ಮಂತ್ರಿಗಳ ಮಾನಗೇಡಿ ಕೃತ್ಯ ಸಮರ್ಥನೆ ಮಾಡುವ ಲಜ್ಜೆಗೇಡಿ ಸಿಎಂ ರಾಜ್ಯಕ್ಕೆ ವಕ್ಕರಿಸಿದ್ದಾರೆ: ಎಚ್‌ಡಿಕೆ

By Ravi Janekal  |  First Published Aug 8, 2023, 8:26 AM IST

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ.  ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ?


ಬೆಂಗಳೂರು (ಆ.7):  ಮಂಡ್ಯ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಹಣದ ಬೇಡಿಕೆ ಇಟ್ಟಿದ್ದಾರೆ ಎಂಬರ್ಥದಲ್ಲಿ ರಾಜ್ಯಪಾಲರಿಗೆ ದೂರು ನೀಡಿರುವ ಪತ್ರದ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ತನಿಖೆಗೆ ಮೊದಲೇ 'ಇದೊಂದು ನಕಲಿ ಪತ್ರ' ಎಂಬ ಹೇಳಿಕೆ ನೀಡಿದ್ದಾರೆ. ಸಿಎಂ ಹೇಳಿಕೆ ವಿರುದ್ಧ ಎಚ್‌ಡಿಕೆ ಸರಣಿ ಟ್ವೀಟ್ ಮೂಲಕ  ವಾಗ್ದಾಳಿ ನಡೆಸಿದ್ದಾರೆ. 

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ.  ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಎಂದು ಹರಿಹಾಯ್ದಿದ್ದಾರೆ.

Tap to resize

Latest Videos

ಸಚಿವ ಚಲುವರಾಯ ವಿರುದ್ಧದ ಪತ್ರ ನಕಲಿ: ಸಿಎಂ ಸಿದ್ದರಾಮಯ್ಯ

ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ 'ಎತ್ತುವಳಿ ಗಿರಾಕಿ'ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಕುಟುಕಿರುವ ಎಚ್ಡಿಕೆ ಅವರು ಮುಂದುವರಿದು,  ನಿಮ್ಮ ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಕೃಷಿ ಸಚಿವ ಚಲುವರಾಯಸ್ವಾಮಿಗೆ ಮಂತ್ರಿಗಿರಿ ಕುರ್ಚಿ ಕಂಟಕ: ಕಂಡಕ್ಟರ್ ಆಯ್ತು, ಈಗ ಕೃಷಿ ಅಧಿಕಾರಿಗಳಿಂದ ಆತ್ಮಹತ್ಯೆ ಬೆದರಿಕೆ

ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್'ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ? ಎಂದು ಪ್ರಶ್ನೆಗಳ ಸುರಿಮಳೆಗೈದು ವಾಗ್ದಾಳಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

click me!