ಬೆಂಗಳೂರಿನಲ್ಲಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಬಿವಿಪಿ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಹುಬ್ಬಳ್ಳಿ/ಬೆಂಗಳೂರು(ಏ.23): ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಸೋಮವಾರ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ, ಎಬಿವಿಪಿ, ಮುಸ್ಲಿಂ ಸಂಘಟನೆಗಳು, ಮಹಿಳಾ ಜಾಗೃತಿ ವೇದಿಕೆಗಳಿಂದಲೂ ಪ್ರತಿಭಟನೆಗಳು ನಡೆದವು.
ಬೆಂಗಳೂರಿನಲ್ಲಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಬಿವಿಪಿ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಹುಬ್ಬಳ್ಳಿ: ನೇಹಾ ತಂದೆಗೆ ಧೈರ್ಯ ತುಂಬಿ, ನಿಮ್ಮ ಜೊತೆ ನಾವಿದ್ದೇವೆ ಎಂದ ಸಿಎಂ ಸಿದ್ದರಾಮಯ್ಯ
ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿ ಅಂಜುಮನ್ ಸಂಸ್ಥೆ ಸೋಮವಾರ ಕರೆ ನೀಡಿದ್ದ ಬಂದ್ ಬೆಂಬಲಿಸಿ ನಗರದ ಶಾಹ ಬಜಾರ್ ವಾಣಿಜ್ಯ ಮಳಿಗೆ, ನೂರಾನಿ ಮಾರುಕಟ್ಟೆಗಳು ಬೆಳಗ್ಗೆ 8ರಿಂದ ಮದ್ಯಾಹ್ನ 3ಗಂಟೆಯವರೆಗೆ ಸಂಪೂರ್ಣ ಸ್ಥಗಿತವಾಗಿದ್ದವು. ಅಂಜುಮನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಕೈಗೆ ಕಪ್ಪು ಬಟ್ಟೆ ಧರಿಸಿಕೊಂಡು ಘಂಟಿಕೇರಿಯ ನೆಹರು ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.
ಧಾರವಾಡದಲ್ಲಿ ಮುಸ್ಲಿಮರು ಮೌನ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಹಳೇಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನೇಹಾ ಕೊಲೆ ಆರೋಪಿ ಫಯಾಜ್‌ನನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು. ಇಂತಹ ಶಿಕ್ಷೆ ಗುರಿಪಡಿಸುವುದರಿಂದ ಮಹಿಳೆಯರ ಮೇಲಾಗುವ ಕ್ರೂರ ಕೃತ್ಯಗಳು ನಿಯಂತ್ರಣಕ್ಕೆ ಬರುತ್ತವೆ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಬೆಳಗಾವಿಯಲ್ಲಿ ಜಾಗೃತ ಮಹಿಳಾ ವೇದಿಕೆಯಿಂದ ಪ್ರತಿಭಟನೆ ನಡೆಯಿತು.
ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ವಿದ್ಯಾರ್ಥಿನಿ ನೇಹಾ ಹತ್ಯೆ ಮಾಡಿರುವ ಕೊಲೆಗಡುಕನಿಗೆ ರಾಜ್ಯ ಸರ್ಕಾರ ಉತ್ತರ ಪ್ರದೇಶ ಮಾದರಿಯಲ್ಲಿ ಶಿಕ್ಷೆ ನೀಡಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ಒತ್ತಾಯಿಸಿದರು.
ನೇಹಾ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲಿ: ವಿಜಯೇಂದ್ರ ಆಗ್ರಹ
ಮೈಸೂರಿನ ಗಾಂಧಿ ಚೌಕದಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸರ್ಕಾರ ಲವ್ ಜಿಹಾದ್ ಗೆ ಕಡಿವಾಣ ಹಾಕುತ್ತಿಲ್ಲ ಎಂದು ಕಿಡಿ ಕಾರಿದರು.
ಇದೇ ವೇಳೆ, ಹೊಸಪೇಟೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು, ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬೈಂದೂರಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ, ಕಾರವಾರ, ರಾಯಚೂರು, ಕಲಬುರಗಿ, ಗದಗ, ಮಂಡ್ಯ, ರಾಮನಗರ ಸೇರಿದಂತೆ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.