
ಬೆಂಗಳೂರು(ಆ.06): ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಮತ್ತು ಜಲಾಶಯಗಳ ನೀರಿನ ಮಟ್ಟದ ಬಗ್ಗೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಹೀಗಾಗಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಇಂದಿನಿಂದ ರೆಡ್ ಅಲರ್ಟ್ ಘೋಷಿಸಲು ಸೂಚಿಸಲಾಗಿದೆ.
ಕಾವೇರಿ ತೀರದಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದ್ದು, ಜಲಾಶಯಗಳ ಒಳಹರಿವು ಹೆಚ್ಚಲಿದೆ. ಇಂದು ಮಧ್ಯಾಹ್ನದಿಂದ ಸಚಿವ ಆರ್. ಅಶೋಕ್ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿ ಮಾಹಿತಿ ಪಡೆದು ಮುನ್ನೆಚ್ಚೆರಿಕೆ ವಹಿಸಲು ಸೂಚನೆ ನೀಡಲಿದ್ದಾರೆ.
ಮಳೆಗೆ ಕರ್ನಾಟಕ ತತ್ತರ: ಆಸ್ಪತ್ರೆಯಲ್ಲಿ ಕುಳಿತೇ ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ
ಭಾರೀ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ ಭಾಗದಲ್ಲಿ ಕೆಲವು ಮನೆಗಳು ಹಾಳಾಗಿದ್ದು, ಕೂಡಲೇ ರೂ.10,000 ರೂ. ಪರಿಹಾರ ನೀಡಬೇಕು ಎಂದು ಸೂಚನೆ ನೀಡಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ಭಾಗದಲ್ಲಿ 150 ಮಿ.ಮೀ ವರೆಗೆ ಮಳೆ, ಮರಗಳು ಉರುಳಿದ್ದು ತೆರವುಗಳಿಸಲಾಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವು ಮರಗಳು ಉರುಳಿದ್ದು, ಶಿವಮೊಗ್ಗದ ಕೆಲವು ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಹಾಸನದಲ್ಲಿ ಯಾವುದೇ ಹಾನಿ ವರದಿಯಾಗಿಲ್ಲ. ಉಳಿದ ಜಿಲ್ಲೆಗಳಲ್ಲಿ ಮರಗಳು ಉರುಳಿದ್ದು ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಜುಲೈ 25 ರಂದು ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗತ್ಯವಿರುವ ಯಂತ್ರೋಪಕರಣಗಳನ್ನು ಖರೀದಿಲು ಸಹ ಅನುಮತಿ ನೀಡಲಾಗಿದೆ. ಗ್ರಾಮ ಪಂಚಾಯತಿ ಮಟ್ಟದ ಯೋಜನೆ ರೂಪಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮುಂದಿನ ಮೂರು ದಿನಗಳ ಮಳೆ ಮುನ್ಸೂಚನೆ:
1. ಕರಾವಳಿ ಭಾಗ: ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವುದು ಮುನ್ಸೂಚನೆ ಇದೆ.
2. ಮಲೆನಾಡು ಭಾಗ: ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ
3. ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಬೀದರ್ ಹಾಗೂ ಕಲಬುರಗಿಯಲ್ಲಿ ಮಧ್ಯಮ ಮಳೆ
4. ದಕ್ಷಿಣ ಒಳನಾಡು: ದಾವಣಗೆರೆ, ಮೈಸೂರು, ಚಾಮರಾಜನಗರ ಮತ್ತು ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಜಲಾಶಯಗಳು ಹಾಗೂ ಮಳೆಹಾನಿ ಕುರಿತು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅಂತರ ರಾಜ್ಯ ತಂಡವು ಮಹಾರಾಷ್ಟ್ರ ಜಲಾಶಯಗಳ ಹೊರ ಹರಿವಿನ ಬಗ್ಗೆ ಅಧ್ಯಯನ ನಡೆಸಲಿವೆ. ಎನ್‍ಡಿಆರ್‍ಎಫ್ ತಂಡವು ಕೊಡಗು, ಧಾರವಾಡ, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಬೇಟಿ ನೀಡುವುದು. ಎಸ್‍ಡಿಆರ್‍ಎಫ್ ತಂಡವು ಸಹ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಈ ಕೂಡಲೇ ರಾಜ್ಯ ಸರ್ಕಾರ ಜನರ ನೆರವಿಗೆ ಧಾವಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ