
ಬೆಂಗಳೂರು (ಜುಲೈ.30): ‘ಭಾರತದಲ್ಲಿ ಚುನಾವಣೆಯನ್ನೇ ಕದಿಯಲಾಗುತ್ತಿದೆ. ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಗಳ್ಳತನ ನಡೆದಿದೆ’ ಎಂದು ಆರೋಪಿಸಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇದರ ವಿರುದ್ಧದ ಹೋರಾಟಕ್ಕೆ ರಾಜಧಾನಿ ಬೆಂಗಳೂರಿನಿಂದಲೇ ಚಾಲನೆ ನೀಡಲಿದ್ದಾರೆ.
ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಗಸ್ಟ್ 4ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ರಾಷ್ಟ್ರ ಹಾಗೂ ರಾಜ್ಯದ ಹಲವು ನಾಯಕರು ಭಾಗವಹಿಸಲಿದ್ದಾರೆ.
ಮಹಾರಾಷ್ಟ್ರದಲ್ಲೂ ರಾಹುಲ್ ಗಾಂಧಿ ‘ಮತಗಳ್ಳತನ’ ಆರೋಪ ಮಾಡಿದ್ದರು. ಆದರೆ ಅವರೇ ಹೋರಾಟಕ್ಕೆ ಧುಮುಕಿರಲಿಲ್ಲ. ಇದೀಗ ಕರ್ನಾಟಕ ಮೂಲಕ ಹೋರಾಟ ಸಂಘಟಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಇಂದು ಸಭೆ:
ಈ ಪ್ರತಿಭಟನೆ ಯಶಸ್ವಿಗೊಳಿಸುವ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಸಂಜೆ 4.30ಕ್ಕೆ ಕ್ವೀನ್ಸ್ ರಸ್ತೆಯ ಪಕ್ಷದ ಕಚೇರಿಯಲ್ಲಿ ಬೆಂಗಳೂರು ನಗರದ 5 ಡಿಸಿಸಿ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ದಕ್ಷಿಣ (ರಾಮನಗರ), ಮಂಡ್ಯ ಜಿಲ್ಲೆಗಳ ಮುಖಂಡರುಗಳ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಪ್ರತಿಭಟನೆ ಸ್ವರೂಪ ನಿರ್ಧಾರವಾಗಲಿದೆ. ಮೂಲಗಳ ಪ್ರಕಾರ, ಈ ಪ್ರತಿಭಟನೆಯ ಜತೆಗೆ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೂ ಪಾದಯಾತ್ರೆ ನಡೆಸುವ ಚಿಂತನೆಯಿದೆ ಎನ್ನಲಾಗಿದೆ. ಆದರೆ, ಮಹದೇವಪುರದಿಂದ ಆಯುಕ್ತರ ಕಚೇರಿಯವರೆಗೂ ಪಾದಯಾತ್ರೆ ನಡೆಸಲು ಸುದೀರ್ಘ ಸಮಯ ಬೇಕಾದ್ದರಿಂದ ಅದು ಅಗತ್ಯವಿಲ್ಲ, ಕೇವಲ ಪ್ರತಿಭಟನೆ ಸಾಕು ಎಂಬ ಅಭಿಪ್ರಾಯವನ್ನು ಹೈಕಮಾಂಡ್ ನಾಯಕರು ಹೊಂದಿದ್ದಾರೆ ಎನ್ನಲಾಗುತ್ತಿದೆ. ಈ ಎಲ್ಲ ವಿಚಾರ ಈ ಸಭೆಯಲ್ಲಿ ತೀರ್ಮಾನವಾಗಲಿದೆ ಎಂದು ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ