* ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ
* ಮುನ್ನೆಚ್ಚರಿಕಾ ಕ್ರಮವಾಗಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ
* ಉಡುಪಿ, ಚಿಕ್ಕಮಗಳೂರು, ದಕ್ಷಿಂ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು, (ಜುಲೈ,05): ಮುಂದಿನ 5 ದಿನಗಳ ಕಾಲ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಮುಂದಿನ 5 ದಿನ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ(ಜುಲೈ06) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊನೆಯ ಮೂರು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಾಲಾ ಕಾಲೇಜುಳಿಗೆ ರಜೆ ಘೋಷಣೆ
ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
undefined
ಉಡುಪಿ: ಬಣ್ಣದ ಬಲೆಗಳೇ ಮೀನುಗಾರರಿಗೆ ಮಳೆಗಾಲದ ಬದುಕು..!
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲ್ಲೂಕುಗಳಲ್ಲಿ ಮುಂಗಾರಿನ ಅಬ್ಬರ ಮುಂದುವರಿದಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಈ ಹಿನ್ನೆಲೆಯಲ್ಲಿ ಆರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ಭಾಗದಲ್ಲಿ ಮಳೆ ಅಬ್ಬರ ಇಂದು(ಮಂಗಳವಾರ) ಕೂಡ ಜೋರಾಗಿದೆ. ಬೆಳಿಗ್ಗೆನಿಂದಲೂ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥವಾಗಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲಾಡಳಿತ ಮಲೆನಾಡಿನ ಆರು ತಾಲ್ಲೂಕಿಗಳ ವ್ಯಾಪ್ತಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಚಿಕ್ಕಮಗಳೂರು(ಅಂಬಳೆ ಹಾಗೂ ಲಕ್ಯಾ ಹೋಬಳಿ ಹೊರತು ಪಡಿಸಿ), ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ ಹಾಗೂ ಎನ್.ಆರ್ ಪುರ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ಜುಲೈ 6 ರಿಂದ 9 ರ ವರೆಗೆ ರಜೆ ಘೊಷಿಸಲಾಗಿದೆ.
ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆಯೂ(ಜುಲೈ 6) ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ತರಗತಿಗಳಿಗೆ ರಜೆ ನೀಡಲಾಗಿದೆ.
ಎರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಈ ಹಿನ್ನೆಲೆ ಅರಗಾದಲ್ಲಿ ಕಾಳಜಿ ಕೇಂದ್ರವನ್ನೂ ತೆರೆಯಲಾಗಿದೆ. ಸದ್ಯ ಮಳೆಯ ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಐಆರ್‌ಬಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸೂಚನೆ ಹಿನ್ನೆಲೆ ತಗ್ಗು ಪ್ರದೇಶದ ನಿವಾಸಿಗಳ ಸುರಕ್ಷತೆಯತ್ತ ಜಿಲ್ಲಾಡಳಿತ ಗಮನಹರಿಸಬೇಕಾಗಿದೆ.
ಶಿವಮೊಗ್ಗದಲ್ಲೂ ರಜೆ
ವರುಣನ ಆರ್ಭಟದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಉಡುಪಿಯಲ್ಲೂ ರಜೆ
ಉಡುಪಿ ಜಿಲ್ಲೆಯಲ್ಲಿ ನಾಳೆಯೂ(ಬುಧವಾರ) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದ್ದು, ಜುಲೈ 06ರಂದು ಸಹ ಬಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರಕನ್ನಡ ಜಿಲ್ಲೆಯಲ್ಲೂ ರಜೆ
ಉತ್ತರಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ನೆರೆ ಕಾಟ ಕಾಣಿಸಿಕೊಂಡಿದೆ. ಜಿಲ್ಲೆಯ ಹಲವೆಡೆ ಮನೆಗಳಿಗೆ ನೀರು ಹೊಕ್ಕರೆ, ಸೇತುವೆಗಳು ಕೂಡಾ ಮುಳುಗಡೆಯಾಗಿವೆ. ಈ ನಡುವೆ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದಲೂ ಕೃತಕ ನೆರೆ ಸೃಷ್ಠಿಯಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಇಂದು ಶಾಲಾ- ಕಾಲೇಜಿಗೆ ರಜೆ ನೀಡಿದ್ದ ಜಿಲ್ಲಾಡಳಿತ, ನಾಳೆ(ಮಂಗಳವಾರ) ರಜೆ ಘೋಷಣೆ ಮಾಡಿದ್ದಾರೆ.
ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಉತ್ತರ ಒಳನಾಡಿನ ಬೆಳಗಾವಿಗೆ ಆರೆಂಜ್ ಅಲರ್ಟ್ ಹಾಗೂ ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಹಾಗೂ ನಾಳೆಯಿಂದ ಇದೇ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಲ್ಲೂ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಕೆಲ ಬಾರಿ ಗಾಳಿ ವೇಗ 60 ಕಿಮೀಗೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.