ನೆರೆ ಅನಾಹುತ ತಡೆಯಿರಿ: ಸಿಎಂ ಬಿಎಸ್‌ವೈ ಖಡಕ್ ಸೂಚನೆ

By Kannadaprabha NewsFirst Published Oct 16, 2020, 8:15 AM IST
Highlights

ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದಿಂದ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಪ್ರವಾಹದ ಅನಾಹುತ ತಡೆಗಟ್ಟಲು ನಿಗಾವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಅ.16): ರಾಜ್ಯದ ಪ್ರವಾಹ ಪರಿಸ್ಥಿತಿ ಅವಲೋಕಿಸುವ ಸಲುವಾಗಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯನಿರ್ವಾಹಣಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಲಿದ್ದಾರೆ.

ಅಲ್ಲದೆ, ಪ್ರವಾಹದ ಅನಾಹುತ ತಡೆಗಟ್ಟಲು ನಿಗಾವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದಿಂದ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ವಿಶೇಷವಾಗಿ ಭೀಮಾ ನದಿಯಲ್ಲಿ ನೀರು ಹೆಚ್ಚಾಗಿರುವುದರಿಂದ ನದಿ ಪಾತ್ರದ ಗ್ರಾಮಗಳು ಪ್ರವಾಹಕ್ಕೊಳಪಟ್ಟಿವೆ. ಈಗಾಗಲೇ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮವಾಗಿ ಅಪಾಯದಲ್ಲಿರುವ ಜನರನ್ನು ಗಂಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಂಡಿವೆ ಎಂದು ಹೇಳಿದ್ದಾರೆ.

ಮಳೆಯಬ್ಬರಕ್ಕೆ ಕಂಗೆಟ್ಟ ಕಲ್ಯಾಣ ಕರ್ನಾಟಕ; ಬದುಕು ನೀರುಪಾಲು..!

ಜನರ ಸುರಕ್ಷತೆ ದೃಷ್ಟಿಯಿಂದ ಕಲುಬರಗಿಯಲ್ಲಿ 2, ಯಾದಗಿರಿಯಲ್ಲಿ 2 ಮತ್ತು ರಾಯಚೂರಿನಲ್ಲಿ 1 ಎನ್‌ಡಿಆರ್‌ಎಫ್‌ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಹೆಚ್ಚುವರಿಯಾಗಿ ಮತ್ತೆ ತಲಾ ಒಂದೊಂದು ತಂಡವನ್ನು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳುಹಿಸಲಾಗುತ್ತದೆ. ಹಾಗೆ ಈ ರಕ್ಷಣಾ ಕಾರ್ಯಕ್ಕಾಗಿ ಬೀದರ್‌ ವಿಮಾನ ನಿಲ್ದಾಣದಲ್ಲಿ ಎರಡು ಹೆಲಿಕಾಪ್ಟರ್‌ಗಳನ್ನು ಸನ್ನದ್ಧಗೊಳಿಸಲಾಗುತ್ತದೆ. 

ಪ್ರವಾಹಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ಕರೆಯಲಾಗಿದೆ. ಮಳೆ ನಿಂತ ನಂತರ ಹಾನಿ ಬಗ್ಗೆ ಸಮೀಕ್ಷೆ ನಡೆಸಿ ಪರಿಹಾರ ನೀಡಲಾಗುತ್ತದೆ. ಜನರು ಯಾವುದೇ ಆಂತಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
 

click me!