
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಸಿಡಿಲು ಬಡಿದು ಒಬ್ಬ ಸಾವನ್ನಪ್ಪಿದ್ದು, ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮಧ್ಯೆ, ಧಾರವಾಡ, ಚಿಕ್ಕಮಗಳೂರು ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದೆ.ಗದಗ ತಾಲೂಕಿನ ಚಿಕ್ಕಹಂದಿಗೋಳ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಕುರಿಗಾಹಿ ಮಾಬುಸಾಬ್ ಮುಲ್ಲಾನವರ್ (44) ಶುಕ್ರವಾರ ಮೃತಪಟ್ಟಿದ್ದಾರೆ. 5 ಕುರಿಗಳೂ ಮೃತಪಟ್ಟಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ಅಪರಾಹ್ನ ಧಾರಾಕಾರ ಮಳೆಯಾಗಿದ್ದು, ಉಪ್ಪಿನಂಗಡಿ ಸಮೀಪ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆದ್ರೋಡಿಯಿಂದ ಕಾಂಚನ ಕ್ರಾಸ್‌ವರೆಗಿನ ಪ್ರದೇಶದಲ್ಲಿ ಹೆದ್ದಾರಿ ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕಿನ ಕೌಡಿಚ್ಚಾರ್ ಸಮೀಪ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು, ಸುಮಾರು 2 ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಈ ಮಧ್ಯೆ, ಮೂಲ್ಕಿ ಸಮೀಪದ ಅತ್ತೂರು ಬಳಿ ಮನೆಗೆ ಸಿಡಿಲು ಬಡಿದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ ಸೇರಿ ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಿದೆ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಶನಿವಾರವೂ ಕೆಲ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅ.24ರಂದು ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಹಾಗೂ ಉತ್ತರ ಒಳನಾಡಿನ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅ.29ರ ವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅ.23ರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಕುಂದಾಪುರದಲ್ಲಿ 6 ಸೆಂ.ಮೀ, ತರೀಕೆರೆ 5 ಸೆಂ.ಮೀ, ಕೊಣನೂರು, ಚಿಂತಾಮಣಿ, ಹೊನಕೆರೆ, ಚಿಕ್ಕಬಳ್ಳಾಪುರ, ಪೊನ್ನಂಪೇಟೆ, ಧರ್ಮಸ್ಥಳ, ಸುಬ್ರಹ್ಮಣ್ಯ, ಬ್ರಹ್ಮಾವರದಲ್ಲಿ ತಲಾ 3 ಸೆಂ.ಮೀ, ಬಂಟ್ವಾಳ, ಸಿದ್ದಾಪುರ, ಕೊಲ್ಲೂರು, ಮಂಗಳೂರು, ಮಂಕಿ, ಬೆಂಗಳೂರು ನಗರ, ತಿಪಟೂರು, ಎನ್.ಆರ್. ಪುರ, ಕಳಸ, ಮಧುಗಿರಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದ ಮೆಜೆಸ್ಟಿಕ್, ಮಲ್ಲೇಶ್ವರಂ, ಹೆಬ್ಬಾಳ, ಯಶವಂತಪುರ, ವಿಧಾನಸೌಧ, ಆರ್.ಟಿ. ನಗರ, ಶಿವಾಜಿನಗರ ಹಾಗೂ ಬಸವನಗುಡಿ ಸೇರಿದಂತೆ ಹಲವು ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಈ ಮಳೆಯು ಇನ್ನೆರಡು ದಿನಗಳ ಕಾಲ ಮುಂದುವರೆಯಲಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳು ಹಾಗೂ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣದೊಂದಿಗೆ ಬಿರುಗಾಳಿ ಸಹಿತ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಭಾಗದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ