
ರಾಯಚೂರು (ಮಾ.11): ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಭೀಕರ ಪರಿಣಾಮ ಈಗ ಭಾರತದ ಮೇಲೂ ತಟ್ಟಿದೆ. ಯುದ್ಧದ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಕಮರ್ಷಿಯಲ್ (ವಾಣಿಜ್ಯ) ಸಿಲಿಂಡರ್ ಸರಬರಾಜಿನಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಇದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಚಟುವಟಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆ.
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದಾಗಿ ಹೋಟೆಲ್ ಉದ್ಯಮಿಗಳು ಹಾಗೂ ಪಿಜಿ (PG) ಮಾಲೀಕರು ಕಂಗಾಲಾಗಿದ್ದಾರೆ. ಸಿಲಿಂಡರ್ ಸಿಗದೇ ಅಡುಗೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಲಕ್ಷಾಂತರ ಗ್ರಾಹಕರು ಮತ್ತು ಜನಸಾಮಾನ್ಯರಿಗೆ ಊಟದ ಸಮಸ್ಯೆ ಎದುರಾಗಿದೆ. ವ್ಯಾಪಾರ ವಹಿವಾಟು ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ಈಗ ಬೀದಿಗೆ ಬೀಳುವ ಆತಂಕದಲ್ಲಿವೆ.
ವಾಣಿಜ್ಯ ಸಿಲಿಂಡರ್ ಅಭಾವದ ತೀವ್ರತೆಯನ್ನು ಮನಗಂಡು ರಾಯಚೂರು ಸಂಸದ ಜಿ. ಕುಮಾರ್ ನಾಯಕ್ ಅವರು ಕೇಂದ್ರ ಸರ್ಕಾರದ ಇಬ್ಬರು ಪ್ರಭಾವಿ ಸಚಿವರಿಗೆ ತುರ್ತು ಪತ್ರ ಬರೆದಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸಂಸದರು, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
ಕೇಂದ್ರಕ್ಕೆ ಬರೆದ ಪತ್ರದಲ್ಲೇನಿದೆ?
ತಮ್ಮ ಪತ್ರದಲ್ಲಿ ಸಂಸದ ಜಿ. ಕುಮಾರ್ ನಾಯಕ್ ಅವರು, ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್ ಉದ್ಯಮ ಭಾರೀ ಸಂಕಷ್ಟದಲ್ಲಿದೆ. ಇದರಿಂದ ಜನಸಾಮಾನ್ಯರಿಗೂ ತೊಂದರೆಯಾಗುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಯುದ್ಧದ ಪರಿಸ್ಥಿತಿಯ ನಡುವೆಯೂ ದೇಶದಲ್ಲಿ ಕಮರ್ಷಿಯಲ್ ಸಿಲಿಂಡರ್ ಸಮರ್ಪಕವಾಗಿ ಸಿಗುವಂತೆ ಕ್ರಮ ವಹಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ