಿಯುತ್ತೇವೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬೆಂಬಲ ನೀಡಬೇಕು. ಸುಮ್ಮನೆ ತಪ್ಪು ಸಂದೇಶಗಳನ್ನು ರವಾನಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಬೇಡಿ ಎಂದು ಅವರು ಇದೇ ವೇಳೆ ವಿನಂತಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ