
ಬೆಂಗಳೂರು(ಅ.20): ಮುಡಾ ಹಗರಣ ವಿಚಾರವಾಗಿ ತನಿಖೆ ಕೈಗೊಂಡಿರುವ ಇ.ಡಿ. ದಾಳಿ ಮುಂದುವರಿಸಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಪರಾಧಿ ಎಂಬಂತೆ ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ಪರಿಸ್ಥಿತಿಯನ್ನು ದೇಶದ ಜನತೆ ಗಮನಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಭಂಡತನ, ಹುಡುಗಾಟಿಕೆ ಬಿಟ್ಟು ರಾಜೀನಾಮೆ ಕೊಡಬೇಕು. ಇ.ಡಿ. ಸಂಸ್ಥೆಯು ಕೇಂದ್ರ ಸರ್ಕಾರದ ಕೈಗೊಂಬೆ ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯ ಟೀಕಿಸುತ್ತಿದ್ದಾರೆ. ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿ ಮುಖ್ಯಮಂತ್ರಿಗಳು ಇದ್ದಂತಿದೆ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯನವರ ಪಾಪದ ಕೊಡ ತುಂಬಿದೆ, ಗೌರವಯುತವಾಗಿ ರಾಜೀನಾಮೆ ಕೊಡಲಿ: ವಿಜಯೇಂದ್ರ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದೋಚಿದ ಹಣವು ಕಾಂಗ್ರೆಸ್ ಹೈಕಮಾಂಡ್‌ಗೆ ತಲುಪಿದೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ಹೈಕಮಾಂಡ್ ಸಿದ್ದರಾಮಯ್ಯ ಪರ ನಿಂತಿರುವುದು ದೊಡ್ಡ ವಿಚಾರವಲ್ಲ. ಹೈಕೋರ್ಟ್‌ನ ತೀರ್ಪಿನಲ್ಲಿ ತಿಳಿಸಿರುವ ವಿಚಾರಗಳು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಬಗ್ಗೆ ಸಿದ್ದರಾಮಯ್ಯ ಮತ್ತೊಂದು ಬಾರಿ ಓದಿದರೆ ತಕ್ಷಣ ರಾಜೀನಾಮೆ ನೀಡಲು ಅನುಕೂಲವಾಗುತ್ತದೆ. ಮುಖ್ಯಮಂತ್ರಿಗಳು ಗೌರವಯುತವಾಗಿ ರಾಜೀನಾಮೆ ನೀಡಿದರೆ ರಾಜ್ಯಕ್ಕೂ ಒಳ್ಳೆಯದು ಮತ್ತು ಅವರ ಗೌರವವೂ ಸ್ವಲ್ಪವಾದರೂ ಉಳಿಯುತ್ತದೆ ಎಂದು ಟೀಕಿಸಿದರು.
ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಚರ್ಚಿಸಿ ನಿರ್ಧಾರ:
ಚನ್ನಪಟ್ಟಣ ಕ್ಷೇತ್ರಕ್ಕೆ ಎನ್‌ಡಿಎ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಸಿಪಿ.ಯೋಗೇಶ್ವರ್ ಚನ್ನಪಟ್ಟಣದಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಆ ಕ್ಷೇತ್ರಕ್ಕೆ ಅವರದೇ ಆದ ಕೊಡುಗೆ ನೀಡಿದೆ. ಅವರ ನಂತರ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ಕೇಂದ್ರದ ಸಚಿವರಾಗಿದ್ದಾರೆ. ಕುಮಾರಸ್ವಾಮಿ ಅವರು ನಮ್ಮ ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಿದ್ದಾರೆ ಎಂದರು.
ಯೋಗೇಶ್ವರ್‌ಗೆ ಅನ್ಯಾಯವಾಗಬಾರದೆಂಬ ಆಸೆ ನನಗೂ ಇದೆ. ಉಭಯ ಪಕ್ಷಗಳ ಮುಖಂಡರ ಜತೆ ಚರ್ಚಿಸುತ್ತೇವೆ. ಅಂತಿಮವಾಗಿ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ