
ಬೆಂಗಳೂರು (ಅ.11): ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಹುದ್ದೆಗಳಿಗೆ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಅ.19ರವರೆಗೆ ವಿಸ್ತರಿಸಿ ಹೈಕೋರ್ಟ್ ಸೋಮವಾರ ಆದೇಶಿಸಿದೆ. ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತು. ವಿಚಾರಣೆ ವೇಳೆ ಅರ್ಜಿದಾರರ ಅಭ್ಯರ್ಥಿಗಳ ಪೈಕಿ ಓರ್ವ ವಕೀಲರು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಪೀಠ ವಿಚಾರಣೆಯನ್ನು ಅ.19ಕ್ಕೆ ಮುಂದೂಡಿತು.
ಅಲ್ಲದೆ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಪಿಎಸ್‌ಐ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಬಾರದು ಎಂದು ಸರ್ಕಾರಕ್ಕೆ ಸೂಚಿಸಿ 2022ರ ಸೆ.28ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅ.19ರವರೆಗೂ ವಿಸ್ತರಿಸಿ ವಿಭಾಗೀಯ ಪೀಠ ಇದೇ ವೇಳೆ ಆದೇಶಿಸಿತು. ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಆದೇಶಿಸಿತ್ತು. ಈ ಆದೇಶ ರದ್ದುಪಡಿಸುವಂತೆ ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಅದನ್ನು 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
PSI Scam: ಎಡಿಜಿಪಿ ಅಮೃತ್ ಪೌಲ್ ವಿರುದ್ದ ಚಾರ್ಜ್ ಶೀಟ್!
ತಲೆಮರೆಸಿಕೊಂಡಿದ್ದ ಎಸ್‌ಐ ಅರೆಸ್ಟ್: 545 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಹಗರಣ ಸಂಬಂಧ ಮತ್ತೊಬ್ಬ ಹಾಲಿ ಸಬ್ ಇನ್ಸ್‌ಪೆಕ್ಟರ್‌ವೊಬ್ಬರು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಬಲೆಗೆ ಗುರುವಾರ ಬಿದ್ದಿದ್ದಾರೆ. ತಲೆಮರೆಸಿಕೊಂಡಿದ್ದ ಬೆಂಗಳೂರಿನ ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಸುಬ್ರಹ್ಮಣ್ಯ ಬಂಧಿತರಾಗಿದ್ದು, ಈ ಪ್ರಕರಣದಲ್ಲಿ ಅಭ್ಯರ್ಥಿಗಳು ಹಾಗೂ ನೇಮಕಾತಿ ವಿಭಾಗದ ಅಧಿಕಾರಿಗಳ ನಡುವೆ ಆರೋಪಿ ಮಧ್ಯವರ್ತಿಯಾಗಿರುವ ಆರೋಪ ಕೇಳಿ ಬಂದಿದೆ.
ಕೋಲಾರ ಜಿಲ್ಲೆಯ ಸುಬ್ರಹ್ಮಣ್ಯ, 2016ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ನೇಮಕಗೊಂಡಿದ್ದರು. ಬಳಿಕ ಬೆಂಗಳೂರು ನಗರಕ್ಕೆ ನಿಯೋಜನೆಗೊಂಡ ಅವರು, ಕೆ.ಆರ್.ಪುರ ಕಾನೂನು ಮತ್ತು ಸುವ್ಯವಸ್ಥೆ ಠಾಣೆಯಲ್ಲಿ ಮೂರು ವರ್ಷ ಸೇವೆ ಸಲ್ಲಿಸಿ ಬಳಿಕ ಸಂಚಾರ ಠಾಣೆಗೆ ವರ್ಗವಾಗಿದ್ದರು. ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಹಾಗೂ ಪ್ರಥಮ ದರ್ಜೆ ಸಹಾಯಕ ಹರ್ಷ ಜತೆ ಅವರಿಗೆ ಸ್ನೇಹವಿತ್ತು. ಈ ಗೆಳೆತನ ಹಿನ್ನೆಲೆಯಲ್ಲಿ ಪಿಎಸ್‌ಐ ಪರೀಕ್ಷೆ ಬರೆದಿದ್ದ ಇಬ್ಬರು ಅಭ್ಯರ್ಥಿಗಳಿಗೆ ಮಧ್ಯವರ್ತಿಯಾಗಿ ಸುಬ್ರಹ್ಮಣ್ಯ ಡೀಲ್ ಕುದುರಿಸಿದ್ದರು ಎಂದು ಸಿಐಡಿ ಮೂಲಗಳು ತಿಳಿಸಿವೆ.
ಎಸ್‌ಐ ಅಕ್ರಮ ಸಿಬಿಐ ತನಿಖೆ ನಡೆಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಾಕತ್ತಿದ್ದರೆ ಪಿಎಸ್‌ಐ ನೇಮಕ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ರಾಜ್ಯ ಕಾಂಗ್ರೆಸ್ ಒತ್ತಾಯಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಭಾರತ್ ಜೋಡೋ ಯಾತ್ರೆಯನ್ನು ಟೀಕಿಸುವ ಬಿಜೆಪಿಗರು ತಮ್ಮ ಪಕ್ಷದಲ್ಲಿ ‘ಬಿಜೆಪಿ ತೋಡೋ ಜಾತ್ರೆ’ ನಡೆಯುತ್ತಿರುವುದನ್ನು ಗಮನಿಸಲಿ. ರಾಜ್ಯದ ಜನರಷ್ಟೇ ಅಲ್ಲ ಸ್ವತಃ ಬಿಜೆಪಿಗರೇ ಬಿಜೆಪಿ ಮುಕ್ತ ಕರ್ನಾಟಕ ಮಾಡಲು ತುದಿಗಾಲಲ್ಲಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮವನ್ನು ಸಿಬಿಐಗೆ ವಹಿಸಲು ಯತ್ನಾಳ್ ಒತ್ತಾಯಿಸಿದ್ದಾರೆ.
PSI Recruitment Scam; ಕಡೆಗೂ ದಿವ್ಯಾ ಹಾಗರಗಿ ಪತಿ ರಾಜೇಶ್‌ಗೆ ಬೇಲ್
ತಾಕತ್ತಿದ್ದರೆ ಸವಾಲು ಸ್ವೀಕರಿಸಿ ತನಿಖೆಗೆ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಎಸೆದಿದೆ. ರಾಜ್ಯ ಬಿಜೆಪಿ ಸರ್ಕಾರವು 40 ಪರ್ಸೆಂಟ್ ಭ್ರಷ್ಟಾಚಾರದ ಬಗ್ಗೆ, ಪಿಎಸ್‌ಐ ಅಕ್ರಮ ನೇಮಕಾತಿ ಬಗ್ಗೆಯ ಸೂಕ್ತ ತನಿಖೆ ನಡೆಸಿಲ್ಲ. ಬಿಜೆಪಿ ಶಾಸಕ ಬಸವರಾಜ್ ದಡೇಸಗೂರರ ಬಗ್ಗೆ ಸಾಕ್ಷ್ಯ ಸಿಕ್ಕರೂ ಕ್ರಮವಿಲ್ಲ ಎಂದು ಆರೋಪಿಸಿದೆ. ಇದರ ನಡುವೆ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಪುತ್ರನ ಕೈವಾಡವಿದೆ ಎಂದು ಸ್ವತಃ ಯತ್ನಾಳ್ ಅವರೇ ಹೇಳಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ದಮ್ಮು ತಾಕತ್ತು ಇದ್ದರೆ ಮಾಜಿ ಮುಖ್ಯಮಂತ್ರಿ ಪುತ್ರ ಯಾರೆಂದು ತನಿಖೆ ಮಾಡಿಸಿ ಎಂದು ಒತ್ತಾಯಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ