
ಬೆಂಗಳೂರು (ಜ.25): ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ನೀಡಿದ ವಿವಾದಾತ್ಮಕ ಹೇಳಿಕೆಯ ಕಿಡಿ ಈಗ ಬೀದಿಗೆ ಬಂದಿದೆ. ರಾಜಾಜಿನಗರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ ಘಟನೆ ವರದಿಯಾಗಿದ್ದು, ಈ ಸಂಬಂಧ ಬಸವೇಶ್ವರ ನಗರ ಪೊಲೀಸರು ಒಬ್ಬರನ್ನು ಬಂಧಿಸಿದ್ದಾರೆ.
ಮೊನ್ನೆ ವಿಧಾನಸಭೆಯ ಕಲಾಪದ ವೇಳೆ ಶಾಸಕ ಸುರೇಶ್ ಕುಮಾರ್ ಅವರು ಸಚಿವ ಬೈರತಿ ಸುರೇಶ್ ಅವರನ್ನು ಉದ್ದೇಶಿಸಿ, 'ಏಳು ತಿಂಗಳಿಗೆ ಹುಟ್ಟಿದರೆ ಹೀಗೆ' ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿತ್ತು. ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸುರೇಶ್ ಕುಮಾರ್ ತಮ್ಮ ಮಾತನ್ನು ವಾಪಸ್ ಪಡೆದಿದ್ದರು.
ಸದನದಲ್ಲಿ ಹೇಳಿಕೆ ವಾಪಸ್ ಪಡೆದಿದ್ದರೂ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ತಣ್ಣಗಾಗಿಲ್ಲ. ಸುರೇಶ್ ಕುಮಾರ್ ಅವರು ಕೇವಲ ಹೇಳಿಕೆ ವಾಪಸ್ ಪಡೆದರೆ ಸಾಲದು, ರಾಜ್ಯದ ಮಹಿಳೆಯರ ಮತ್ತು ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ನಿವಾಸದ ಗೋಡೆಗಳಿಗೆ ಪೋಸ್ಟರ್ ಅಂಟಿಸಿದ್ದಾರೆ. 'ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಲಿ' ಎಂಬ ಘೋಷಣೆಗಳುಳ್ಳ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಪ್ರತಿಭಟನೆ ದಾಖಲಿಸಿದ್ದಾರೆ.
ತಮ್ಮ ನಿವಾಸಕ್ಕೆ ಪೋಸ್ಟರ್ ಅಂಟಿಸಿದ ವಿಚಾರವಾಗಿ ಶಾಸಕ ಸುರೇಶ್ ಕುಮಾರ್ ಅವರು ಬಸವೇಶ್ವರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಎಫ್‌ಐಆರ್ (FIR) ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಕಾಂಗ್ರೆಸ್ ಕಾರ್ಯಕರ್ತ ಶಂಕರ್ ಗೌಡ ಎಂಬುವವರನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತನ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬಸವೇಶ್ವರ ನಗರ ಪೊಲೀಸ್ ಠಾಣೆಯತ್ತ ಧಾವಿಸುತ್ತಿದ್ದಾರೆ. ರಾಜಕೀಯ ದ್ವೇಷದಿಂದ ಬಂಧನ ಮಾಡಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ. ಇದರಿಂದಾಗಿ ರಾಜಾಜಿನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರ ನಿವಾಸಕ್ಕೆ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತನ ಬಂಧನವಾದ ಬೆನ್ನಲ್ಲೇ, ಈಗ ಕಾಂಗ್ರೆಸ್ ಪಾಳೆಯ ಶಾಸಕರ ವಿರುದ್ಧವೇ ಪೊಲೀಸ್ ಮೆಟ್ಟಿಲೇರಿದೆ. ಶಾಸಕರು ಕ್ಷೇತ್ರದಲ್ಲಿ ಅಕ್ರಮವಾಗಿ ಫ್ಲೆಕ್ಸ್ ಅಳವಡಿಸುವ ಮೂಲಕ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಸವೇಶ್ವರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕ್ಷೇತ್ರದಲ್ಲಿ ಆಯೋಜಿಸಲಾಗಿರುವ 'ಹಿಂದೂ ಸಭಾ' ಕಾರ್ಯಕ್ರಮದ ನಿಮಿತ್ತ ಶಾಸಕ ಸುರೇಶ್ ಕುಮಾರ್ ಅವರ ಭಾವಚಿತ್ರವಿರುವ ಬೃಹತ್ ಫ್ಲೆಕ್ಸ್‌ಗಳನ್ನು ರಾಜಾಜಿನಗರದಾದ್ಯಂತ ಅಳವಡಿಸಲಾಗಿದೆ. 'ನಗರದಲ್ಲಿ ಫ್ಲೆಕ್ಸ್ ಅಳವಡಿಕೆ ಮಾಡಬಾರದು ಎಂಬ ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ನಿಯಮಗಳಿದ್ದರೂ, ಶಾಸಕರು ಕಾನೂನನ್ನು ಗಾಳಿಗೆ ತೂರಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಫ್ಲೆಕ್ಸ್ ಅಳವಡಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದಿದ್ದಾರೆ' ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ತಮ್ಮ ಕಾರ್ಯಕರ್ತ ಶಂಕರ್ ಗೌಡ ಬಂಧನದಿಂದ ಕೆರಳಿರುವ ಕಾಂಗ್ರೆಸ್ ಮುಖಂಡರು, ಶಾಸಕರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದಿದ್ದಾರೆ. 'ನಮ್ಮ ಕಾರ್ಯಕರ್ತ ಪೋಸ್ಟರ್ ಅಂಟಿಸಿದ್ದಕ್ಕೆ ಬಂಧನ ಮಾಡುವುದಾದರೆ, ಸಾವಿರಾರು ಅಕ್ರಮ ಫ್ಲೆಕ್ಸ್ ಹಾಕಿರುವ ಶಾಸಕರ ಮೇಲೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ?' ಎಂದು ಪ್ರಶ್ನಿಸಿದ್ದಾರೆ. ಕೂಡಲೇ ಈ ಅಕ್ರಮ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ, ಶಾಸಕರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಬಸವೇಶ್ವರ ನಗರ ಪೊಲೀಸರಿಗೆ ಆಗ್ರಹಿಸಿದ್ದಾರೆ. ಈ ದೂರಿನಿಂದಾಗಿ ರಾಜಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ವಾಕ್ಸಮರ ಮತ್ತು ಪ್ರತಿಭಟನೆಗಳು ತೀವ್ರಗೊಂಡಿದ್ದು, ಪೊಲೀಸ್ ಇಲಾಖೆಗೆ ಪರಿಸ್ಥಿತಿ ನಿಭಾಯಿಸುವುದು ಸವಾಲಾಗಿ ಪರಿಣಮಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ