ರಾಜ್ಯಾದ್ಯಂತ ಒಂದು ವಾರ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು (ಏ.2): ರಾಜ್ಯಾದ್ಯಂತ ಬುಧವಾರದಿಂದ ಒಂದು ವಾರ ಕಾಲ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿರುವುದರಿಂದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮಂಗಳವಾರದಿಂದಲೇ ವಿವಿಧೆಡೆ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಬುಧವಾರ ಹಾಗೂ ಗುರುವಾರದಿಂದ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣ ಕಂಡು ಬಂದಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಒಂದು ವಾರ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಭಾರೀ ಮಳೆ: ಕರಾವಳಿ ಜಿಲ್ಲೆಗಳು, ಬೆಂಗಳೂರಿಗೆ ಯಲ್ಲೋ ಅಲರ್ಟ್ ಘೋಷಣೆ!
ಗುರುವಾರದಿಂದ ನಾಲ್ಕು ದಿನ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರಾವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಗುರುವಾರ ಒಂದು ದಿನಕ್ಕೆ ಸೀಮಿತವಾಗಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಆದರೆ, ಸಾಧಾರಣ ಗಾಳಿ, ಗುಡುಗು, ಮಿಂಚು ಸಹಿತ ಮಳೆ ವಾರವಿಡೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣದ ಬಿಸಿಲ ತಾಪ ಕಂಡು ಬಂದಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು 40.6 ಡಿ.ಸೆ.ಗರಿಷ್ಠ ಉಷ್ಣಾಂಶ ದಾಖಲಾಗಿದೆ.