
ಮಂಡ್ಯ: ಅಪ್ರಾಪ್ತ ಗರ್ಭಿಣಿಯರಿಗೆ ಭ್ರೂಣ ಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡಿದ ಆರೋಪದ ಮೇಲೆ ಮಂಡ್ಯ ಜಿಲ್ಲೆಯಲ್ಲಿ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಕೆಆರ್ ಪೇಟೆ ಚೇತನ ಮೆಟರ್ನಿಟಿ ಸೆಂಟರ್‌ನ ಡಾ.ದಿವ್ಯಾ ಚೇತನ, ನಾವಿ ಡಯಾಗ್ನಸ್ಟಿಕ್ ಸೆಂಟರ್ ಡಾ.ಹರ್ಷಿತ್, ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್‌ನ ಡಾ.ಹರೀಶ್ ಬಂಧಿತರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಠಾಣೆಗಳಲ್ಲಿ 17 ಆರೋಪಿಗಳ ವಿರುದ್ಧ ಪ್ರತ್ಯೇಕವಾಗಿ ಒಟ್ಟು 12 ಎಫ್‌ಐಆರ್ ದಾಖಲಾಗಿವೆ.
ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿ ಭ್ರೂಣ ಪತ್ತೆ ಮಾಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಪ್ರಿಯಾಂಕಾ ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದು ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸರ್ಕಾರಿ ವೈದ್ಯೆ, ಮೂವರು ಖಾಸಗಿ ವೈದ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆ ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ.
ಈ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದರು. ಕೆಆರ್ ಪೇಟೆಯ 2 ಡಯಾಗ್ನೋಸ್ಟಿಕ್ ಸೆಂಟರ್‌ಗಳಲ್ಲಿ ಭ್ರೂಣಲಿಂಗ ಪತ್ತೆ ನಡೆದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಾವಿ ಡಯಾಗ್ನಾಸ್ಟಿಕ್ ಸೆಂಟರ್‌ನಲ್ಲಿ 2024ರಲ್ಲಿ 19 ಮತ್ತು 2025ರಲ್ಲಿ 5 ಸೇರಿದಂತೆ ಒಟ್ಟು 24 ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಲಾಗಿತ್ತು. ಕುಶಾಲ್ ಡಯಾಗ್ನಾಸ್ಟಿಕ್ ಸೆಂಟರ್‌ನಲ್ಲಿ 7 ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿದ ಆರೋಪ ಕೇಳಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ