
ಬೆಂಗಳೂರು (ಜ.27): ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಹಗರಣದ ಕೇಸಿನಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ನೋಟೀಸ್ ಜಾರಿ ಮಾಡಿತ್ತು. ಆದರೆ, ಇಡಿ ನೋಟೀಸ್ ಪ್ರಶ್ನಿಸಿ ಬೈರತಿ ಸುರೇಶ್ ಹಾಗೂ ಪಾರ್ವತಿ ಸಿದ್ದರಾಮಯ್ಯ ಅವರು ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಫೆ.10ರವರೆಗೆ ಇಡಿ ತನಿಖೆಗೆ ತಾತ್ಕಾಲಿಕ ತಡೆಯನ್ನು ನೀಡಿ ಆದೇಶ ಹೊರಡಿಸಲಾಗಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಎ-1 ಆರೋಪಿ ಆಗಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಇಲಾಖೆಯಲ್ಲಿ ತನಿಖೆ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಇಡಿಯಿಂದ ತನಿಖೆ ಮಾಡುವಂತೆ ಸ್ನೇಹಮಯಿ ಕೃಷ್ಣ ಅವರು ಪತ್ರವನ್ನೂ ಬರೆದು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಅಧೀನದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಡಾ ನಿವೇಶನ ಹಂಚಿಕೆ ಪ್ರಕರಣದ ಬಗ್ಗೆ ವಿಚಾರಣೆ ಮಾಡುವುದಕ್ಕೆ ಪಾರ್ವತಿ ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದ್ದರು. ಜೊತೆಗೆ, ತನಿಖೆಯ ಭಾಗವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೂ ನೋಟೀಸ್ ಜಾರಿ ಮಾಡಲಾಗಿತ್ತು. ಇದರ ಬೆನ್ನಲ್ಲಿಯೇ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರು ಇಡಿ ವಿಚಾರಣೆಗೆ ಅನುಮತಿ ನೀಡಬಾರದು ಎಂದು ಹೈಕೋರ್ಟ್ ಮೊರೆ ಹೋಗಿದ್ದರು.
ಈ ಪ್ರಕರಣ ವಿಚಾರಣೆ ಮಾಡಿದ ಹೈಕೋರ್ಟ್ ಪೀಠವು ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ವಿಚಾರಣೆಗೆ ಬರುವಂತೆ ನೀಡಲಾದ ನೋಟೀಸ್‌ಗೆ ತಾತ್ಕಾಲಿಕ ತಡೆ ನೀಡಿ ಆದೇಶ ಹೊರಡಿಸಿದೆ. ಜೊತೆಗೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.10ರಂದು ಮುಂದಿನ ವಿಚಾರಣೆ ಮಾಡುವುದಾಗಿ ಮುಂದೂಡಿಕೆ ಮಾಡಿದೆ. ಆದ್ದರಿಂದ ಪಾರ್ವತಿ ಸಿದ್ದರಾಮಯ್ಯ ಹಾಗೂ ಬೈರತಿ ಸುರೇಶ್ ಅವರಿಗೆ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ