
ಬೆಂಗಳೂರು (ಮಾ.19): ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅನುಮತಿಸಿದ ಕ್ರಮ ಎತ್ತಿಹಿಡಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಜೂ.8ಕ್ಕೆ ಮುಂದೂಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿವಾದಿತ ಭೂಮಿಯ ಮೂಲ ಮಾಲೀಕ ಜೆ.ದೇವರಾಜು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ, ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಮತ್ತು ನ್ಯಾಯಮೂರ್ತಿ ತಾರಾ ವಿತಾಸ್ತಾ ಗಂಜು ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಸಿಎಂ ಸಿದ್ದರಾಮಯ್ಯ ಪರ ವಕೀಲರು, ಮೇಲ್ಮನವಿ ವಿಚಾರಣೆ ಮುಂದೂಡುವಂತೆ ಕೋರಿದರು. ಈ ಮನವಿಗೆ ಒಪ್ಪಿದ ಪೀಠ, ಮೇಲ್ಮನವಿಗಳನ್ನು ಜೂ.8ಕ್ಕೆ ಮುಂದೂಡಿತು. ಇದರೊಂದಿಗೆ ಸತತ 10ನೇ ಬಾರಿಗೆ ಮೇಲ್ಮನವಿಯ ವಿಚಾರಣೆ ಮುಂದೂಡಿಕೆಯಾಗಿದೆ.
ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ತನಿಖೆಗೆ ರಾಜ್ಯಪಾಲರು ಅನುಮತಿಸಿದ್ದ ಆದೇಶವನ್ನು ಏಕಸದಸ್ಯ ಪೀಠವು 2024ರ ಸೆ.24ರಂದು ಎತ್ತಿ ಹಿಡಿದಿತ್ತು. 1 ತಿಂಗಳ ಬಳಿಕ ಸಿದ್ದರಾಮಯ್ಯ ಅವರು ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ವಿವಾದಿತ ಭೂಮಿಯ ಮಾಲೀಕ ದೇವರಾಜು ಸಹ ಮೇಲ್ಮನವಿ ಸಲ್ಲಿಸಿದ್ದರು.
2024ರ ಅ.1ರಂದು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತನಗೆ ಮಂಜೂರು ಮಾಡಿರುವ 14 ನಿವೇಶನಗಳನ್ನು ಹಿಂಪಡೆಯುವಂತೆ ಮುಡಾಗೆ ಪತ್ರ ಬರೆದಿದ್ದರು. ಇದನ್ನು ಪರಿಗಣಿಸಿ ಅಂದೇ ಮುಡಾವು ನಿವೇಶನಗಳ ಕ್ರಯಪತ್ರ ರದ್ದುಪಡಿಸಿತ್ತು.
ನಂತರ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಅವರ ಭಾವಮೈದುನ ಮಲ್ಲಿಕಾರ್ಜುನಸ್ವಾಮಿ ಮತ್ತು ಆಕ್ಷೇಪಾರ್ಹವಾದ ಭೂಮಿಯ ಮಾಲೀಕ ಜೆ.ದೇವರಾಜ್ ಅವರ ವಿರುದ್ಧ ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಜ.28ರಂದು ಒಪ್ಪಿಕೊಂಡಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ