
ಮಂಗಳೂರು (ಜೂ.3) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೋಮು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇದರಂಗವಾಗಿ ಜಿಲ್ಲೆಯ ಎಲ್ಲ ಕೋಮು ಸಂಬಂಧಿ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ನಿತ್ಯದ ಲೊಕೇಶನ್ ಹಾಗೂ ಅವರ ದೈನಂದಿನ ಕಾರ್ಯ ಚಟುವಟಿಕೆಗಳ ಮಾಹಿತಿ ಪಡೆಯಲು ಆರಂಭಿಸಿದೆ. ರಾತ್ರಿ ವೇಳೆಯೂ ಮುಖಂಡರ ಮನೆಗಳಿಗೆ ತೆರಳಿ ಜಿಪಿಎಸ್ ಫೋಟೋ ತೆಗೆಯುವ ಪ್ರಕ್ರಿಯೆಯನ್ನು ಪೊಲೀಸರು ನಡೆಸಿದ್ದಾರೆ.
ಪೊಲೀಸರ ಈ ಕ್ರಮ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಕಡಬ ಪೊಲೀಸ್ ಠಾಣೆಯ ಎದುರು ಕೆಲವರು ಸೋಮವಾರ ಪ್ರತಿಭಟನೆ ನಡೆಸಿದರು. ಪೊಲೀಸರು ಪ್ರತಿಭಟನಾಕಾರರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ‘ಈ ವಿಚಾರದಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ, ಅವರು ಕುಟುಂಬ ಸದಸ್ಯರೇ ಆದರೂ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ’ ಖಡಕ್ ವಾರ್ನಿಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಂಬಂಧಿ ಹತ್ಯೆಗಳ ಬಳಿಕ ನೂತನ ಎಸ್ಪಿಯಾಗಿ ಡಾ.ಅರುಣ್ ಆಗಮಿಸಿದ್ದು, ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಈ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ.
ನಿತ್ಯವೂ ಲೊಕೇಶನ್ ಚೆಕ್:
ಕಳೆದ 10 ವರ್ಷಗಳಲ್ಲಿ ಜಿಲ್ಲೆಯಲ್ಲಿ ನಡೆದ ಹತ್ಯೆಗಳ ಸಮಗ್ರ ಮಾಹಿತಿ ಕಲೆ ಹಾಕಿರುವ ಜಿಲ್ಲಾ ಪೊಲೀಸ್ ಇಲಾಖೆ, ಈ ಹತ್ಯೆಗಳಿಗೆ ಸಂಬಂಧಿಸಿದ ಎಲ್ಲ ಕೋಮು ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರ ಪಟ್ಟಿಯನ್ನು ಸಿದ್ಧಪಡಿಸಿದೆ. ಅವರೆಲ್ಲರ ಮನೆಗಳಿಗೆ ನಿತ್ಯವೂ ತೆರಳುತ್ತಿರುವ ಆಯಾ ಠಾಣೆಯ ಪೊಲೀಸರು, ಅವರ ಫೋಟೋ, ಲೊಕೇಶನ್ ಸಹಿತ ಕಾರ್ಯ ಚಟುವಟಿಕೆಗಳ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ದಿನಂಪ್ರತಿ ಈ ಪ್ರಕ್ರಿಯೆ ನಡೆಸಲು ಎಸ್ಪಿ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗುವವರೆಗೂ ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ. ಯಾರೇ ಕಾನೂನು ವಿರೋಧಿ ಕೆಲಸ ಮಾಡಿದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
ವಿಹಿಂಪ ವಿರೋಧ:
ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮವನ್ನು ವಿರೋಧಿಸಿರುವ ವಿಶ್ವ ಹಿಂದೂ ಪರಿಷತ್, ಸಂಘಟನೆಯಲ್ಲಿ ಗುರುತಿಸಿಕೊಂಡವರಿಗೆ ಕಿರುಕುಳ ನೀಡಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್:
ಪೊಲೀಸರ ಈ ಪ್ರಕ್ರಿಯೆಗೆ ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಕಡಬ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮುಂದೆಯೂ ಈ ವಿಚಾರದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕಠಿಣ ಕಾನೂನು ಕ್ರಮ ಖಚಿತ ಎಂದು ಎಚ್ಚರಿಕೆ ನೀಡಲಾಗಿದೆ.
80ರ ಪೂವಪ್ಪರ ಫೋಟೋ ತೆಗೆದ ಪೊಲೀಸರು!
ಪುತ್ತೂರಿನ ಹಿರಿಯರಾದ, ವಿಶ್ವ ಹಿಂದೂ ಪರಿಷತ್ ನ ದಕ್ಷಿಣ ಪ್ರಾಂತ್ಯದ ಉಪಾಧ್ಯಕ್ಷ ಯು.ಪೂವಪ್ಪ (80) ಅವರ ಮನೆಗೆ ಭಾನುವಾರ ರಾತ್ರಿ ತೆರಳಿದ ಪೊಲೀಸರು ಉಟ್ಟ ಬಟ್ಟೆಯಲ್ಲಿಯೆ ಅವರ ಫೊಟೋ ಸೆರೆ ಹಿಡಿದಿದ್ದಾರೆ. ಕಲ್ಲಾರೆಯಲ್ಲಿನ ತಮ್ಮ ಮನೆ ಸಮೀಪದ ಶ್ರೀ ರಾಘವೇಂದ್ರ ಮಠದಲ್ಲಿ ಅವರು ಮಲಗಿದ್ದರು. ‘ನಾನು ಟವಲ್ ಸುತ್ತಿಕೊಂಡಿದ್ದೆ. ಆ ಬಟ್ಟೆಯಲ್ಲಿಯೇ ಫೋಟೊ ತೆಗೆದುಕೊಂಡು ಹೋಗಿದ್ದಾರೆ’ ಎಂದು ಪೂವಪ್ಪ ತಿಳಿಸಿದ್ದಾರೆ.
ಹಿಂದೂ ಕಾರ್ಯಕರ್ತರೇ ಟಾರ್ಗೆಟ್
ಕರಾವಳಿ ಭಾಗದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ತಿಳಿ ಮಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಟಾರ್ಗೆಟ್ ಮಾಡುವ ಮೂಲಕ ಅವರ ಮೇಲೆ ಪ್ರಕರಣ ದಾಖಲಿಸುತ್ತಿರುವುದು ಖಂಡನೀಯ.
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಏನೇನು ಕ್ರಮ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ