
ಬೆಂಗಳೂರು: ಶಕ್ತಿ ಯೋಜನೆ ಫಲಾನುಭವಿಗಳಿಗೆ ಸ್ಮಾರ್ಟ್‌ಕಾರ್ಡ್ ವಿತರಣೆಗಾಗಿ ವಿಶೇಷ ಉದ್ದೇಶಿತ ವಾಹಕ (ಎಸ್‌ಪಿವಿ) ರಚನೆ ಮಾಡಿ, ಅದರ ಮೂಲಕ ಸ್ಮಾರ್ಟ್‌ಕಾರ್ಡ್ ವಿತರಣಾ ಪ್ರಕ್ರಿಯೆ ನಡೆಸುವಂತೆ ಅಧಿಕಾರಿಗಳಿಗೆ ಸಾರಿಗೆ ಸಚಿವ ಬೈರತಿ ಸುರೇಶ್ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಬೈರತಿ ಸುರೇಶ್, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಫಲಾನುಭವಿಗಳಿಗೆ ಸ್ಮಾರ್ಟ್‌ಕಾರ್ಡ್ ವಿತರಣೆಗೆ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಅಂದಾಜು 2 ಕೋಟಿಗೂ ಹೆಚ್ಚಿನ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸ್ಮಾರ್ಟ್‌ಕಾರ್ಡ್ ವಿತರಿಸಬೇಕಾಗುತ್ತದೆ. ಸ್ಮಾರ್ಟ್‌ಕಾರ್ಡ್ ಮುದ್ರಣಕ್ಕೆ ಟೆಂಡರ್ ಪ್ರಕ್ರಿಯೆ ನಡೆಸಲಾಗುವುದು. ಇದರಲ್ಲಿ ಮಹಿಳೆಯರಿಗೆ ಶಕ್ತಿ ಸ್ಮಾರ್ಟ್‌ಕಾರ್ಡ್ ಮತ್ತು ಪುರುಷರಿಗೆ ಪಾವತಿ ಆಧಾರಿತ ಸ್ಮಾರ್ಟ್‌ಕಾರ್ಡ್ ವಿತರಣೆ ಮಾಡಲಾಗುವುದು ಎಂದರು.
ಸ್ಮಾರ್ಟ್‌ಕಾರ್ಡ್‌ಗೆ ಸಂಬಂಧಿಸಿದಂತೆ ರೂಪುರೇಷೆ ಅಂತಿಮಗೊಳಿಸಲು ವಹಿವಾಟು ಸಲಹೆಗಾರರ ಸಮಿತಿ ನೇಮಿಸಲಾಗಿದೆ. ಆ ಸಮಿತಿಯು ಸ್ಮಾರ್ಟ್‌ಕಾರ್ಡ್ ಸ್ವರೂಪ, ತಾಂತ್ರಿಕ ನೆರವು, ಟೆಂಡರ್ ಪ್ರಕ್ರಿಯೆ ಮತ್ತು ವಿತರಣೆ ಪ್ರಕ್ರಿಯೆಯನ್ನು ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಸಾರಿಗೆ ನಿಗಮಗಳಿಗೆ ಸಲಹೆ ಮತ್ತು ಮಾರ್ಗದರ್ಶನ ಮಾಡಲಿದೆ. ಸಮಿತಿಯು ಮಾಸಾಂತ್ಯಕ್ಕೆ ವರದಿ ನೀಡಲಿದ್ದು, ಅದರ ಆಧಾರದಲ್ಲಿ ಸ್ಮಾರ್ಟ್‌ಕಾರ್ಡ್ ವಿತರಣಾ ಪ್ರಕ್ರಿಯೆ ನಡೆಸಲಾಗುವುದು
ಸ್ಮಾರ್ಟ್ ಕಾರ್ಡ್ ವಿತರಣೆಗೆ ಖಾಸಗಿ-ಸಾರ್ವಜನಿಕ ಸಹಭಾಗಿತ್ವ ವ್ಯವಸ್ಥೆಯನ್ನು ಅನುಸರಿಸಲಾಗುವುದು. ಮಹಿಳೆಯರಿಗೆ ಉಚಿತವಾಗಿ ಸ್ಮಾರ್ಟ್‌ಕಾರ್ಡ್ ನೀಡಲಾಗುವುದು. ಅದಕ್ಕೆ ತಗಲುವ ವೆಚ್ಚವನ್ನು ಸರ್ಕಾರ ಭರಿಸಲಿದೆ. ಇನ್ನು, ಪುರುಷ ಪ್ರಯಾಣಿಕರು ಹಣ ನೀಡಿ ಖರೀದಿಸಬೇಕಿದೆ. ಅದಕ್ಕೆ ಸಂಬಂಧಿಸಿದ ತಾಂತ್ರಿಕ ನೆರವು ಸೇರಿದಂತೆ ಇನ್ನಿತರ ಸಹಕಾರವನ್ನು ಖಾಸಗಿ ಸಂಸ್ಥೆ ನೀಡಲಿದ್ದು, ಸ್ಮಾರ್ಟ್‌ಕಾರ್ಡ್ ನಿರ್ವಹಣೆಯನ್ನು ಆ ಸಂಸ್ಥೆಯೇ ಮಾಡಲಿದೆ ಎಂದು ಬೈರತಿ ಸುರೇಶ್ ತಿಳಿಸಿದರು.
ಸಾರಿಗೆ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಆಯುಕ್ತ ಮತ್ತು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಇತರರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ