ಖರ್ಗೆ-ಸಿದ್ದು ರಹಸ್ಯ ಮಾತುಕತೆ: ನಾಯಕತ್ವ ಬದಲಾವಣೆಗೆ ತೆರೆ ಬೀಳುತ್ತಾ?

Kannadaprabha News, Ravi Janekal |   | Kannada Prabha
Published : Nov 23, 2025, 09:37 AM IST
Siddaramaiah Meets Kharge Dismisses Karnataka Leadership Change Speculation

ಸಾರಾಂಶ

ರಾಜ್ಯದಲ್ಲಿ ತೀವ್ರಗೊಂಡಿರುವ ನಾಯಕತ್ವ ಬದಲಾವಣೆ ಗೊಂದಲಕ್ಕೆ ಅಂತಿಮ ತೆರೆ ಎಳೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಖರ್ಗೆ, ರಾಹುಲ್ ಗಾಂಧಿ ಜೊತೆ ಚರ್ಚಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು (ನ.23) : ರಾಜ್ಯ ಸರ್ಕಾರ ಹಾಗೂ ಪಕ್ಷಕ್ಕೆ ತೀವ್ರ ಹಾನಿಯುಂಟು ಮಾಡುತ್ತಿರುವ ನಾಯಕತ್ವ ಬದಲಾವಣೆ ಗೊಂದಲಕ್ಕೆ ಅಂತಿಮ ತೆರೆ ಎಳೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇರಾನೇರ ಒತ್ತಾಯಿಸಿದ್ದಾರೆ.

ಇದಕ್ಕೆ ಸ್ಪಂದಿಸಿರುವ ಖರ್ಗೆ ಅವರು, ದೆಹಲಿಗೆ ತೆರಳಿದ ಕೂಡಲೇ ವರಿಷ್ಠ ರಾಹುಲ್‌ ಗಾಂಧಿ ಅವರೊಂದಿಗೆ ಚರ್ಚಿಸಿ ಈ ಬಗ್ಗೆ ಸ್ಪಷ್ಟತೆ ನೀಡುವ ಮೂಲಕ ಗೊಂದಲ ಪರಿಹರಿಸುವ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ದೆಹಲಿಗೆ ಬುಲಾವ್?

ಮೂಲಗಳ ಪ್ರಕಾರ, ಪ್ರಸ್ತುತ ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ನ. 26ರಂದು ಹಿಂತಿರುಗಲಿದ್ದು, ಅನಂತರ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಗೆ ಬುಲಾವ್‌ ನೀಡಿ ಈ ವಿಚಾರದ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಈ ನಡುವೆ ಸಂಪುಟ ಪುನಾರಚನೆಗೆ ಅವಕಾಶ ಕೋರಿ ಮತ್ತೊಮ್ಮೆ ಖರ್ಗೆ ಬಳಿ ಸಿಎಂ ಸಿದ್ದರಾಮಯ್ಯ ಬೇಡಿಕೆ ಸಲ್ಲಿಸಿದ್ದಾರೆ.

ಸುದೀರ್ಘ ಚರ್ಚೆ:

ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಿದ ಬೆನ್ನಲ್ಲೇ ತೀವ್ರಗೊಂಡಿರುವ ಅಧಿಕಾರ ಹಸ್ತಾಂತರ ಗೊಂದಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ನಡೆಸಿದ ಸುಮಾರು ಒಂದೂವರೆ ಗಂಟೆ ಅವಧಿಯ ಸುದೀರ್ಘ ಚರ್ಚೆಯ ಒಟ್ಟಾರೆ ಫಲಿತಾಂಶವಿದು.

ಈ ಚರ್ಚೆಯ ವೇಳೆ ಸಚಿವ ಸಂಪುಟ ಪುನಾರಚನೆಯೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿವರವಾದ ಚರ್ಚೆ ನಡೆದಿದೆ. ಆದರೆ, ಮುಖ್ಯವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಬೆಂಬಲಿತ ಶಾಸಕರು ನಾಯಕತ್ವ ಬದಲಾವಣೆ ವಿಚಾರವನ್ನು ಬಹಿರಂಗವಾಗಿ ಚರ್ಚಿಸುತ್ತಿರುವುದು ಹಾಗೂ ದೆಹಲಿಗೆ ಪರೇಡ್ ನಡೆಸುತ್ತಿರುವುದನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ ಅವರು ತೀವ್ರ ಬೇಸರ ವ್ಯಕ್ತಪಡಿಸಿದರು ಎನ್ನಲಾಗಿದೆ.

ಈ ಬೆಳವಣಿಗೆಗಳಿಂದ ಪಕ್ಷ ಹಾಗೂ ಸರ್ಕಾರಕ್ಕೆ ಭಾರಿ ಪ್ರಮಾಣದಲ್ಲಿ ಹಾನಿಯುಂಟಾಗುತ್ತಿದ್ದು, ಸಾರ್ವಜನಿಕರಲ್ಲೂ ಗೊಂದಲಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಮಧ್ಯಪ್ರವೇಶಿಸಿ, ಈ ವಿಚಾರಕ್ಕೆ ತೆರೆ ಎಳೆಯಬೇಕು ಎಂದು ನೇರ ಒತ್ತಾಯ ಮಾಡಿದರು ಎನ್ನಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ ಅವರು ಬಣ ರಾಜಕಾರಣದಿಂದ ಪಕ್ಷಕ್ಕೆ ಹಾನಿಯುಂಟಾಗುತ್ತಿದ್ದು, ಇದಕ್ಕೆ ಅಧಿಕಾರ ಹಸ್ತಾಂತರ ವಿಚಾರವೇ ಮುಖ್ಯ ಕಾರಣ. ಹೀಗಾಗಿ ವರಿಷ್ಠರೊಂದಿಗೆ ಚರ್ಚಿಸಿ ಸ್ಪಷ್ಟತೆ ನೀಡುವ ಭರವಸೆ ನೀಡಿದರು ಎನ್ನಲಾಗಿದೆ.==

ಸಂಪುಟ ವಿಸ್ತರಣೆಗೂ ಸಿಎಂ ಮನವಿ

ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಯಶಸ್ವಿ ಎರಡೂವರೆ ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಪ್ರಸ್ತಾಪವನ್ನು ಮತ್ತೆ ಮಂಡಿಸಿದರು ಎನ್ನಲಾಗಿದೆ.

ಪಕ್ಷಕ್ಕಾಗಿ ಸಾಕಷ್ಟು ಮಂದಿ ದುಡಿದಿದ್ದಾರೆ. ಅವರೆಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಅಂತಹ ಎಲ್ಲರಿಗೂ ಒಂದೇ ಬಾರಿ ಸಚಿವ ಸ್ಥಾನ ನೀಡಲು ಆಗುವುದಿಲ್ಲ. ಹಾಗಾಗಿ ಸಂಪುಟ ಪುನಾರಚನೆ ವೇಳೆ ಅವಕಾಶ ನೀಡುವ ಭರವಸೆ ನೀಡಲಾಗಿತ್ತು. ಅದರಂತೆ ಈಗ ಬದಲಾವಣೆ ಮಾಡಿ ಹಿರಿಯ ಶಾಸಕರು, ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವವರು ಸೇರಿದಂತೆ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕು. ಹಾಗಾಗಿ ಸಂಪುಟ ಪುನಾರಚನೆಗೆ ಅವಕಾಶ ನೀಡಲು ಮನವಿ ಮಾಡಿದರು.

ಈ ಬಗ್ಗೆಯೂ ರಾಹುಲ್‌ ಗಾಂಧಿ ಅವರು ವಿದೇಶದಿಂದ ಬಂದ ನಂತರ ಚರ್ಚಿಸೋಣ ಎಂದಿದ್ದಾರೆ. ಮೂಲಗಳ ಪ್ರಕಾರ, ರಾಹುಲ್‌ ಗಾಧಿ ಅವರು ನ. 26ರಂದು ವಿದೇಶದಿಂದ ಹಿಂತಿರುಗಲಿದ್ದು, ಅನಂತರ ಅಂದರೆ ನ. 27ರ ನಂತರ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರಿಗೆ ಹೈಕಮಾಂಡ್ ದೆಹಲಿಗೆ ಬುಲಾವ್ ನೀಡುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!