
ಶಿವಮೊಗ್ಗ (ಡಿ.26): ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಂಡ್ರಳ್ಳಿಯಲ್ಲಿ ನಡೆದಿದೆ.
ಮಂಡ್ರಳ್ಳಿ ಗ್ರಾಮದ ಉಡುಪ ಎಂಬುವವರ ಅಡಿಕೆ ತೋಟದಲ್ಲಿ ಇಂದು ಕೆಲಸ ನಡೆಯುತ್ತಿತ್ತು. ಕೂಲಿ ಕಾರ್ಮಿಕ ಪುಟ್ಟಸ್ವಾಮಿ (48) ಅವರು ಅಡಿಕೆ ಗೊನೆ ಕೊಯ್ಯುತ್ತಿದ್ದಾಗ, ಅವರು ಬಳಸುತ್ತಿದ್ದ ದೋಟಿ (ಕೋಲು) ಆಕಸ್ಮಿಕವಾಗಿ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ತಕ್ಷಣವೇ ದೋಟಿಯ ಮೂಲಕ ವಿದ್ಯುತ್ ಪ್ರವಹಿಸಿ ಪುಟ್ಟಸ್ವಾಮಿ ಅವರು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
ಇದೇ ವೇಳೆ ತೋಟದಲ್ಲಿದ್ದ ಮತ್ತೊಬ್ಬ ವ್ಯಕ್ತಿಗೂ ವಿದ್ಯುತ್ ಶಾಕ್ ತಗುಲಿದೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಗಾಯಾಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಶವಗಾರಕ್ಕೆ ಸಚಿವ ಮಧು ಬಂಗಾರಪ್ಪಭೇಟಿ
ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಹೊಸನಗರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದರು. ಮೃತ ಪುಟ್ಟಸ್ವಾಮಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಅಧಿಕಾರಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಪರಿಹಾರಕ್ಕೆ ಸೂಚನೆ ಹಾಗೂ ಚಿಕಿತ್ಸೆಗೆ ತುರ್ತು ಕ್ರಮ
ಅವಘಡದ ಬಗ್ಗೆ ಅತೀವ ಸಂಕಟ ವ್ಯಕ್ತಪಡಿಸಿದ ಸಚಿವ ಮಧು ಬಂಗಾರಪ್ಪ, ಮೃತ ಕಾರ್ಮಿಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಅಲ್ಲದೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿಗೆ ಉತ್ತಮ ವೈದ್ಯಕೀಯ ಸೇವೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ