ಕರ್ನಾಟಕದಲ್ಲಿ ಶುರುವಾಗಿರುವ ಜಾತಿ ಮೀಸಲಾತಿ ವಿಚಾರವಾಗಿ ಇದೇ ಮೊದಲ ಬಾರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಅಧಿಕೃತ ಮಾಹಿತಿಯೊಂದನ್ನು ಪ್ರಕಟಿಸಿದ್ದಾರೆ.
ದಾವಣಗೆರೆ, (ಏ.04): ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿವೆ. ಇದಕ್ಕೆ ಪರಿಹಾರ ಸಿಗಬೇಕೆಂದರೆ ಮೀಸಲಾತಿ ಪ್ರಮಾಣ ಶೇ 50ಕ್ಕಿಂತ ಹೆಚ್ಚಾಗಬೇಕು. ಮೀಸಲಾತಿಯ ನೀಡುವ ಪ್ರಮಾಣದಲ್ಲಿ ಹೆಚ್ಚಿಸಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. 'ಸುಪ್ರೀಂ'ನಿಂದ ಒಳ್ಳೆಯ ಆದೇಶ ಬರುವ ನಿರೀಕ್ಷೆ ಇದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು (ಭಾನುವಾರ) ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠ ಬೆಳ್ಳೊಡಿಯಲ್ಲಿ ನಿರ್ಮಿಸಲಾಗಿರುವ ನೂತನ ವಿದ್ಯಾರ್ಥಿನಿಲಯ, ಸಮುದಾಯ ಭವನ ಮತ್ತು ಮುಖ್ಯ ಮಹಾದ್ವಾರ ಉದ್ಘಾಟನೆ ಹಾಗೂ ಶಾಖಾಮಠದ 5 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪಂಚಮಸಾಲಿಗೆ ಮೀಸಲಾತಿ ನೀಡದಿದ್ರೆ 20 ಲಕ್ಷ ಜನರಿಂದ ಹೋರಾಟ: ಜಯಮೃತ್ಯುಂಜಯ ಶ್ರೀ
ಹಾಲುಮತ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕಾದರೆ ಮೀಸಲಾತಿ ಪ್ರಮಾಣವನ್ನು ಶೇಕಡಾ 7.5 ಕ್ಕೆ ಹೆಚ್ಚಿಸಬೇಕು. ಅದೇ ರೀತಿ ಬೇರೆ ಸಮಾಜದವರು ಮೀಸಲಾತಿಗೆ ಅರ್ಜಿ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಎಲ್ಲ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಬೇಕಾದರೆ ಈಗಿರುವ ಶೇ 50 ದಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿಯನ್ನು ಹೆಚ್ಚಿಸಲು ಬದ್ಧವಾಗಿದೆ ಎಂದು ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರಕಟಿಸಿದರು.
ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ. ಸುಪ್ರೀಂಕೋರ್ಟ್ನಿಂದ ಒಳ್ಳೆಯ ತೀರ್ಮಾನದ ನಿರೀಕ್ಷೆಯಲ್ಲಿ ಇದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
2 ಎ ಮೀಸಲಾತಿಗಾಗಿ ಗೌಡ ಲಿಂಗಾಯತರು ಹೋರಾಟ ಶುರು
ತಜ್ಞರ ಸಮಿತಿ ರಚಿನೆ
ಮೀಸಲಾತಿ ಹೆಚ್ಚಿಸುವುದು ನಿಜಕ್ಕೂ ಸವಾಲು. ಮೀಸಲಾತಿ ಎಲ್ಲ ಸಮುದಾಯಗಳಿಗೆ ಕಾನೂನಾತ್ಮಕವಾಗಿ, ಸಂವಿಧಾನದ ಚೌಕಟ್ಟಿನಲ್ಲಿ, ಸೈದ್ಧಾಂತಿಕವಾಗಿ ನಿಗದಿ ಆಗಬೇಕು. ಮುಂದಿನ ದಿನಗಳಲ್ಲಿ ಯಾರೂ ಕೂಡ ಈ ನಿರ್ಧಾರವನ್ನು ಪ್ರಶ್ನೆ ಮಾಡಬಾರದೆಂಬ ಸದುದ್ದೇಶದಿಂದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.
ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂಬ ಬೇಡಿಕೆ ಇದೆ. ಈ ಸಂಬಂಧ ಕುಲಶಾಸ್ತ್ರ ಅಧ್ಯಯನ ನಡೆಯುತ್ತದೆ. ಪಂಚಮಸಾಲಿ ಸಮಾಜದವರು 2ಎ ಬೇಡಿಕೆ ಇಟ್ಟಿದ್ದಾರೆ. ಅದೇ ರೀತಿ ಹಲವು ಸಣ್ಣ ಸಮುದಾಯದ ಜನರು ಮೀಸಲಾತಿ ಬೇಡಿಕೆ ಇಟ್ಟಿದ್ದಾರೆ. ಇವರ ಬೇಡಿಕೆ ಈಡೇರಿಸಲು ಸರ್ಕಾರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂಬ ನಿರ್ಧಾರ ಮಾಡಿದೆ ಎಂದು ಹೇಳಿದರು.