ಬೆಂಗಳೂರಲ್ಲಿ ಟೋಯಿಂಗ್ ಪುನಾರಂಭ; ಗ್ರೀನ್ ಸಿಗ್ನಲ್ ಕೊಟ್ಟ ಗೃಹ ಸಚಿವ ಪರಮೇಶ್ವರ!

Published : May 27, 2025, 06:54 PM ISTUpdated : May 27, 2025, 06:56 PM IST
Bengaluru towing system

ಸಾರಾಂಶ

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ಟೋಯಿಂಗ್ ವ್ಯವಸ್ಥೆಯನ್ನು ಪುನರಾರಂಭಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ನಗರದಲ್ಲಿ ಮಳೆ ಬಂದಾಗ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಬಿಬಿಎಂಪಿಯೊಂದಿಗೆ ಜಂಟಿಯಾಗಿ ಕ್ರಮ ಕೈಗೊಳ್ಳಲಾಗುವುದು.

ಬೆಂಗಳೂರು, (ಮೇ 27): ಬೆಂಗಳೂರು ನಗರದಲ್ಲಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದರ ಭಾಗವಾಗಿ ಈ ಹಿಂದೆ ಜಾರಿಯಲ್ಲಿದ್ದ ಟೋಯಿಂಗ್ ವ್ಯವಸ್ಥೆಯನ್ನು ಪುನಾರಂಭಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಹನಗಳನ್ನು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲಾಗುವುದು. ಟೋಯಿಂಗ್‌ ಮಾಡಲು ಇಲಾಖೆಯ ಸಿಬ್ಬಂದಿ ಮತ್ತು ವಾಹನಗಳನ್ನೇ ಬಳಸಿಕೊಳ್ಳಲಾಗುವುದು. ಟ್ರಾಫಿಕ್‌ ಸಮಸ್ಯೆಯ ಪರಿಹಾರಕ್ಕೆ ಬಿಬಿಎಂಪಿಯವರೊಂದಿಗೆ ಜೊತೆಗೂಡಿ ಅನೇಕ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ‌ ಎಂದು ತಿಳಿಸಿದರು.

ನಗರದಲ್ಲಿ ಮಳೆ ಬಂದಾಗ ತೀವ್ರ ಸಮಸ್ಯೆಯಾಗುತ್ತಿದೆ. ಪ್ರಮುಖವಾಗಿ 19 ಕಡೆ ಹೆಚ್ಚು ಒತ್ತಡವಿದೆ. 8 ಕಡೆ ಹೆಚ್ಚಿನ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಒಟ್ಟಾಗಿ ಕೆಲಸ‌ ಮಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ಟ್ರಾಫಿಕ್ ಸಮಸ್ಯೆಯ ಕುರಿತಂತೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ನಗರ ಪೊಲೀಸರಿಗೆ ಸೂಚಿಸಿದ್ದೇನೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರೊಂದಿಗೆ ಸಭೆ ಕರೆದು ಚರ್ಚಿಸಲಾಗುವುದು. ಇನ್ನು ನಗರದಲ್ಲಿ ನೆಲೆಸಿರುವ ವಿದೇಶಿಗರ ಕುರಿತು ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದ್ದೇನೆ. ಅಕ್ರಮ ವಲಸಿಗರ ಮಾಹಿತಿಯೂ ಗೊತ್ತಾಗುತ್ತದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ಇದೀಗ ಬೆಂಗಳೂರು ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ‌. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್‌ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ ಪಟ್ಟುಕೊಳ್ಳದೇ, ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.

ರಿಯಲ್ ಎಸ್ಟೇಟ್ ದಂಧೆಯ ಏಜೆಂಟ್‌ಗಳೊಂದಿಗೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಶಾಮಿಲಾಗುವುದನ್ನು ಸಹಿಸಲಾಗುವುದಿಲ್ಲ. ಅವರೊಂದಿಗೆ ತೊಡಗಿರುವುದು ಕಂಡುಬಂದರೆ‌, ಯಾವುದೇ ರೀತಿಯ ಮುಲಾಜಿಲ್ಲದೇ ಕೂಡಲೇ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ.

ರಾಜ್ಯದಾದ್ಯಂತ ಮನೆಮನೆಗೆ ಪೊಲೀಸ್‌ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು‌. ಸಾರ್ವಜನಿಕರಿಗೆ ತೊಂದರೆ ಇದ್ದರೆ, ಪೊಲೀಸರ ಸಹಾಯ ಬೇಕಿದ್ದರೆ ಆಲಿಸಲಿದ್ದಾರೆ ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು. ಪಾಲಕರ ಸಭೆಗಳಲ್ಲಿ ಪೊಲೀಸರು ಭಾಗವಹಿಸಬೇಕು. ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮ, ಟ್ರಾಫಿಕ್ ನಿಯಮಗಳು ಸೇರಿದಂತೆ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ 219 ಪಿಎಸ್‌ಐಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ.ಎಂ.ಎ.ಸಲೀಂ, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ವಿಕಾಶ್‌ಕುಮಾರ್ ವಿಕಾಶ್, ಸಂಚಾರ ವಿಭಾಗದ ಜಂಟಿ‌ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್, ಸಿಸಿಬಿ ವಿಭಾಗದ ಜಂಟಿ ಆಯುಕ್ತ ಚಂದ್ರಗುಪ್ತ ಹಾಗೂ ಎಲ್ಲ ವಿಭಾಗದ ಡಿಸಿಪಿಗಳು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌