
ಮೈಸೂರು (ಜೂ.16): ವಿಶ್ವ ಯೋಗ ದಿನಾಚರಣೆಗೆ ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಸರಾ ಮಾದರಿಯಲ್ಲಿ ದೀಪಾಲಂಕಾರದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಉಳಿದುಕೊಳ್ಳುವ ಹೊಟೇಲ್, ಸಂಚರಿಸುವ ಮಾರ್ಗಗಳಲ್ಲಿ ಕೈಗೊಳ್ಳಬೇಕಿರುವ ಭದ್ರತೆ, ರಸ್ತೆಗಳ ಸ್ಥಿತಿಗತಿಗಳನ್ನು ಬುಧವಾರ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಭೇಟಿ ನೀಡುವ ಅರಮನೆ, ಅವರು ಸಂಚರಿಸುವ ರಸ್ತೆಗಳಲ್ಲಿ ದಸರಾ ಮಾದರಿ ದೀಪಾಲಂಕಾರ ಮಾಡಲು ಸೆಸ್ಕ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೀದಿ ದೀಪಗಳ ವ್ಯವಸ್ಥೆ ಸರಿಪಡಿಸಲು ಸೂಚಿಸಲಾಗಿದೆ ಎಂದರು.
ವಾಹನಗಳ ಪಾರ್ಕಿಂಗ್ ಸ್ಥಳಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಗುರುತಿಸಲಿದ್ದಾರೆ. ಪ್ರಧಾನಿ ಮೈಸೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಪಾದಚಾರಿ ಮಾರ್ಗಗಳ ದುರಸ್ತಿ, ರಸ್ತೆಗಳ ಡಾಂಬರೀಕರಣಕ್ಕೆ . 15 ಕೋಟಿ ವೆಚ್ಚವಾಗಲಿದೆ ಎಂದು ಪಾಲಿಕೆ ಅಂದಾಜು ಮಾಡಲಾಗಿದ್ದು, . 10 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. 15 ರಸ್ತೆಗಳ ಡಾಂಬರೀಕರಣ, ಪಾದಚಾರಿ ಮಾರ್ಗ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಮಂಗಳವಾರ ಮಳೆಯಾದ ಹಿನ್ನೆಲೆಯಲ್ಲಿ ಎರಡು ರಸ್ತೆಗಳ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆ ನಿಂತ ಕೂಡಲೇ ಆ ರಸ್ತೆಗಳ ಕಾಮಗಾರಿ ಮುಕ್ತಾಯವಾಗಲಿದೆ ಎಂದರು.
BBMP Elections: ಮೋದಿ ಶೋ ನಡೆಸಿ ಚುನಾವಣೆಗೆ ಬಿಜೆಪಿ ಸಿದ್ಧತೆ?
ಪ್ರಧಾನಿ ಸಂವಾದ: ಕಳೆದ ಮೂರು ವರ್ಷಗಳಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ. ಎಷ್ಟುಜನರೊಂದಿಗೆ ಸಂವಾದ ನಡೆಸಬೇಕು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ನೀಡುವ ನಿರ್ದೇಶನದಂತೆ ಆಯೋಜಿಸಲಾಗುವುದು. ಸಂವಾದ ಕಾರ್ಯಕ್ರಮ ವೀಕ್ಷಿಸಲು 60 ಸಾವಿರ ಜನರಿಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಕಡೆ 30 ಸಾವಿರ, ಎರಡು ಕಡೆಗಳಲ್ಲಿ ತಲಾ 15 ಸಾವಿರ ಜನರು ಕಾರ್ಯಕ್ರಮ ವೀಕ್ಷಿಸಬಹುದಾಗಿದೆ ಎಂದು ಅವರು ವಿವರಿಸಿದರು.
ಪ್ರಧಾನಮಂತ್ರಿ ಜೊತೆ ಯಾರು ವೇದಿಕೆ ಹಂಚಿಕೊಳ್ಳಬೇಕು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಲಿದ್ದು, ಅದರಂತೆ ಪಾಲನೆ ಮಾಡಲಾಗುವುದು. ಸುತ್ತೂರು ಮಠ, ಚಾಮುಂಡಿಬೆಟ್ಟವೀಕ್ಷಣೆ ಮಾಡುವಂತೆ ಪ್ರಧಾನಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಅನರು ಹೇಳಿದರು. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ, ಮೈಲ್ಯಾಕ್ ಅಧ್ಯಕ್ಷ ಎನ್.ವಿ. ಫಣೀಶ್ ಮೊದಲಾದವರು ಇದ್ದರು.
ಜೂ. 20, 21ಕ್ಕೆ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಹವಾ..!
ಕೇಂದ್ರ ಸರ್ಕಾರದ ಶಿಷ್ಟಾಚಾರ ಅನ್ವಯ ಎಲ್ಲವು ತೀರ್ಮಾನ ಆಗುತ್ತೆ. ವಿಶ್ವ ಯೋಗ ದಿನಾಚರಣೆಯು ಸಂಪೂರ್ಣ ಕೇಂದ್ರ ಸರ್ಕಾರದ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮ. ರಾಜ್ಯ ಸರ್ಕಾರದಿಂದ ಕಾರ್ಯಕ್ರಮ ನಡೆದಿದ್ರೆ, ನಾವು ಈ ಬಗ್ಗೆ ಕ್ರಮ ಕೈಗೊಳ್ಳಬಹುದಿತ್ತು. ಆದರೆ, ಅವರು ಕೊಡುವ ಸೂಚನೆಯಂತೆ ನಾವು ಕಾರ್ಯಕ್ರಮ ನಡೆಸಬೇಕಿದೆ.
- ಎಸ್.ಟಿ. ಸೋಮಶೇಖರ್, ಜಿಲ್ಲಾ ಉಸ್ತುವಾರಿ ಸಚಿವ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ