ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಗರದ 57ನೇ ಸಿಟಿ ಸಿವಿಲ್ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಲಿದೆ.
ಬೆಂಗಳೂರು ಸೆ.23): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಗರದ 57ನೇ ಸಿಟಿ ಸಿವಿಲ್ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಲಿದೆ.
ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಇತ್ತೀಚೆಗಷ್ಟೇ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಅದರ ಬೆನ್ನೆಲ್ಲೇ ಜಾಮೀನು ಕೋರಿ ದರ್ಶನ್ ಅವರು ಸೆ.21ರಂದು ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.
ರೇಣುಕಾಸ್ವಾಮಿ ಕೊಲೆ ಕೇಸ್: ಬಂಧನಕ್ಕೊಳಗಾದ 103 ದಿನಗಳ ಬಳಿಕ ಜಾಮೀನಿಗೆ ದರ್ಶನ್ ಅರ್ಜಿ
ಅರ್ಜಿಯನ್ನು ಸೆ.21ರಂದು ವಿಚಾರಣೆ ನಡೆಸಿದ್ದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಿತ್ತು. ಅದರಂತೆ ಸೋಮವಾರ ದರ್ಶನ್ ಅರ್ಜಿ ಮತ್ತೆ ವಿಚಾರಣೆಗೆ ಬರಲಿದೆ. ಈಗಾಗಲೇ ನೋಟಿಸ್ ಜಾರಿಯಾಗಿರುವ ಹಿನ್ನೆಲೆ ಸೋಮವಾರ ದರ್ಶನ್ ಅರ್ಜಿಗೆ ಕಾಮಾಕ್ಷಿಪಾಳ್ಯ ಠಾಣೆಯ ತನಿಖಾಧಿಕಾರಿಗಳು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಒಳಗೊಂಡಂತೆ 17 ಮಂದಿ ಆರೋಪಿಗಳ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. ದರ್ಶನ್ ಪ್ರಕರಣದ ಎರಡನೇ ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ ನ್ಯಾಯಾಲಯಕ್ಕೆ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾಗೌಡ ಸೇರಿದಂತೆ ಕೆಲ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು.
ನಟ ದರ್ಶನ್ ಭೇಟಿಯಾದ ತಾಯಿ ಮೀನಾ ತೂಗುದೀಪ: ಜೈಲಲ್ಲಿ ಮಗನ ಸ್ಥಿತಿ ಕಂಡು ಕಣ್ಣೀರಿಟ್ಟ ಹೆತ್ತವ್ವ..!
ಸೆ.30ರವರೆಗೆ ನ್ಯಾಯಾಂಗ ಬಂಧನ ಅವಧಿ ಹಿನ್ನೆಲೆ ಕೆಲ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಸದ್ಯ ದರ್ಶನ್ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಕೋರ್ಟ್ ಆದೇಶದ ಮೇರೆಗೆ ಇತ್ತೀಚೆಗೆ ಅವರನ್ನು ಪರಪ್ಪನ ಆಗ್ರಹಾರ ಜೈಲಿನಿಂದ ಬಳ್ಳಾರಿಗೆ ಸ್ಥಳಾಂತರ ಮಾಡಲಾಗಿದೆ.