
ಬೆಂಗಳೂರು (ಸೆ.18): ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕರ್ನಾಟಕದವರೇ ಆದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಪರಿಗಣಿಸುವಂತೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಮೈಸೂರು ದಸರಾ ನಮ್ಮ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈಭವವನ್ನು ಇಡೀ ಜಗತ್ತಿಗೆ ಪರಿಚಯಿಸುವ ಅಂತರರಾಷ್ಟ್ರೀಯ ಮಟ್ಟದ ಉತ್ಸವ. ಇಂತಹ ಐತಿಹಾಸಿಕ ಉತ್ಸವವನ್ನು ಉದ್ಘಾಟಿಸುವ ಗಣ್ಯರು ನಾಡಿಗೆ ನೀಡಿರುವ ಕೊಡುಗೆಯ ಜೊತೆಗೆ ನಾಡಿನ ಕೀರ್ತಿಯನ್ನು ರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದವರನ್ನು ಪರಿಗಣಿಸುವುದು ಸೂಕ್ತವೆಂದು ಭಾವಿಸುತ್ತೇನೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಮಂಡ್ಯದ ಮಣ್ಣಿನ ಮಗಳಾದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ಹೆಸರನ್ನು ಸರ್ಕಾರ ಪರಿಗಣಿಸುವಂತೆ ಒತ್ತಾಯಪೂರ್ವಕ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದವರಾದ ನ್ಯಾ.ಬಿ.ವಿ.ನಾಗರತ್ನ ಅವರು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಇ.ಎಸ್. ವೆಂಕಟರಾಮಯ್ಯ ಇವರ ಸುಪುತ್ರಿ. ಅವರು ರಾಷ್ಟ್ರದ ಪ್ರಥಮ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ 2027ರ ಸೆಪ್ಟಂಬರ್‌ನಲ್ಲಿ ಅಧಿಕಾರ ಸ್ವೀಕರಿಸುವ ಮೂಲಕ ರಾಷ್ಟ್ರದ ನ್ಯಾಯಾಂಗ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಲಿದೆ. ಅಲ್ಲದೆ, ತಂದೆಯ ನಂತರ ಮಗಳು ಕೂಡ ಆ ಸ್ಥಾನಕ್ಕೆ ಏರಿದ ಅಪರೂಪದ ಇತಿಹಾಸ ನಿರ್ಮಾಣವಾಗಲಿದೆ. ಆದ್ದರಿಂದ, ಸಮಸ್ತ ಮಹಿಳೆಯರ ಪ್ರೇರಣಾ ಶಕ್ತಿ ಸ್ವರೂಪವಾಗಿ ಇವರನ್ನು ಈ ಬಾರಿಯ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿ ಆಹ್ವಾನ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ