ಮುಂಗಾರು ಚುರುಕು: 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರಂಭ, ಕೊಚ್ಚಿ ಹೋಯ್ತು ಹೆದ್ದಾರಿ

Published : Jun 08, 2026, 06:09 AM IST
Rain

ಸಾರಾಂಶ

ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಳ್ಳಾರಿಯಲ್ಲಿ ನೆರೆಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ ಮತ್ತು 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಬೆಂಗಳೂರು:  ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕೊಡಗು, ಕರಾವಳಿ, ಮಲೆನಾಡು ಸೇರಿ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ. ಬಳ್ಳಾರಿಯಲ್ಲಿ ಶನಿವಾರ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಗರ ಹೊರವಲಯದ ಅಂದ್ರಾಳ್‌ ಹಳ್ಳದಲ್ಲಿ ಮಹಿಳೆಯೊಬ್ಬಳು ನೆರೆಯ ನೀರಲ್ಲಿ ಕೊಚ್ಚಿ ಹೋಗಿದ್ದಾಳೆ.

ನಗರದ ಸೂರ್ಯ ಕಾಲೋನಿ ನಿವಾಸಿ ಫಾತಿಮಾ (38) ಮೃತ ಮಹಿಳೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ ಉದ್ಯೋಗಿಯಾಗಿದ್ದ ಅವರು, ಶನಿವಾರ ರಾತ್ರಿ ಬ್ಯಾಂಕ್ ಸಿಬ್ಬಂದಿಯೊಂದಿಗೆ ಹೋಟೆಲ್‌ಗೆ ಊಟಕ್ಕೆ ತೆರಳಿದ್ದರು. ಊಟ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುವಾಗ ಹಳ್ಳದಲ್ಲಿ ಬಂದಿದ್ದ ನೆರೆಯ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಭಾನುವಾರ ಬೆಳಗ್ಗೆ ಹಳ್ಳದ ಬಳಿಯ ಬೇಲಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಇದೇ ವೇಳೆ, ಮಳೆಯ ನೀರು ವಿಮ್ಸ್‌ ಆಸ್ಪತ್ರೆಗೂ ನುಗ್ಗಿದ್ದು, ರಾತ್ರಿಯಿಡಿ ಮಳೆಯ ನೀರನ್ನು ಹೊರಹಾಕುವಲ್ಲಿ ಸಿಬ್ಬಂದಿ ನಿರತರಾಗಿದ್ದರು.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಗೋಕರ್ಣದ ಹಿತ್ತಲಮಕ್ಕಿ ಬಳಿ ಭಾರಿ ಗಾಳಿಗೆ ಬೃಹತ್‌ ಮಾವಿನ ಮರವೊಂದು ಪ್ರವಾಸಿಗರ ವಾಹನದ ಮೇಲೆ ಬಿದ್ದಿದ್ದು, ಅದರೊಳಗಿದ್ದ ಪ್ರವಾಸಿಗರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಧ್ಯಾಹ್ನದ ನಂತರ ವರುಣ ಅಬ್ಬರಿಸಿದ್ದು, ಉಣಕಲ್‌ ಕೆರೆ ಬಳಿಯ ಬಿಆರ್‌ಟಿಎಸ್‌ ಕಾರಿಡಾರ್‌ನಲ್ಲಿ ನೀರು ನಿಂತು ಒಂದೂವರೆ ಗಂಟೆಗೂ ಅಧಿಕ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಧಾರವಾಡ ಜಿಲ್ಲೆ ನವಲಗುಂದ ಸೇರಿ ತಾಲೂಕಿನಾದ್ಯಂತ ಸುರಿದ ಭಾರೀ ಮಳೆಗೆ ಬೆಣ್ಣೆಹಳ್ಳ, ತುಪ್ಪರಿಹಳ್ಳ ಸೇರಿ ವಿವಿಧ ಹಳ್ಳಗಳು ತುಂಬಿ ಹರಿಯುತ್ತಿವೆ. ನವಲಗುಂದ ತಾಲೂಕಿನ ಶಾನವಾಡ ಗ್ರಾಮದ ತಳವಾರ ಓಣಿಯಲ್ಲಿನ ಮನೆಗಳಿಗೆ ನೀರು ನುಗ್ಗಿ, ಜನರು ಬವಣೆ ಪಡುವಂತಾಗಿದೆ.

ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಮಳೆಗೆ ಚಿಮ್ಮನಚೋಡ-ನರನಾಳ್‌ ಗ್ರಾಮದ ಮಧ್ಯದ ಸೇತುವೆ ಕುಸಿದಿದೆ. ಹಾವೇರಿ ಸುತ್ತಮುತ್ತ ಮಳೆ ಆರ್ಭಟಿಸಿದ್ದು, ನಗರ ಸಮೀಪದ ಅಗಡಿ ಹಳ್ಳ ತುಂಬಿ ಹರಿದು, ಸಂಚಾರ ಸ್ಥಗಿತಗೊಂಡಿತ್ತು. ಹರಿಹರ-ಸಮ್ಮಸಗಿ ರಾಜ್ಯ ಹೆದ್ದಾರಿ ಕೊಚ್ಚಿ ಹೋಗಿದ್ದು, ವಾಹನ ಸಂಚಾರ ದುಸ್ತರವಾಗಿದೆ.

ಇದೇ ವೇಳೆ, ಚಿಕ್ಕಮಗಳೂರು, ಬೆಳಗಾವಿ, ಗದಗ, ಬಾಗಲಕೋಟೆ ಕೊಡಗು, ಬೆಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಿದೆ.

ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ, ರೆಡ್ ಅಲರ್ಟ್‌:

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.8ರಿಂದ 10ರವರೆಗೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಧಾರವಾಡ, ಉಡುಪಿ, ಹಾವೇರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜೂ.8ರಿಂದ 10ರ ವರೆಗೆ ಭಾರಿ ಮಳೆಯಾಗಲಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿರುವಂತೆ ಇಲಾಖೆ ಎಚ್ಚರಿಸಿದೆ. 

ಜೂ.8ರಿಂದ 10ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂ.8 ಮತ್ತು 9ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜೂ.10ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಜೈಲಿನಲ್ಲಿ ಶಂಕಿತ ಉಗ್ರರ ಪುಂಡಾಟ; ಧರ್ಮದ ಪರ ಘೋಷಣೆ ಕೂಗಿ ಗದ್ದಲ, ಹಲ್ಲೆ ಯತ್ನ
Karnataka News Live: ಮುಂಗಾರು ಚುರುಕು - 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರಂಭ, ಕೊಚ್ಚಿ ಹೋಯ್ತು ಹೆದ್ದಾರಿ