
ಬೆಂಗಳೂರು (ಜು.18): ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ವಯೋಸಹಜ ಖಾಯಿಲೆಯಿಂದ ಶನಿವಾರ ಸಂಜೆ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಸದ್ಯ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಕೊಂಡೊಯ್ಯಲಾಗುತ್ತಿದ್ದು, ಪದ್ಮನಾಭನಗರದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನು ಚೆನ್ನಮ್ಮ ಅವರ ನಿಧನಕ್ಕೆ ರಾಜ್ಯದಲ್ಲಿ ವಿವಿಧ ಪಕ್ಷಗಳ ರಾಜಕೀಯ ಗಣ್ಯರು, ಮಾಜಿ ಹಾಗೂ ಹಾಲಿ ಸಿಎಂ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಇನ್ನು ಆಸ್ಪತ್ರೆಗೆ ಹೋಗಿ ಮೃತದೇಹದ ಅಂತಿಮ ದರ್ಶನವನ್ನು ಪಡೆಯಲು ಕೂಡ ಕೆಲವು ರಾಜಕಾರಣಿಗಳಿಗೆ ಸಾಧ್ಯವಾಗಿದೆ.
ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನಮ್ಮ ಅವರು ಗುಣಮುಖರಾಗಿ ವಾಪಸ್ಸು ಬರುತ್ತಾರೆ ಎಂದುಕೊಂಡಿದ್ದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದು, ಅವರ ನಿಧನ ಅತೀವ ದುಃಖವನ್ನುಂಟು ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.
'ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ ದೇವೇಗೌಡರ ಧರ್ಮಪತ್ನಿ, ಮಾತೃ ಸ್ವರೂಪಿ ಶ್ರೀಮತಿ ಚೆನ್ನಮ್ಮ ಅವರು ನಿಧನರಾಗಿರುವ ವಿಷಯ ಅತೀವ ದುಃಖವನ್ನುಂಟು ಮಾಡಿದೆ. ಶ್ರೀಮತಿ ಚೆನ್ನಮ್ಮ ಅವರು ಅಪಾರ ದೈವಭಕ್ತೆಯಾಗಿದ್ದರು. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ಸು ಬರುತ್ತಾರೆಂದು ಎಲ್ಲರೂ ನಂಬಿಕೆ ಇಟ್ಟುಕೊಂಡಿದ್ದೆವು. ಆದರೆ ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ ಬೇಸರವಾಗಿದೆ' ಎಂದು ಬರೆದಿದ್ದಾರೆ.
ಪ್ರತಿ ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದೇ ಇರುತ್ತಾಳೆ ಎನ್ನುತ್ತಾರೆ. ಅದರಂತೆ ಚೆನ್ನಮ್ಮನವರು ದೇವೇಗೌಡರ ಪ್ರತಿ ಯಶಸ್ಸಿನ ಹಿಂದೆ ಹಾಗೂ ರಾಜಕೀಯದ ಏಳು-ಬೀಳುಗಳಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ಮನೆಯನ್ನು ಜವಾಬ್ದಾರಿಯಿಂದ ನೋಡಿಕೊಳ್ಳುವ ಮೂಲಕ ಅವರು ಗೌಡರ ಬದುಕಿನ ನಿಜವಾದ ಶಕ್ತಿಯಾಗಿದ್ದರು. ಯಾವುದೇ ಪ್ರಚಾರ ಬಯಸದೆ ತೆರೆಮರೆಯಲ್ಲಿ ಇದ್ದರು. ಅವರ ಅಗಲಿಕೆ ಕುಟುಂಬಸ್ಥರಿಗೆ ಹಾಗೂ ಆಪ್ತರಿಗೆ ತುಂಬಲಾರದ ನಷ್ಟವಾಗಿದೆ. ಭಗವಂತ ಹಿರಿಯರ ಆತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ, ಬಂಧು-ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ತನ್ನ ಸಂತಾಪ ಸೂಚಿಸಿದ್ದು, ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. 'ಮಾಜಿ ಪ್ರಧಾನಮಂತ್ರಿ ಶ್ರೀ ದೇವೇಗೌಡ ಅವರ ಪತ್ನಿ ಶ್ರೀಮತಿ ಚೆನ್ನಮ್ಮನವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ತಮ್ಮ ವಿನಯ ಮತ್ತು ಸಮಾಜ ಸೇವೆಯ ಮೇಲಿನ ಬದ್ಧತೆಗಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಈ ದುಃಖದ ಸಮಯದಲ್ಲಿ, ಶ್ರೀ ದೇವೇಗೌಡರು ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಹೃದಯಪೂರ್ವಕ ಸಂತಾಪಗಳು. ಓಂ ಶಾಂತಿ' ಎಂದು ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ