
ಉತ್ತರ ಕನ್ನಡ/ಬೆಂಗಳೂರು (ಡಿ.11): ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ. ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕೋಲಾರ ಮುಳುಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತರಲಾಗಿತ್ತು. ನಿನ್ನೆ ಸಮುದ್ರದಲ್ಲಿ 7 ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. ಆ ಪೈಕಿ ಮೂವರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಣೆ ಮಾಡಿದ್ರೆ ಶ್ರಾವಂತಿ ಎಂಬಾಕೆ ತುಂಬಾ ನೀರು ಕುಡಿದಿದ್ದರಿಂದ ಸಾವನ್ನಪ್ಪಿದ್ದಳು. ಇನ್ನು ದೀಕ್ಷಾ, ಲಾವಣ್ಯ, ವಂದನಾ ನೀರಿನಲ್ಲಿ ಕೊಚ್ಚಿ ಹೋಗಿ ಕಾಣೆಯಾಗಿದ್ದು, ಇಂದು ಮೃತದೇಹಗಳ ಸಮುದ್ರ ತೀರಕ್ಕೆ ತೇಲಿಕೊಂಡು ಬಂದಿವೆ.
ಮೊರಾರ್ಜಿ ವಸತಿ ಶಾಲೆಯಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಒಟ್ಟು 57 ಮಂದಿ ಪ್ರವಾಸಕ್ಕೆ ಬಂದಿದ್ದರು. ಆದರೆ, ಸಮುದ್ರದಲ್ಲಿ ಅಲೆಯ ಹೊಡೆತದಿಂದ 7 ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಈ ದುರ್ಘಟನೆಯಲ್ಲಿ ಒಟ್ಟು 4 ಮಂದಿ ದಾರುಣ ಸಾವು ಸಂಭವಿಸಿದ್ದು, ಇದಕ್ಕೆ ಶಿಕ್ಷಕರು ಹಾಗೂ ಪ್ರವಾಸೋದ್ಯಮ ಇಲಾಖೆಯ ನಿರ್ಲಕ್ಷ್ಯವೇ ವಿದ್ಯಾರ್ಥಿನಿಯರ ಸಾವಿಗೆ ಕಾರಣ ಎಂದು ಮೃತ ವಿದ್ಯಾರ್ಥಿಗಳ ಪೋಷಕರು ಕೋಲಾರದಲ್ಲಿ ಆಕ್ರಂದನದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ