ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ಪ್ರತಿಭಟನೆ ಹಿನ್ನೆಲೆ ಇದೀಗ ಮುಂಜಾಗೃತಾ ಕ್ರಮವಾಗಿ ಪೊಲೀಸರು ಬೆಂಗಳೂರಿನಲ್ಲಿ ಹೈ ಅಲರ್ಟ್ ಆಗಿದ್ದಾರೆ. ರಾಜ್ಯದ ಹಲವೆಡೆ ಎಚ್ಚರಿಕೆ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು (ಜೂ.11): ನೂಪುರ್ ಶರ್ಮಾ (Nupur Sharma) ವಿವಾದಾತ್ಮಕ ಹೇಳಿಕೆ ಖಂಡಿಸಿ, ಪ್ರತಿಭಟನೆ ಹಿನ್ನೆಲೆ ರಾಜ್ಯದಾದ್ಯಂತ ಕಚ್ಚೆಟ್ಟರ ವಹಿಸಲಾಗಿದೆ. ಇದೀಗ ಮುಂಜಾಗೃತಾ ಕ್ರಮವಾಗಿ ಪೊಲೀಸರು ಬೆಂಗಳೂರಿನಲ್ಲಿ ಹೈ ಅಲರ್ಟ್ ಆಗಿದ್ದಾರೆ. ಮಸೀದಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಗಸ್ತು ತಿರುಗುತ್ತಿದ್ದಾರೆ. ಠಾಣಾಧಿಕಾರಿಗಳಿಗೆ ಗಸ್ತು ಹಾಗೂ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಪೊಲೀಸ್ ಇನ್ಸ್‌ಪೆಕ್ಟರ್, ಎಸಿಪಿ, ಡಿಸಿಪಿಗಳಿಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಅಲ್ಲದೆ ಮೌಲ್ವಿಗಳು ಹಾಗೂ ಮುಸ್ಲಿಂ ಮುಖಂಡರ ಜೊತೆ ಚರ್ಚಿಸಿ ಮುನ್ನೆಚ್ಚರಿಕೆ ವಹಿಸಲು ಹೇಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸ್ಥಳೀಯ ಪೊಲೀಸರ ಗಸ್ತು ಹಾಗೂ, ಹೆಚ್ಚುವರಿ ಪೊಲೀಸರ ನಿಯೋಜನೆಗೆ ಆದೇಶಿಸಲಾಗಿದೆ.
ಜೂನ್ 13 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ರಾಜ್ಯ ಸರಕಾರ
ಶುಕ್ರವಾರ ಮುಸ್ಲಿಂ ಸಮುದಾಯ ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಢೀರ್ ಸಭೆ ನಡೆಸಿದ್ದರು. ಡಿಜಿಪಿ ಪ್ರವೀಣ್ ಸೂದ್, ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಜೊತೆ ಸಭೆ ನಡೆಸಿದ್ದರು.
ಸಭೆಯಲ್ಲಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಂತಿ ಭಂಗ ಉಂಟಾಗದಂತೆ ಮುಂಜಾಗ್ರತೆ ವಹಿಸಬೇಕು. ಸೂಕ್ಷ್ಮಪ್ರದೇಶಗಳಲ್ಲಿ ಗಸ್ತು ಹೆಚ್ಚಳ ಮಾಡಬೇಕು. ಠಾಣಾ ಮಟ್ಟದಲ್ಲಿ ಶಾಂತಿ ಸಭೆ ನಡೆಸಿ ಸಹನೆಯಿಂದ ವರ್ತಿಸುವಂತೆ ಸಮುದಾಯದ ಮುಖಂಡರಿಗೆ ಮನವಿ ಮಾಡುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಸೂಚಿಸಿದ್ದರು.
ಅಲ್ಲದೆ ಬೆಂಗಳೂರು ಸೇರಿದಂತೆ ಎಲ್ಲ ನಗರಗಳ ಪೊಲೀಸ್ ಆಯುಕ್ತರು, ಐಜಿಪಿಗಳು ಹಾಗೂ ಜಿಲ್ಲಾ ಎಸ್ಪಿಗಳು ಕಾರ್ಯಸ್ಥಾನದಲ್ಲಿ ಉಪಸ್ಥಿತರಿದ್ದು ಪರಿಸ್ಥಿತಿ ನಿಭಾಯಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಿ. ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.
Davanagere: ಸಾಲ ತೀರಿಸಲು ಮೊಮ್ಮಗನನ್ನೇ ಮಾರಿದ ಅಜ್ಜ!
ಕಚ್ಚೆಚ್ಚರ ವಹಿಸುವಂಎ ಕೇಂದ್ರದಿಂದಲೂ ಎಲ್ಲಾ ರಾಜ್ಯಗಳಿಗೆ ಸೂಚನೆ: ಪ್ರವಾದಿ ಅವಹೇಳನ ಮಾಡಿದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ, ಹಿಂಸಾಚಾರ ನಡೆದ ಬೆನ್ನಲ್ಲೇ ಗೃಹ ಸಚಿವಾಲಯವು ಕಟ್ಟೆಚ್ಚರ ವಹಿಸುವಂತೆ ಎಲ್ಲ ರಾಜ್ಯಗಳ ಪೊಲೀಸರಿಗೆ ಸೂಚಿಸಿದೆ.
ಅಲ್ಲದೆ, ‘ಗಲಭೆಯ ವೇಳೆ ಪೊಲೀಸರ ಮೇಲೂ ದಾಳಿ ನಡೆಯುವ ಸಾಧ್ಯತೆಯಿರುವುದರಿಂದ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೊಲೀಸರು ಹಾಗೂ ಅರೆಸೇನಾ ಪಡೆಗಳು ಸನ್ನದ್ಧ ಸ್ಥಿತಿಯಲ್ಲಿರಬೇಕು’ ಎಂದು ನಿರ್ದೇಶಿಸಿದೆ.
‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ವ್ಯಕ್ತಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಇಲಾಖೆಗೆ ಈಗಾಗಲೇ ಸೂಚಿಸಲಾಗಿದೆ’ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
‘ಗಲಭೆಯ ವೇಳೆ ಶಾಂತಿ, ಸುವ್ಯವಸ್ಥೆ ಕಾಪಾಡಲು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಅಗತ್ಯವಿದ್ದಲ್ಲಿ ಪ್ಯಾರಾಮಿಲಿಟರಿ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾದಿ ಮೊಹಮ್ಮದ್‌ರ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನೆಲೆ ಬಿಜೆಪಿಯಿಂದ ಅಮಾನತುಗೊಂಡಿದ್ದ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ (Naveen Jindal) ಅವರನ್ನು ಬಂಧಿಸುವಂತೆ ಒತ್ತಾಯಿಸಿ, ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಕೊಲ್ಕತ್ತಾ, ಪಂಜಾಬ್, ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಶುಕ್ರವಾರ ಮುಸ್ಲಿಂ ಸಮುದಾಯ ಭಾರೀ ಪ್ರತಿಭಟನೆ ನಡೆಸಿತು. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಕಂಡಲ್ಲಿ ಗುಂಡು ಆದೇಶಿಸಲಾಗಿತ್ತು.