ಮಾ.11ರಿಂದ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌ : ಎಚ್ಚರ

Kannadaprabha News   | Kannada Prabha
Published : Feb 24, 2026, 06:13 AM IST
doctor

ಸಾರಾಂಶ

ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರು ಮಾರ್ಚ್ 11 ರಿಂದ 15 ರವರೆಗೆ ಹೊರರೋಗಿಗಳ (ಒಪಿಡಿ) ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಬೆಂಗಳೂರು : ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರು ಮಾರ್ಚ್ 11 ರಿಂದ 15 ರವರೆಗೆ ಹೊರರೋಗಿಗಳ (ಒಪಿಡಿ) ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್‌ ಎಂ.ಮೇಟಿ ಅವರು, ರಾಜ್ಯ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 16 ರಿಂದ ಆರೋಗ್ಯ ಇಲಾಖೆಯ ಎಲ್ಲಾ ವೈದ್ಯರು, ಅಧಿಕಾರಿ-ನೌಕರರು ಕರ್ತವ್ಯಕ್ಕೆ ಅನಿರ್ದಿಷ್ಟಾವಧಿವರೆಗೆ ಗೈರಾಗುವ ಮೂಲಕ ಮುಷ್ಕರ ಮುಂದುವರೆಸುತ್ತೇವೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿದ್ದು ಸಮರ್ಪಕವಾಗಿ ಔಷಧ ಸರಬರಾಜು ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕು. ಆದರೆ, ಸರ್ಕಾರಿ ಆದೇಶ ಉಲ್ಲಂಘಿಸಿ 1973ರಿಂದ ಇಲ್ಲಿಯವರೆಗೆ ಆರೋಗ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿಲ್ಲ. ಈ ಬಗ್ಗೆ ಶೀಘ್ರ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.

ಇಲಾಖೆಯ ಎಲ್ಲ ವೃಂದಗಳ ಜ್ಯೇಷ್ಠತಾ ಪಟ್ಟಿಯನ್ನು ಕಾಲ ಕಾಲಕ್ಕೆ ಪ್ರಕಟಿಸಬೇಕು. ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ಮಹಾನಗರ ಪಾಲಿಕೆ, ನಗರ ಪಾಲಿಕೆಗಳಲ್ಲಿ ಮಂಜೂರಾಗಿರುವ ಆರೋಗ್ಯ ಇಲಾಖೆಯ ಎನ್‌-ಕೇಡರ್‌ ಹುದ್ದೆಗಳಿಗೆ ನೇಮಕಾತಿ, ಮುಂಬಡ್ತಿ ಮತ್ತು ವರ್ಗಾವಣೆಗಳಿಗೆ ಆರೋಗ್ಯ ಇಲಾಖೆಯ ವೈದ್ಯರು, ಅಧಿಕಾರಿ, ನೌಕರರನ್ನೇ ನಿಯೋಜಿಸಬೇಕು. ಖಾಲಿಯಿರುವ ವೈದ್ಯರು, ಅರೆ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗುತ್ತಿಗೆ ವೈದ್ಯರು, ನೌಕರರು ಹಾಗೂ ಎನ್‌ಎಚ್‌ಎಂ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಮತ್ತು ಕಾಲಕಾಲಕ್ಕೆ ಸೂಕ್ತ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಆರು ಸಾವಿರ ನೌಕರರಿಗೆ ಕಳೆದ ಹತ್ತು ವರ್ಷಗಳಿಂದ 3 ಅಥವಾ 4 ತಿಂಗಳಿಗೊಮ್ಮೆ ವೇತನ ಭತ್ಯೆ ನೀಡಲಾಗುತ್ತಿದೆ. ಪ್ರತಿ ತಿಂಗಳ ಮೊದಲ ವಾರದಲ್ಲಿ ಅವರಿಗೆ ವೇತನ ಭತ್ಯೆಗಳನ್ನು ನೀಡಬೇಕು. ವೈದ್ಯಕೀಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮಾದರಿಯಲ್ಲೇ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಇಲಾಖೆ ನೌಕರರ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ.ಬಳ್ಳಾರಿ, ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಕಾರ್ಯದರ್ಶಿ ಡಾ.ಪಿ.ಆರ್‌.ತಿಮ್ಮರಾಜು, ಆರೋಗ್ಯ ಇಲಾಖೆ ನೌಕರರ ಕೇಂದ್ರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್‌.ಪುಟ್ಟರಾಜು ಇದ್ದರು.

ವೈದ್ಯರ ಸಂಘದ ಬೇಡಿಕೆ ಏನೇನು?

ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಗಳಿಗೊಮ್ಮೆ ತಿದ್ದುಪಡಿ ಮಾಡಬೇಕು

ಇಲಾಖೆಯ ಎಲ್ಲ ವೃಂದಗಳ ಜ್ಯೇಷ್ಠತಾ ಪಟ್ಟಿಯನ್ನು ಕಾಲ ಕಾಲಕ್ಕೆ ಪ್ರಕಟಿಸಲು ಕ್ರಮ ಕೈಗೊಳ್ಳಬೇಕು

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ನೀಗಿಸಿ ಸಮರ್ಪಕ ಔಷಧ ಸರಬರಾಜಿಗೆ ಕ್ರಮ ಕೈಗೊಳ್ಳಬೇಕು

ಗುತ್ತಿಗೆ ವೈದ್ಯರು, ನೌಕರರು, ಎನ್‌ಎಚ್‌ಎಂ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಸೂಕ್ತ ವೇತನಕ್ಕೆ ಕ್ರಮ

ಖಾಲಿಯಿರುವ ವೈದ್ಯರು, ಅರೆ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆ ಕೂಡಲೇ ಭರ್ತಿ ಮಾಡಬೇಕು

ಕೇಂದ್ರ ಪುರಸ್ಕೃತ ಯೋಜನೆಯಡಿ ಕೆಲಸ ಮಾಡುತ್ತಿರುವವರಿಗೆ ಪ್ರತಿ ತಿಂಗಳೂ ವೇತನ ನೀಡಬೇಕು

ಸರ್ಕಾರಿ ನೌಕರರ ಸಂಘದ ಬೆಂಬಲ

ಮಾರ್ಚ್‌ 11ರಿಂದ 16ರವರೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ, ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಂಪೂರ್ಣ ಬೆಂಬಲ ಕೊಡುತ್ತದೆ ಎಂದು ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಲ್ಲಿ ಏಷ್ಯಾದ 2ನೇ ದೊಡ್ಡ 5 ಎಕರೆ ಅಮೆಜಾನ್‌ ಕಚೇರಿ : 7000 ನೌಕರರಿಗೆ ಸ್ಥಳಾವಕಾಶ
ಕಾಂಗ್ರೆಸ್ಸಲ್ಲಿ ಈಗ ಹೊಸ ಒತ್ತಡ ಹೆಚ್ಚಳ : ಮಂತ್ರಿ ಸ್ಥಾನಕ್ಕಾಗಿ 31 ಶಾಸಕರ ಪತ್ರ