
ಬಳ್ಳಾರಿ (ಜು.11): ವಿಧಾನಪರಿಷತ್‌ನ ಮಾಜಿ ಸಭಾಪತಿ, ಹಿರಿಯ ನ್ಯಾಯವಾದಿ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಎನ್. ತಿಪ್ಪಣ್ಣ (97) ಅವರು ಇಂದು ಮುಂಜಾನೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ಕೊನೆಯುಸಿರೆಳೆದರು.
ತಿಪ್ಪಣ್ಣ ಅವರಿಗೆ ಒಬ್ಬ ಪುತ್ರರಿದ್ದು, ಅವರ ಅಂತ್ಯಸಂಸ್ಕಾರವನ್ನು ನಾಳೆ ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ತಿಪ್ಪಣ್ಣ ಅವರ ವೃತ್ತಿಜೀವನ, ಸಾಧನೆಗಳು
ತಿಪ್ಪಣ್ಣ ಅವರು ಹಲವು ವರ್ಷಗಳ ಕಾಲ ನ್ಯಾಯವಾದಿಯಾಗಿ ಸೇವೆ ಸಲ್ಲಿಸಿದ ಬಳಿಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದರು. ಅವರು ನಾಲ್ಕು ಬಾರಿ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದು, ಪ್ರತಿಪಕ್ಷದ ಉಪನಾಯಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕೆಲವು ಕಾಲ ವಿಧಾನಪರಿಷತ್‌ನ ಸಭಾಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿದ್ದ ಅವರು, ಜನತಾದಳದಿಂದ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಳಿಕ ಜೆಡಿಯುನಿಂದ ಜೆಡಿಎಸ್‌ಗೆ ಸೇರಿ, ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ವೀರಶೈವ ಮಹಾಸಭಾದಲ್ಲೂ ಸೇವೆ:
2012ರಲ್ಲಿ ತಿಪ್ಪಣ್ಣ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದಕ್ಕೂ ಮುಂಚೆ ಮಹಾಸಭಾದ ವಿವಿಧ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಮತ್ತು ಇತರ ಹುದ್ದೆಗಳಲ್ಲಿ 20 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು.
ತಿಪ್ಪಣ್ಣ ಅವರ ನಿಧನಕ್ಕೆ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ