
ಬೆಂಗಳೂರು (ಜು.24): ರಾಜ್ಯದ ಕರಾವಳಿ ವ್ಯಾಪ್ತಿಯ ಕೆಲವೆಡೆ ಮುಂಗಾರು ಚುರುಕುಗೊಂಡಿದೆ. ಮಹಾರಾಷ್ಟ್ರದ ಪಶ್ಚಿಮ ಘಟದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಬೆಳಗಾವಿ ವ್ಯಾಪ್ತಿಯ ನದಿಗಳು ತುಂಬಿ ಹರಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಲ್ಲಿ ಗುರುವಾರ ವ್ಯಾಪಕ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಲವೆಡೆ ಗುರುವಾರ ಸಾಧಾರಣ ಮಳೆಯಾಗಿದೆ. ಆದರೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ವ್ಯಾಪ್ತಿ ಗುರುವಾರ ಯೆಲ್ಲೋ ಅಲರ್ಟ್ ಹೊರತೂ ಭಾರಿ ಪ್ರಮಾಣದಲ್ಲಿ ಮಳೆಯಾಗಿಲ್ಲ.
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ದೂಧಗಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ನದಿ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಹೊರವಲಯದ ಮುಲ್ಲಾನ್ಕಿ ತೋಟದಲ್ಲಿರುವ ಐತಿಹಾಸಿಕ ಮನ್ಸೂರ್‌ಅಲಿ ದರ್ಗಾ ಜಲಾವೃತಗೊಂಡಿದೆ. ದೂಧಗಂಗಾ ನದಿಗೆ 15 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರು ಹರಿದು ಬರುತ್ತಿದೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ಕೂಡ ಮಳೆಯಾರ್ಭಟ ಮುಂದುವರಿದಿದೆ. ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕು ವ್ಯಾಪ್ತಿಯ ಐದು ಕೆಳಹಂತದ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ.
ಕೃಷ್ಣಾ ನದಿಯ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆ ಆಗುತ್ತಿದೆ. ಜೊತೆಗೆ ಆಲಮಟ್ಟಿ ಜಲಾಶಯಕ್ಕೆ ಗುರುವಾರ ರಾತ್ರಿ 71,750 ಕ್ಯುಸೆಕ್ ನೀರು ಬರುತ್ತಿದ್ದು, 67,500 ಕ್ಯುಸೆಕ್ ಹೊರಗೆ ಬಿಡಲಾಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಲ್ಲಿ ಗುರುವಾರ ವ್ಯಾಪಕ ಮಳೆಯಾಗಿದೆ. ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಮುಂಡಗೋಡದಲ್ಲಿ ಭಾರಿ ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದಿದೆ. ಯಲ್ಲಾಪುರ ಕಳಚೆ ರಸ್ತೆಯ ಮೇಲೆ ಗುಡ್ಡ ಕುಸಿದು ಬೆಳಗ್ಗೆ 3-4 ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಶಿರಸಿಯಲ್ಲಿ ನಿರಂತರವಾಗಿ ಮಳೆ ಸುರಿದಿದೆ. ಕರಾವಳಿ ತಾಲೂಕುಗಳಾದ ಕುಮಟಾ, ಕಾರವಾರ ಅಂಕೋಲಾಗಳಲ್ಲೂ ಉತ್ತಮ ಮಳೆಯಾಗಿದೆ.
ಮಂಗಳೂರು ವ್ಯಾಪ್ತಿ ಗುರುವಾರ ಯೆಲ್ಲೋ ಅಲರ್ಟ್ ಹೊರತೂ ಭಾರಿ ಪ್ರಮಾಣದಲ್ಲಿ ಮಳೆಯಾಗಿಲ್ಲ. ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದರೂ ದಿನದಲ್ಲಿ ಆಗಾಗ ಒಂದಷ್ಟು ಮಳೆ ಬಂದು ಹೋಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ