ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆಗಾಗಿ ಸ್ಥಳೀಯ ಜನರ ತೀವ್ರವಾದ ಬೇಡಿಕೆ ಸರ್ಕಾರದ ಮೇಲೆ ಸಾಕಷ್ಟು ಒತ್ತಡ ಹೇರಿದೆ. ಜನರ ಹೋರಾಟ ತೀವ್ರವಾಗಿರುವ ಬೆನ್ನಲ್ಲಿಯೇ ಸಭಾಧ್ಯಕ್ಷ ಹಾಗೂ ಜಿಲ್ಲೆಯವರೇ ಆದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಜುಲೈ 26): ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಭಾಧ್ಯಕ್ಷ ಕಾಗೇರಿ, ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಇದೆ. ಆಸ್ಪತ್ರೆಗಾಗಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಸುಧಾಕರ್ ಅವರೊಂದಿಗೆ ಮಾತನಾಡಿದ್ದು, ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರ ಜತೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು. ‘ಸುಧಾಕರ್ ಸಹ ಇದು ವಿಶೇಷ ಪ್ರಕರಣ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ. ಅಂತಿಮ ತೀರ್ಮಾನವನ್ನು ಸುಧಾಕರ್ ಅವರು ಕೈಗೊಳ್ಳಲಿದ್ದಾರೆ. ಹಲವು ವರ್ಷಗಳಿಂದ ಮಂಜೂರಾಗಿಲ್ಲ. ಆದರೂ ನಾವೆಲ್ಲರೂ ಒಟ್ಟಾಗಿ ಪ್ರಯತ್ನ ಮಾಡುತ್ತಿದ್ದೇವೆ ಮತ್ತು ಆಸ್ಪತ್ರೆ ಸಿಗುವವರೆವಿಗೂ ನಿರಂತರವಾಗಿ ಪ್ರಯತ್ನ ನಡೆಸುತ್ತೇವೆ’ ಎಂದರು.
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ಬಿಜೆಪಿ ಸರ್ಕಾರವು ಆದ್ಯತೆಯ ಮೇರೆಗೆ ಈಡೇರಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದ್ದಾರೆ.
undefined
ಶೀಘ್ರ ಸೂಕ್ತ ನಿರ್ಧಾರ: ಸುಧಾಕರ್ ಆಶ್ವಾಸನೆ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಟ್ರಾಮಾ ಸೆಂಟರ್ ಮತ್ತು ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ. ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟುಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ: ಪ್ರಧಾನಿ ಮೋದಿಗೆ ರಕ್ತದಿಂದ ಪತ್ರ ಬರೆಯಲು ನಿರ್ಧಾರ
ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆರಂಭವಾಗದಿದ್ದಲ್ಲಿ ಪ್ರತಿಭಟನೆ
ಕಾರವಾರ: ಮುಂದಿನ ಸ್ವಾತಂತ್ರ್ಯೋತ್ಸವದ ವೇಳೆಗೆ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭವಾಗದೇ ಇದ್ದಲ್ಲಿ ಆ.16ರಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಉತ್ತರ ಕನ್ನಡದ ಜಿಲ್ಲಾ ಪಕ್ಷತೀತ ಜನಪರ ವೇದಿಕೆಯ ಮುಖಂಡ ಡಾ. ಗಜೇಂದ್ರ ನಾಯ್ಕ ಎಚ್ಚರಿಕೆ ನೀಡಿದರು. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಾವಿರಾರು ಜನರು ಸೇರಿ ಪ್ರತಿಭಟನೆ ನಡೆಸಬೇಕಾಗುತ್ತದೆ. ಚುನಾವಣೆ ಬಂದಾಗ ಮಾತ್ರ ಇಲ್ಲಿನ ಜನರ ಬಗ್ಗೆ ಕನಿಕರ ಬರುತ್ತದೆ. ಹಲವು ವರ್ಷಗಳಿಂದ ಆರೋಗ್ಯ ಸೇವಗಾಗಿ ನೆರೆಯ ಜಿಲ್ಲೆ, ರಾಜ್ಯವನ್ನು ಅವಲಂಭಿಸಿದ ಕಾರಣ ಸಾವು-ನೋವು ಅಧಿಕವಾಗುತ್ತಿವೆ. ಆದರೂ ಇಲ್ಲಿನ ಜನಪ್ರತಿನಿಧಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಉತ್ತರ ಕನ್ನಡಕ್ಕೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕೂಗು: ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ
ಈ ವಿಷಯದಲ್ಲಿ ಮಾಜಿ ಹಾಗೂ ಹಾಲಿ ರಾಜಕಾರಣಿಗಳು ಪಕ್ಷಾತೀತವಾಗಿ ಪ್ರಯತ್ನಿಸಿದರೆ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆ ಈಡೇರುತ್ತದೆ. ವೈಯಕ್ತಿಕ ಹಿತಾಸಕ್ತಿ, ಲಾಭದ ಯೋಚನೆ ಕೈಬಿಟ್ಟು ಜನಪ್ರತಿನಿಧಿಗಳು ಒಂದಾಗಿ ಆಸ್ಪತ್ರೆ ನಿರ್ಮಾಣಕ್ಕೆ ಪ್ರಯತ್ನಿಬೇಕು ಎಂದರು. ಈ ವೇಳೆ ದಿನಕರ ನಗರೆಕಾರ, ಚಂದ್ರಕಾಂತ ಹರಿಕಂತ್ರ, ಚಂದ್ರಕಾಂತ ನಾಯ್ಕ, ಶಂಕರ ಗುನಗಿ, ವೆಂಕಟೇಶ್ ವೆರ್ಣೇಕರ ಮೊದಲಾದವರು ಇದ್ದರು.