
ಬೆಂಗಳೂರು (ಜೂ.19): ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ವತಿಯಿಂದ ನಡೆಸಲಾಗುವ ನೀಟ್-ಯುಜಿ 2026 (NEET-UG 2026) ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೋಲೀಸ್ ಇಲಾಖೆಯು ಬಿಗಿ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷೆಯು ಸುಸೂತ್ರವಾಗಿ ಮತ್ತು ಯಾವುದೇ ಅಕ್ರಮಗಳಿಲ್ಲದೆ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಪೋಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಪೋಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಹೊರಡಿಸಿರುವ ಆದೇಶದಂತೆ, ದಿನಾಂಕ 21-06-2026 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಯ ಸಂದರ್ಭದಲ್ಲಿ ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು 'ನಿಷೇಧಿತ ಪ್ರದೇಶ' ಎಂದು ಘೋಷಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಕಲಂ 163 ರ ಅಡಿಯಲ್ಲಿ ಈ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಪರೀಕ್ಷಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಿರಾಕ್ಸ್ ಅಂಗಡಿಗಳು, ಸೈಬರ್ ಕೆಫೆಗಳು ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಪರೀಕ್ಷೆಯ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಇತರ ಯಾವುದೇ ರೀತಿಯ ಮೈಲ್ ಪ್ರಾಕ್ಟೀಸ್‌ಗಳನ್ನು ತಡೆಗಟ್ಟಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೋಲೀಸ್ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿಯ ಮನವಿಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪರೀಕ್ಷೆಯ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವ ಜವಾಬ್ದಾರಿಯನ್ನು ಪೋಲೀಸ್ ಇಲಾಖೆ ಹೊತ್ತುಕೊಂಡಿದೆ. ಅಭ್ಯರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಯನ್ನು ಹೊರತುಪಡಿಸಿ, ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರದ ಆವರಣದಲ್ಲಿ ಅಥವಾ ನಿಷೇಧಿತ ವ್ಯಾಪ್ತಿಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೋಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗದೆ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಹಾಗೂ ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ