ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ 438 ‘ನಮ್ಮ ಕ್ಲಿನಿಕ್‌’ ಪ್ರಾರಂಭ: ಸಚಿವ ಸುಧಾಕರ್‌

Published : Sep 20, 2022, 05:00 AM IST
ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ 438 ‘ನಮ್ಮ ಕ್ಲಿನಿಕ್‌’ ಪ್ರಾರಂಭ: ಸಚಿವ ಸುಧಾಕರ್‌

ಸಾರಾಂಶ

ನಗರ ಪ್ರದೇಶದ ಕೊಳೆಗೇರಿ, ಕೊಳೆಗೇರಿ ಸ್ವರೂಪ ಪಡೆದಿರುವ ಹಾಗೂ ದುರ್ಬಲ ವರ್ಗ ವಾಸಿಸುವ ಸ್ಥಳಗಳಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಹಾಗೂ ಇತರ ಜಿಲ್ಲೆಗಳಲ್ಲಿ 195 ಸೇರಿದಂತೆ ಒಟ್ಟು 438 ‘ನಮ್ಮ ಕ್ಲಿನಿಕ್‌’ಗಳನ್ನು ಅಕ್ಟೋಬರ್‌ ಅಂತ್ಯದೊಳಗೆ ಸಂಪೂರ್ಣವಾಗಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ವಿಧಾನ ಪರಿಷತ್‌ (ಸೆ.20): ನಗರ ಪ್ರದೇಶದ ಕೊಳೆಗೇರಿ, ಕೊಳೆಗೇರಿ ಸ್ವರೂಪ ಪಡೆದಿರುವ ಹಾಗೂ ದುರ್ಬಲ ವರ್ಗ ವಾಸಿಸುವ ಸ್ಥಳಗಳಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಹಾಗೂ ಇತರ ಜಿಲ್ಲೆಗಳಲ್ಲಿ 195 ಸೇರಿದಂತೆ ಒಟ್ಟು 438 ‘ನಮ್ಮ ಕ್ಲಿನಿಕ್‌’ಗಳನ್ನು ಅಕ್ಟೋಬರ್‌ ಅಂತ್ಯದೊಳಗೆ ಸಂಪೂರ್ಣವಾಗಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಈ ಕ್ಲಿನಿಕ್‌ಗಳಲ್ಲಿ ಬಾಣಂತಿಯರು, ಗರ್ಭಿಣಿಯರು, ನವಜಾತ ಶಿಶು, ಮಕ್ಕಳು, ಕುಟುಂಬ ಕಲ್ಯಾಣ ಯೋಜನೆ ಸೇರಿದಂತೆ 12 ಸೇವೆಗಳನ್ನು ನೀಡಲಾಗುವುದು. ಪ್ರತಿ ಕ್ಲಿನಿಕ್‌ನಲ್ಲಿ ತಲಾ ಒಬ್ಬ ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ ಗ್ರೂಪ್‌ ಡಿ ಸಿಬ್ಬಂದಿ ಇರುತ್ತಾರೆ. ಪ್ರತಿ ಕ್ಲಿನಿಕ್‌ಗೆ ಬಿಬಿಎಂಪಿಯಲ್ಲಿ 36.45 ಲಕ್ಷ ರು. ಇತರ ಜಿಲ್ಲೆಯಲ್ಲಿ 34.46 ಲಕ್ಷ ರು. ವೆಚ್ಚವಾಗಲಿದೆ ಎಂದರು.

ವಿಶ್ವಕರ್ಮ ಜನಾಂಗ ಉನ್ನತ ಶಿಕ್ಷಣಕ್ಕೆ ಒತ್ತು ನೀಡಲಿ: ಸಚಿವ ಸುಧಾಕರ್‌

ಹಳ್ಳಿಗೆ 4 ಸಾವಿರ ವೈದ್ಯರ ನೇಮಕ: ‘ಕಡ್ಡಾಯ ಗ್ರಾಮೀಣ ಸೇವೆ’ ಕಾರ್ಯಕ್ರಮ ಅಡಿ ಈ ವರ್ಷ 4000 ವೈದ್ಯರನ್ನು ಗುತ್ತಿಗೆ ಅಡಿ ಗ್ರಾಮೀಣ ಪ್ರದೇಶಗಳಿಗೆ ನೇಮಕ ಮಾಡಲಾಗುವುದು ಎಂದು ತಿಳಿಸಿದ ಅವರು, ರಾಜ್ಯದ 107 ಪ್ರಾಥಮಿಕ ಆರೋಗ್ಯ ಕೇಂದ್ರ ಹೊರತುಪಡಿಸಿದರೆ ಉಳಿದೆಲ್ಲ ಕೇಂದ್ರಗಳಲ್ಲಿ ವೈದ್ಯರು ಇದ್ದಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕಾಂಗ್ರೆಸ್‌ನ ಅಬ್ದುಲ್‌ ಜಬ್ಬಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 400 ಫಾರ್ಮಾಸಿಸ್ಟ್‌, 150 ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ 8 ಕ್ಷ-ಕಿರಣ ತಂತ್ರಜ್ಞರ ಭರ್ತಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 8256 ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿ ಇದೆ ಎಂದು ಹೇಳಿದರು.

ದೂರುಗಳ ನಿರ್ವಹಣೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟಂತೆ ಬರುವ ದೂರುಗಳ ಪರಿಹರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಈ ವರ್ಷದ ಸೆಪ್ಟೆಂಬರ್‌ 17ರವರೆಗೆ 895 ದೂರುಗಳು ಬಂದಿದ್ದು, ಈ ಪೈಕಿ 686 ದೂರುಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಸಚಿವ ಡಾ.ಸುಧಾಕರ್‌ ತಿಳಿಸಿದರು.

ನಮ್ಮ ಚಿಕಿತ್ಸಾ ಕ್ಲಿನಿಕ್‌ ಶೀಘ್ರ ರಾಜ್ಯಕ್ಕೆ ವಿಸ್ತರಣೆ: ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಪ್ರಾರಂಭಿಸಿರುವ ನಮ್ಮ ಕ್ಲಿನಿಕ್‌ ಚಿಕಿತ್ಸಾ ಕೇಂದ್ರಗಳನ್ನು ಶೀಘ್ರದಲ್ಲಿಯೇ ರಾಜ್ಯಾದ್ಯಂತ ಪ್ರಾರಂಭಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ವಿಧಾನಸೌಧ ಮುಂಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಪ್ರಯುಕ್ತ ಅಖಿಲ ಭಾರತೀಯ ತೇರಾಪಂಥ್‌ ಯುವಕ ಪರಿಷದ್‌ ವತಿಯಿಂದ ಹಮ್ಮಿಕೊಳ್ಳಲಾದ ಬೃಹತ್‌ ರಕ್ತದಾನ ಶಿಬಿರ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲವೆಡೆ ನಮ್ಮ ಕ್ಲಿನಿಕ್‌ ಪ್ರಾರಂಭಿಸಲಾಗಿದ್ದು, ಇದರ ಸಾಧಕ-ಬಾಧಕಗಳನ್ನು ನೋಡಿಕೊಂಡು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. 

ಬೆಂಗಳೂರಲ್ಲಿ 240ಕ್ಕೂ ಹೆಚ್ಚು ಕ್ಲಿನಿಕ್‌ಗಳು ವಾರ್ಡ್‌ಗೊಂದರಂತೆ ಕಾರ್ಯನಿರ್ವಹಿಸಲಿವೆ. ರಾಜ್ಯದಲ್ಲಿ 430ಕ್ಕೂ ಹೆಚ್ಚು ಕ್ಲಿನಿಕ್‌ಗಳನ್ನು ಪ್ರಾರಂಭಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಮಾತುಕತೆ ನಡೆಸಿ ಅಂತಿಮಗೊಳಿಸಲಿದ್ದೇವೆ ಎಂದು ತಿಳಿಸಿದರು. ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯಸೌಲಭ್ಯ ಸಿಗಬೇಕೆಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ. ಆರೋಗ್ಯ ಮತ್ತು ಶಿಕ್ಷಣ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನಮ್ಮ ಕ್ಲಿನಿಕ್‌ಗಳು ಬೆಳಗ್ಗೆ 9ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯನಿರ್ವಹಿಸುತ್ತವೆ. 

ಇಂದು ವಿಮ್ಸ್‌ಗೆ ಭೇಟಿ ನೀಡಿ ಚರ್ಚೆ ನಡೆಸುವೆ: ಸಚಿವ ಸುಧಾಕರ್‌

ಒಬ್ಬರು ವೈದ್ಯರು, ಒಬ್ಬರು ನರ್ಸ್‌, ಒಬ್ಬರು ಲ್ಯಾಬ್‌ ಟೆಕ್ನಿಷಿಯನ್‌ ಮತ್ತು ಒಬ್ಬರು ಡಿಗ್ರೂಪ್‌ ಸಿಬ್ಬಂದಿ ಕೆಲಸ ಮಾಡುತ್ತಾರೆ. ಉಚಿತ ತಪಾಸಣೆ, ಔಷಧ ವಿತರಣೆ ಮಾಡಲಾಗುತ್ತದೆ. ಒಟ್ಟು 12 ತರಹದ ಆರೋಗ್ಯ ಸೇವೆಗಳು ಮತ್ತು 14 ವಿಧದ ಪರೀಕ್ಷೆ ನಡೆಸಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಇ-ಸಂಜೀವಿನಿ ಮತ್ತು ಟೆಲಿ ಕೌನ್ಸಿಲಿಂಗ್‌ ಮೂಲಕ ಕೊಡಿಸುವ ವ್ಯವಸ್ಥೆ ಇರಲಿದೆ. ರಾಜ್ಯ ಸರ್ಕಾರದ ಅನುದಾನದಲ್ಲಿ ನಮ್ಮ ಕ್ಲಿನಿಕ್‌ ಆರಂಭಿಸಲಾಗುತ್ತಿದ್ದು, ಪ್ರತಿ ಕ್ಲಿನಿಕ್‌ಗೆ ವಾರ್ಷಿಕ 36 ಲಕ್ಷ ರು. ನೀಡಲಾಗುತ್ತದೆ. ಈ ಮೊತ್ತದಲ್ಲಿ ಸಿಬ್ಬಂದಿ ವೇತನ, ಕ್ಲಿನಿಕ್‌ ನಿರ್ವಹಣೆ, ಖಾಸಗಿ ಕಟ್ಟಡವಾಗಿದ್ದರೆ ಬಾಡಿಗೆ ಸೇರಿದಂತೆ ಎಲ್ಲವನ್ನೂ ನಿರ್ವಹಣೆ ಮಾಡಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್