
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಮೈಸೂರು ಲೋಕಾಯುಕ್ತ ಪೊಲೀಸರು 'ಬಿ' ರಿಪೋರ್ಟ್ ಸಲ್ಲಿಸಿದ್ದರು. ಈ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಭೂ ಹಗರಣಕ್ಕೆ ಸಂಬಂಧಿಸಿದ 'ಬಿ' ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿಕೊಂಡಿತ್ತು. ಈ ಕ್ರಮವನ್ನು ಪ್ರಶ್ನಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಖಾಸಗಿ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.
ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ, ಬಾಮೈದಾದ ಮಲ್ಲಿಕಾರ್ಜುನ ಸ್ವಾಮಿ, ವಿವಾದಿತ ಜಮೀನಿನ ಮೂಲ ಮಾಲೀಕ ಜೆ. ದೇವರಾಜು, ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಮತ್ತು ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.
ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಖಾಸಗಿ ದೂರಿನ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಎಸ್ಪಿ, 2025ರ ಫೆಬ್ರವರಿ 12ರಂದು ನಗರದ 82ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) 'ಬಿ' ರಿಪೋರ್ಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯವು 2026ರ ಜನವರಿ 28ರಂದು ಈ 'ಬಿ' ರಿಪೋರ್ಟ್ ಅನ್ನು ಅಂಗೀಕರಿಸಿ ಆದೇಶ ಹೊರಡಿಸಿತ್ತು. ಹೀಗಾಗಿ, ಲೋಕಾಯುಕ್ತ ಎಸ್ಪಿ ಸಲ್ಲಿಸಿರುವ 'ಬಿ' ರಿಪೋರ್ಟ್ ಅನ್ನು ಪರಿಶೀಲನೆಗೆ ಒಳಪಡಿಸಬೇಕು, ಅದನ್ನು ಒಪ್ಪಿಕೊಂಡಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಬೇಕು ಹಾಗೂ ಪ್ರಕರಣದ ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಆ ಸಂಸ್ಥೆಯು ತನಿಖೆ ನಡೆಸಿ ಹೊಸ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಬೇಕೆಂದೂ ಕೋರಿದ್ದಾರೆ.
ಅಸಲಿಗೆ ಈ ಪ್ರಕರಣದ ಆರೋಪಗಳೇನು ಅಂದರೆ, ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂ. 464ರಲ್ಲಿ ಪಾರ್ವತಿ ಎಂಬುವರಿಗೆ ಸೇರಿದ 3 ಎಕರೆ 16 ಗುಂಟೆ ಜಮೀನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮತ್ತು ಕುಟುಂಬದವರು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಇದರ ಬದಲಾಗಿ ಸುಮಾರು 56 ಕೋಟಿ ರೂಪಾಯಿ ಮೌಲ್ಯದ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ ಅನ್ನೋದು ಗಂಭೀರ ಆರೋಪವಾಗಿದೆ.
ಪ್ರಕರಣದ ಹಿನ್ನೆಲೆ
ಈ ಪ್ರಕರಣದ ಹಿನ್ನೆಲೆ ನೋಡುವುದಾದರೆ, ಸ್ನೇಹಮಯಿ ಕೃಷ್ಣ ಅವರು 2024ರ ಜುಲೈ 3ರಂದು ಮೈಸೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ, ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರಿದ್ದರು. ಇದಕ್ಕೂ ಮುನ್ನ, 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿ, ತನಿಖೆ ಅಥವಾ ಕಾನೂನು ಕ್ರಮಕ್ಕೆ ಅನುಮತಿ ಕೇಳಿದ್ದರು. ಇದನ್ನು ಪರಿಶೀಲಿಸಿದ ರಾಜ್ಯಪಾಲರು ಆಗಸ್ಟ್ 17ರಂದು ತನಿಖೆಗೆ ಆದೇಶಿಸಿದ್ದರು.
ಇದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 19ರಂದು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಬಳಿಕ 2024ರ ಸೆಪ್ಟೆಂಬರ್ 24ರಂದು ಪೊಲೀಸ್ ತನಿಖೆಗೆ ಆದೇಶಿಸಿತ್ತು. ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು, ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ 'ಬಿ' ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ವಿಶೇಷ ನ್ಯಾಯಾಲಯ ಒಪ್ಪಿಕೊಂಡಿತ್ತು. ಈಗ ಇದೇ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. (ಎಎನ್‌ಐ)
(ಈ ಸುದ್ದಿಯ ಹೆಡ್‌ಲೈನ್ ಹೊರತುಪಡಿಸಿ, ಉಳಿದ ವಿವರಗಳನ್ನು ಏಷ್ಯಾನೆಟ್ ನ್ಯೂಸೇಬಲ್ ಇಂಗ್ಲಿಷ್ ಸಿಬ್ಬಂದಿ ಸಂಪಾದಿಸಿಲ್ಲ ಮತ್ತು ಸಿಂಡಿಕೇಟೆಡ್ ಫೀಡ್‌ನಿಂದ ಪ್ರಕಟಿಸಲಾಗಿದೆ.)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ