ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕಾಗಿದ್ದು, ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಬೆಂಗಳೂರು (ಆ.10) : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕಾಗಿದ್ದು, ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಬುಧವಾರ ವಿಧಾನಸೌಧ(Vidhanasoudha)ದ ಬಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕೆಎಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವ(Centenary of KAS Officers Association) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳು ಸರ್ಕಾರದ ಕಣ್ಣು ಮತ್ತು ಕಿವಿಗಳಿದ್ದಂತೆ. ಅವರು ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಕೈಗೊಳ್ಳಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಜನಪರವಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಹೇಳಿದರು.
ಪೆರಿಫೆರಲ್ ರಸ್ತೆಯಿಂದ ಹಲವು ಮನೆಗಳಿಗೆ ಕುತ್ತು; ಸ್ಥಳೀಯ ನಿವಾಸಿಗಳಿಗೆ ಸಂಕಷ್ಟ
ಅಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಅಥವಾ ಧರ್ಮ ಕಲಹಗಳಲ್ಲಿ ತೊಡಗಿಕೊಳ್ಳಬಾರದು. ನಾವು ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನ ದೇಶವನ್ನು ರಕ್ಷಿಸುತ್ತದೆ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ವಿದ್ಯಾವಂತರು ಜಾತ್ಯತೀತತೆ, ವೈಚಾರಿಕತೆಯನ್ನು ಪಾಲಿಸಬೇಕು ಎಂದು ಹೇಳಿದ ಅವರು, ಇದೇ ದಿನ ಮಹಾತ್ಮಗಾಂಧಿಯವರು ಬ್ರಿಟಿಷರಿಗೆ ಅಂತಿಮ ಕರೆ ನೀಡಿದ ಕ್ವಿಟ್ ಇಂಡಿಯಾ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬರು ಸಮಾಜಕ್ಕೆ ತಮ್ಮನ್ನು ತಾವು ಅರ್ಪಿಸಿಕೊಳ್ಳಬೇಕೆಂದು ಸಂಕಲ್ಪ ಮಾಡಬೇಕಾದ ದಿನ. ಸಮಾಜವನ್ನು ಬದಲಾವಣೆ, ಸುಧಾರಣೆ, ಸಮಾನತೆಯ ಸಮಾಜ ನಿರ್ಮಾಣದ ಜವಾಬ್ದಾರಿ ನಮ್ಮ ಮೇಲಿದ್ದು, ಇದೇ ತತ್ವನ್ನು ಬಸವ, ಬುದ್ಧ ಗಾಂಧೀಜಿ, ಅಂಬೇಡ್ಕರ್, ಕುವೆಂಪು, ನಾರಾಯಣಗುರು ಸೇರಿದಂತೆ ಹಲವು ದಾರ್ಶನಿಕರು ಹೇಳಿದ್ದಾರೆ ಎಂದರು.
ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಮಾತನಾಡಿ, ಆಡಳಿತ ಸೇವೆಯ ಅಧಿಕಾರಿಗಳ ಕೊಡುಗೆಯಿಂದ ರಾಜ್ಯದ ಅಭಿವೃದ್ಧಿ ಪಯಣ ಅದ್ಬುತವಾಗಿದ್ದು, ರಾಜ್ಯವು ದೇಶದಲ್ಲಿ ಹೊಸ ಗುರುತನ್ನು ಪಡೆದುಕೊಂಡಿದೆ. ನಮ್ಮ ದೇಶವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಕಾರ್ಯಾಂಗವು ದೇಶ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆಯನ್ನು ನೀಡುತ್ತಿರುವ ಪ್ರಮುಖ ಅಂಗವಾಗಿದೆ. ಪ್ರಸ್ತತ ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಇದು ನಿಮ್ಮಂತಹ ಕರ್ಮಯೋಜಿಗಳ ಕೊಡುಗೆಯಿಂದ ಮಾತ್ರ ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಶತ ಸಂಭ್ರಮ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತ ಡಾ
ಇ.ವಿ.ರಮಣರೆಡ್ಡಿ, ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ರವಿ ತಿರ್ಲಾಪೂರ ಉಪಸ್ಥಿತರಿದ್ದರು.
ಆ.24ಕ್ಕೆ 4ನೇ ಗ್ಯಾರಂಟಿ
ರಾಜ್ಯ ಸರ್ಕಾರವು ಈಗಾಗಲೇ ಮೂರು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಆ.24ರಂದು 4ನೇ ಗ್ಯಾರಂಟಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಮೂರು ಗ್ಯಾರಂಟಿ ಜಾರಿಗೊಳಿಸಲಾಗಿದೆ. ಆ.24ರಂದು ನಾಲ್ಕನೇ ಗ್ಯಾರಂಟಿ ಜಾರಿಯಾಗಲಿದೆ. ಐದನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದೆ. ಸ್ವಾತಂತ್ರ್ಯ ಭಾರತದ ಫಲವನ್ನು ಜನರಿಗೆ ತಲುಪಿಸುವ ಮೂಲಕ ಸಾಮಾಜಿಕ ಸುಧಾರಣೆಯನ್ನು ತರಬಹುದಾಗಿದೆ ಎಂದು ತಿಳಿಸಿದರು.
ಬಿಬಿಎಂಪಿ ಬಿಲ್ ಪಾವತಿ ಬಾಕಿ: ಯಡಿಯೂರಪ್ಪ ಬಳಿ ಅನ್ಯಾಯ ತೋಡಿಕೊಂಡ ಗುತ್ತಿಗೆದಾರರು..!
ಚಿತ್ರ: ಕೆಎಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಶತ ಸಂಭ್ರಮ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಸಿದ್ದರಾಮಯ್ಯ, ಥಾವರ್‌ಚಂದ್ ಗೆಹಲೋತ್, ಕೃಷ್ಣಬೈರೇಗೌಡ, ವಂದಿತಾ ಶರ್ಮಾ, ಡಾ
ಇ.ವಿ.ರಮಣರೆಡ್ಡಿ, ರವಿ ತಿರ್ಲಾಪೂರ ಇದ್ದರು.