
ವಿಜಯಪುರ : ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ ₹50 ಆರ್ಥಿಕ ನೆರವಿನ ಮೊತ್ತ ಒಟ್ಟು ₹300 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಕಳೆದ ನವೆಂಬರ್ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ಎಫ್‌ಆರ್‌ಪಿ ಮೇಲೆ ₹100 ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು. ₹100 ಆರ್ಥಿಕ ನೆರವಿನಲ್ಲಿ ರಾಜ್ಯ ಸರ್ಕಾರ ₹50 ಹಾಗೂ ಸಕ್ಕರೆ ಕಾರ್ಖಾನೆಗಳು ₹50 ನೀಡಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿರ್ಧಾರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ ಹಣ ₹300 ಕೋಟಿಗಳನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆ ಆಧರಿಸಿ ಕಬ್ಬು ಅಭಿವೃದ್ಧಿ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪ್ರತಿ ಟನ್‌ಗೆ ₹50 ಗಳಂತೆ ಜಮಾ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅದೇ ರೀತಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಪ್ರತಿ ಟನ್ ಕಬ್ಬಿಗೆ ₹50 ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ 81 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸಿದ್ದು, 29 ಕಾರ್ಖಾನೆಗಳಲ್ಲಿ ಕಬ್ಬು ನುರಿಸುವಿಕೆ ಮುಕ್ತಾಯವಾಗಿದೆ. ಇದುವರೆಗೆ 521 ಲಕ್ಷ ಮೆಟ್ರಿಕ್ ಕಬ್ಬು ನುರಿಸಲಾಗಿದ್ದು, ಈ ಹಂಗಾಮಿನಲ್ಲಿ ಸುಮಾರು 600 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆ ಇದೆ. ಮಾರ್ಚ್ ಮೊದಲ ವಾರದ ವೇಳೆಗೆ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವಿಕೆ ಅಂತ್ಯವಾಗಲಿದೆ. 600 ಲಕ್ಷ ಮೆಟ್ರಿಕ್ ಟನ್ ನುರಿಸುವ ಅಂದಾಜು ಆಧರಿಸಿ ₹300 ಕೋಟಿ ಆರ್ಥಿಕ ನೆರವು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಫ್‌ಆರ್‌ಪಿ ದರ ಕಡಿಮೆಯಾಗಿದ್ದು, ಹೆಚ್ಚಳ ಮಾಡಬೇಕೆಂದು ಕಬ್ಬು ಬೆಳೆಗಾರರು ಹಂಗಾಮು ಆರಂಭದ ಪೂರ್ವದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಧರಣಿ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆ ಕರೆದಿದ್ದರು. ರೈತರ ಅಭಿಪ್ರಾಯ ಆಲಿಸಿದ ಮುಖ್ಯಮಂತ್ರಿಗಳು ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ₹100 ಕೊಡಿ ಎಂದು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಮನವಿ ಮಾಡಿದ್ದರು. ಆದರೆ, ಕಾರ್ಖಾನೆಗಳ ಮಾಲೀಕರು ನಷ್ಟದ ಕಾರಣ ಹೆಚ್ಚುವರಿ ₹100 ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆಗ ₹100 ಆರ್ಥಿಕ ನೆರವಿನಲ್ಲಿ ರಾಜ್ಯ ಸರ್ಕಾರ ₹50 ಹಾಗೂ ಸಕ್ಕರೆ ಕಾರ್ಖಾನೆಗಳು ₹50 ನೀಡಬೇಕೆಂಬ ತೀರ್ಮಾನ ಕೈಗೊಳ್ಳಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ