
ಬೆಂಗಳೂರು (ಜು.5): ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿನ ಗೊಂದಲಗಳ ಬಗ್ಗೆ ಆರೋಪಗಳು ಹಾಗೂ ದೂರು ಸಲ್ಲಿಕೆ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಸೋಮವಾರ ಕರ್ನಾಟಕಕ್ಕೆ ಭೇಟಿ ನೀಡುತ್ತಿದೆ.
ಈ ತಂಡವು ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಯಿಂದ ಮಾಹಿತಿ ಸಂಗ್ರಹಿಸಲಿದೆ. ಅಂತೆಯೇ ಈ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೇಳಿ ಬಂದಿರುವ ಆರೋಪಗಳು, ಲೋಪಗಳು ಹಾಗೂ ಗೊಂದಲಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಿದೆ. ಅಂತೆಯೇ ರಾಜಕೀಯ ಪಕ್ಷಗಳಿಂದ ಸಲ್ಲಿಕೆಯಾಗಿರುವ ದೂರುಗಳ ಬಗ್ಗೆಯೂ ಕೇಂದ್ರ ಅಧಿಕಾರಿಗಳ ತಂಡ ಸಮಾಲೋಚನೆ ನಡೆಸಲಿದೆ ಎಂದು ತಿಳಿದು ಬಂದಿದೆ.
ಎಸ್‌ಐಆರ್ ಪ್ರಕ್ರಿಯೆಯ ವಿಶ್ವಾಸಾರ್ಹತೆ ಹಾಗೂ ನಿಖರತೆ ಬಗ್ಗೆಯೇ ಪ್ರಶ್ನೆಗಳು ಎದ್ದಿರುವುದರಿಂದ ಕೇಂದ್ರ ತಂಡ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದ ಎಸ್‌ಐಆರ್ ಪ್ರಕ್ರಿಯೆಯ ವಾಸ್ತವಾಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ನೀಡಲಿದೆ.
ಬಳಿಕ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಹೊರರಾಜ್ಯದ ಅಥವಾ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ನೇಮಿಸುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ರಾಜಕೀಯ ಪಕ್ಷಗಳ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆ ಇದೆ. ಕರ್ನಾಟಕ ಪ್ರತಿನಿಧಿಸುವ ಕೇಂದ್ರ ಸಚಿವರು ಈ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇವೆಲ್ಲವುಗಳ ಬಗ್ಗೆ ಮಾಹಿತಿ ಪಡೆದು ಅಂತಿಮವಾಗಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ