
ಬೆಂಗಳೂರು (ಮೇ.29): ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳಭಾಗದಲ್ಲಿ ಮಳೆ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕೆಲವೆಡೆ ಅಣೆಕಟ್ಟೆಗಳು ತುಂಬಿವೆ. ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ್ದಾರೆ. ಹಲವು ಮನೆಗಳಿಗೆ ಹಾನಿ ಆಗಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಶಾಲೆ ಆರಂಭವನ್ನು 2 ದಿನ ಮುಂದೂಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಇರುವೈಲು ಸಮೀಪದ ಹೊಸ್ಮಾರ ಪದವು ಎಂಬಲ್ಲಿ ಮಳೆಯಿಂದ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಲಿಲ್ಲಿ ಡಿಸೋಜಾ (64) ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಟ್ಟಾರೆ ಮಳೆ ಕ್ಷೀಣಿಸಿದೆ. ಆದರೂ ಜೋರು ಗಾಳಿಯೊಂದಿಗೆ ಸಾಧಾರಣ ಮಳೆ ಆಗುತ್ತಿದೆ. ಹುಬ್ಬಳ್ಳಿ, ಬೆಳಗಾವಿಯಲ್ಲಿ ಮುಸಲಧಾರೆ ಸಾಧಾರಣ ಮಟ್ಟದಲ್ಲಿದೆ.
ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಆಗುತ್ತಿರುವುದರಿಂದ ವಿಜಯಪುರ ಜಿಲ್ಲೆಯಲ್ಲಿ ಹರಿಯುವ ಭೀಮ ನದಿ ಮೈದುಂಬಿದೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು, ಶಿಕಾರಿಪುರ, ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ ಭಾಗಗಳಲ್ಲಿ ಮಳೆ ಪ್ರಮಾಣ ತಗ್ಗಿತ್ತು. ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಎರಡು ದಿನ ರಜೆ ನೀಡಲಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ 24 ಗಂಟೆಗಳಲ್ಲಿ 61 ಕಂಬಗಳು ಮುರಿದು ಬಿದ್ದಿವೆ. ತಾಲೂಕಿನ ಮೈಲಿಮನೆ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಮಹಿಳೆ ಗಾಯಗೊಂಡಿದ್ದಾರೆ. ಮುಳ್ಳಯ್ಯನಗಿರಿ ಮಾರ್ಗದಲ್ಲಿ 30 ಅಡಿ ಎತ್ತರದ ಮಣ್ಣು ಮಿಶ್ರಿತ ಬಂಡೆ ಬಾಯ್ಬಿಟ್ಟು ಬೀಳುವ ಆತಂಕ ಶುರುವಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ