
ಬೆಂಗಳೂರು (ಮೇ.20): ಪರಿಶಿಷ್ಟ ಜಾತಿಗಳನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ, ಒಳ ಮೀಸಲಾತಿ ಹಂಚಿಕೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರಿನ ಎಚ್.ರವಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ್ ಹೆಗ್ಡೆ ಅವರ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮೇ 25ಕ್ಕೆ ಮುಂದೂಡಿದೆ.
ಅರ್ಜಿಯಲ್ಲೇನಿದೆ?: ಸಂಪುಟ ಉಪ ಸಮಿತಿಯ ಶಿಫಾರಸು ಆಧರಿಸಿ 2023ರ ಮಾ.27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮೀಸಲಾತಿ ವರ್ಗೀಕರಿಸಿ ಆದೇಶ ಮಾಡಿದೆ. ಈ ವರ್ಗೀಕರಣವನ್ನು ರಾಜ್ಯಪಾಲರ ಒಪ್ಪಿಗೆಯ ಬಳಿಕ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ನಿಕಟಪೂರ್ವ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರ ನೇತೃತ್ವದ ಸಂಪುಟ ಉಪ ಸಮಿತಿಯು 101 ಪರಿಶಿಷ್ಟಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಶೇ.17 ಮೀಸಲಾತಿಯನ್ನು ನಾಲ್ಕು ವರ್ಗಗಳನ್ನಾಗಿ ಪ್ರತ್ಯೇಕಿಸಿ ಮೀಸಲಾತಿ ಹಂಚಿಕೆ ಮಾಡಿದೆ. ಸಂಪುಟ ಉಪ ಸಮಿತಿಯ ವರದಿಯು ಸಾರ್ವಜನಿಕಗೊಳಿಸಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ನಾರಾಯಣ ನೇತ್ರಾಲಯದ ಪ್ರಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ!
ಅಲ್ಲದೆ, ಯಾವುದೇ ತತ್ವ ಹಾಗೂ ಹಿಂದುಳಿದಿರುವಿಕೆ ಆಧಾರ ಇಲ್ಲದೆ ಮತ್ತು ಪೂರಕವಾದ ದತ್ತಾಂಶ ಸಂಗ್ರಹಿಸದೆ 101 ಪರಿಶಿಷ್ಟಜಾತಿಗಳನ್ನು ನಾಲ್ಕು ವರ್ಗಗಳಾಗಿ ವಿಂಗಡಿಸಲಾಗಿದೆ. ಇದು ಅತಾರ್ಕಿಕ, ಅವೈಜ್ಞಾನಿಕ ಮತ್ತು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ. ಆದ್ದರಿಂದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಪರಿಶಿಷ್ಟಜಾತಿ ವರ್ಗದಲ್ಲಿದ್ದ 101 ಜಾತಿಗಳಿಗೆ ಕಲ್ಪಿಸಲಾಗಿದ್ದ ಶೇ.17ರಷ್ಟು ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ರಾಜ್ಯ ಸರ್ಕಾರ ನಾಲ್ಕು ಪ್ರತ್ಯೇಕ ಗುಂಪುಗಳಾಗಿ ವಿಂಗಡಿಸಿ, ಮೀಸಲು ಹಂಚಿಕೆ ಮಾಡಿದೆ.
ಲೋಕಸಭಾ ಕ್ಷೇತ್ರದಲ್ಲಿ 25 ವರ್ಷಗಳಿಂದ ಹಿಂದುಳಿದವರಿಗೆ ಅವಕಾಶ ಸಿಕ್ಕಿಲ್ಲ: ಆನಂದ್ ಆಸ್ನೋಟಿಕರ್
ಮೊದಲ ಗುಂಪಿನಲ್ಲಿ ಆದಿ ದ್ರಾವಿಡ, ಭಾಂಬಿ, ಮಾದಿಗ, ಸಮಗಾರ ಜಾತಿಗಳನ್ನು ಉಲ್ಲೇಖಿಸಲಾಗಿದ್ದು, ಅವುಗಳಿಗೆ ಶೇ. 6 ಮೀಸಲು ಹಂಚಿಕೆ ಮಾಡಲಾಗಿದೆ. ಎರಡನೇ ಗುಂಪಿನಲ್ಲಿ ಆದಿ ಕರ್ನಾಟಕ, ಚಲವಾದಿ, ಚನ್ನದಾಸರ, ಹೊಲೆಯ, ಮಹರ್ ಜಾರಿಗಳನ್ನು ಉಲ್ಲೇಖಿಸಿದ್ದು, ಅವುಗಳಿಗೆ ಶೇ.5.5 ಮೀಸಲು ನೀಡಲಾಗಿದೆ. ಮೂರನೇ ಗುಂಪಿನಲ್ಲಿ ಬಂಜಾರ ಮತ್ತು ಸಮಾನ ಜಾತಿಗಳು, ಭೋವಿ ಮತ್ತು ಸಮಾನ ಜಾತಿಗಳು, ಕೊರಚ ಮತ್ತು ಕೊರಮ ಜಾತಿಗಳನ್ನು ಉಲ್ಲೇಖಿಸಿ, ಶೇ.4.5 ಹಾಗೂ ನಾಲ್ಕನೇ ಗುಂಪಿನಲ್ಲಿ 1, 2 ಮತ್ತು 3ನೇ ಗುಂಪಿನಲ್ಲಿ ಸ್ಥಾನ ಪಡೆಯದ, ಅಸ್ಪೃಸ್ಯ ಮತ್ತು ಇತರೆ ಜಾತಿಗಳಿಗೆ ಶೇ.1ರಷ್ಟುಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ