
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸಂಬಂಧಿಸಿದ ಬಹುಚರ್ಚಿತ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರುವ ಕಾನೂನು ಪ್ರಕ್ರಿಯೆಗಳು ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮತಿ ನೀಡಿದೆ.
ಲೋಕಾಯುಕ್ತ ಪೊಲೀಸರು ಹೆಚ್.ವಿ.ರಾಜೀವ್ ವಿರುದ್ಧ ತನಿಖೆ ನಡೆಸಲು ಅಗತ್ಯವಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ಕೋರಿ ಸಲ್ಲಿಸಿದ್ದ ಮನವಿಯನ್ನು, ಸುಮಾರು ಏಳು ತಿಂಗಳ ಬಳಿಕ ನಗರಾಭಿವೃದ್ಧಿ ಇಲಾಖೆ ಪುರಸ್ಕರಿಸಿದೆ. ಈ ಸಂಬಂಧ ಕಾನೂನು ಇಲಾಖೆಯು ವಿಷಯವನ್ನು ರಾಜ್ಯ ಸಚಿವ ಸಂಪುಟದ ಮುಂದೆ ಚರ್ಚೆಗೆ ತಂದಿದ್ದು, ಅಂತಿಮವಾಗಿ ಸರ್ಕಾರ ತನಿಖೆಗೆ ಅಸ್ತು ನೀಡಿದೆ.
ಸರ್ಕಾರದ ಈ ನಿರ್ಧಾರದಿಂದಾಗಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೆಚ್.ವಿ.ರಾಜೀವ್ ವಿರುದ್ಧ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಪ್ರಕರಣದ ತನಿಖೆಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
ಮುಡಾ ಪ್ರಕರಣವು ಈಗಾಗಲೇ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಇದರ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಸರ್ಕಾರ ನೀಡಿರುವ ತನಿಖೆ ಅನುಮತಿ ಮುಂದಿನ ದಿನಗಳಲ್ಲಿ ಪ್ರಕರಣದ ದಿಕ್ಕು ಮತ್ತು ಪರಿಣಾಮಗಳನ್ನು ನಿರ್ಧರಿಸುವ ಪ್ರಮುಖ ಬೆಳವಣಿಗೆಯಾಗಿ ಕಾಣಿಸಿಕೊಂಡಿದೆ.
ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ನಾಲ್ವರು ಆರೋಪಿಗಳ ವಿರುದ್ಧ ಲೋಕಾಯುಕ್ತ ತನಿಖಾಧಿಕಾರಿ ಸಲ್ಲಿಸಿರುವ ‘ಬಿ’ ರಿಪೋರ್ಟ್‌ಗೆ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜ.22ಕ್ಕೆ ಆದೇಶ ಕಾಯ್ದಿರಿಸಿದೆ.
ಈ ‘ಬಿ’ ರಿಪೋರ್ಟ್‌ಗೆ ಆಕ್ಷೇಪಿಸಿ ಸಾಮಾಜಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಾಲಯ ಮಂಗಳವಾರ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿ ಜ.22ಕ್ಕೆ ತೀರ್ಪು ಕಾಯ್ದಿರಿಸಿತು.
ಈ ವೇಳೆ ಲೋಕಾಯುಕ್ತ ಪರ ವಿಶೇಷ ಅಭಿಯೋಜಕರು ಪ್ರಕರಣದ ಅಂತಿಮ ವರದಿ ಕುರಿತ ಕೆಲ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದರು. ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಜ.17ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಇದೇ ವೇಳೆ ಸೂಚಿಸಿತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ(ಮುಡಾ) ಅಕ್ರಮವಾಗಿ 14 ಬದಲಿ ನಿವೇಶನ ಪಡೆದ ಆರೋಪದಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಬಾವಮೈದುನ ಮಲ್ಲಿಕಾರ್ಜುನಸ್ವಾಮಿ, ದೇವರಾಜು ಹಾಗೂ ಇತರರ ವಿರುದ್ಧ ಸ್ನೇಹಮಯಿ ಕೃಷ್ಣ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಈ ನಾಲ್ವರು ಆರೋಪಿಗಳ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಕಾರಣ ನೀಡಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ ರಿಪೋರ್ಟ್‌ಗೆ ಸ್ನೇಹಮಯಿ ಕೃಷ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ