
ಬೆಳಗಾವಿ (ಡಿ.21): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯ ಹಣ ಬಿಡುಗಡೆಗಾಗಿ ಕಾಯುತ್ತಿದ್ದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಿಹಿ ಸುದ್ದಿ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯ 24ನೇ ಕಂತಿನ ಹಣ ಬಿಡುಗಡೆ ಹಾಗೂ ಮೃತ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗುತ್ತಿರುವ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಗೃಹಲಕ್ಷ್ಮೀಯರಿಗೆ ಹಣ ಸಿಗುತ್ತಾ ಎಂಬ ಗೊಂದಲಕ್ಕೆ ತೆರೆ ಎಳೆದಿರುವ ಸಚಿವರು, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಫೈನಾನ್ಸ್ ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಮುಂಬರುವ ಸೋಮವಾರದಿಂದ ಶನಿವಾರದ ಒಳಗಾಗಿ ರಾಜ್ಯದ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ 24ನೇ ಕಂತಿನ ಹಣ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಮೃತಪಟ್ಟ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು ಸತ್ತವರ ಖಾತೆಗೆ ಹಣ ಹೋಗುತ್ತಿರುವುದು ತಕ್ಷಣಕ್ಕೆ ಗಮನಕ್ಕೆ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ (CS) ನೇತೃತ್ವದಲ್ಲಿ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ಇದನ್ನು ತಡೆಯಲು ಹೊಸ ಸಾಫ್ಟ್‌ವೇರ್ ಅಳವಡಿಸಲಾಗುತ್ತಿದೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮರಣ ಪ್ರಮಾಣ ಪತ್ರಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಬ್ಯಾಂಕ್‌ಗಳಿಗೆ ನೋಟಿಸ್ ಮತ್ತು ಹಣ ರಿಕವರಿ
ತಪ್ಪಾಗಿ ಸಂದಾಯವಾಗಿರುವ ಹಣವನ್ನು ವಾಪಸ್ ಪಡೆಯುವ ಕುರಿತು ಮಾತನಾಡಿದ ಅವರು, ಮೃತಪಟ್ಟವರ ಖಾತೆಗೆ ಹೋದ ಹಣವನ್ನು ರಿಕವರಿ ಮಾಡುವ ಹೊಣೆಗಾರಿಕೆಯನ್ನು ಆಯಾ ಬ್ಯಾಂಕ್‌ಗಳಿಗೆ ನೀಡಲಾಗಿದೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಬ್ಯಾಂಕ್‌ಗಳಿಗೆ ಪತ್ರ ಬರೆದು ನೋಟಿಸ್ ನೀಡಿದ್ದಾರೆ. ಇನ್ನು ಮುಂದೆ ಇಂತಹ ತಾಂತ್ರಿಕ ದೋಷಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ನಾಯಕತ್ವ ಬದಲಾವಣೆ ಬಗ್ಗೆ ಸಚಿವರ ಪ್ರತಿಕ್ರಿಯೆ
ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿರುವ ನಾಯಕತ್ವ ಬದಲಾವಣೆ ಅಥವಾ ಸಂಪುಟ ವಿಸ್ತರಣೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮೀ ಹೆಬ್ಬಾಳಕರ್, ನಾಯಕತ್ವ ಬದಲಾವಣೆಯ ಬಗ್ಗೆ ನನಗೆ ಮಾಹಿತಿಯಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ. ಡಿಕೆಶಿ ಅವರ ತಾಳ್ಮೆ ಮತ್ತು ಶ್ರಮಕ್ಕೆ ಫಲ ಸಿಗುತ್ತಾ ಎಂಬುದು ಕೂಡ ಹೈಕಮಾಂಡ್‌ಗೆ ಬಿಟ್ಟ ವಿಚಾರ. ನೀವು ಎಷ್ಟು ಬಾರಿ ಕೇಳಿದರೂ ನನ್ನ ಉತ್ತರ ಇದೇ, ಎಂದು ಮಾರ್ಮಿಕವಾಗಿ ನುಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ