
ಬೆಂಗಳೂರು (ಫೆ.16): ರಾಜ್ಯದ ಎಲ್ಲ ನಗರ, ಪಟ್ಟಣಗಳಲ್ಲಿ ನಿರ್ಮಿಸಿರುವ ಅನಧಿಕೃತ ಬಡಾವಣೆ ಮತ್ತು ಕಂದಾಯ ಭೂಮಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಿಸಿರುವ ಕಟ್ಟಡಗಳಿಗೆ ಬಿಬಿಎಂಪಿ ಮಾದರಿಯಲ್ಲಿ ಬಿ- ಖಾತಾ ನೀಡಿ ತೆರಿಗೆ ವಸೂಲಿ ಮಾಡುವ ಸಂಬಂಧ ಸಚಿವ ಈಶ್ವರ ಖಂಡ್ರೆ ನೇತೃತ್ವದ ಸಂಪುಟ ಉಪ ಸಮಿತಿ ಮಾಡಿದ್ದ ಶಿಫಾರಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಈ ಶಿಫಾರಸುಗಳನ್ನು ಕಾನೂನಾತ್ಮಕವಾಗಿ ಜಾರಿಗೆ ತರಲು ಬಿಬಿಎಂಪಿ ಕಾಯ್ದೆ 2020ರಲ್ಲಿರುವ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ /ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡಲು ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ಕ್ಕೆ ತಿದ್ದುಪಡಿ ತರಬೇಕಾಗುತ್ತದೆ. ಮಾಹಿತಿ ಪ್ರಕಾರ ಪ್ರಸ್ತುತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 54.91 ಲಕ್ಷಕ್ಕೂ ಹೆಚ್ಚು ಆಸ್ತಿಗಳಿದ್ದು, ಈ ಪೈಕಿ ಸುಮಾರು 34.35 ಲಕ್ಷಕ್ಕೂ ಹೆಚ್ಚು ಅನಧಿಕೃತ ಆಸ್ತಿಗಳಾಗಿವೆ.
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಲೂಟಿ ಜಾತ್ರೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ
ಈ ಸ್ವತ್ತುಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ಕಲ್ಪಿಸಲಾಗುತ್ತಿದ್ದರೂ ತೆರಿಗೆ ವಿಧಿಸಲು ಅವಕಾಶ ಇರಲಿಲ್ಲ. ಈಗ ಎರಡು ಕಾಯ್ದೆಗಳಿಗೆ ತಿದ್ದುಪಡಿ ತಂದು ಅನಧಿಕೃತ ಆಸ್ತಿಗಳಿಗೆ ತೆರಿಗೆ ವಿಧಿಸಿದರೆ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರು. ಆದಾಯ ನಿರೀಕ್ಷಿಸಲಾಗಿದೆ. ಈಶ್ವರ ಖಂಡ್ರೆ ನೇತೃತ್ವದ ಸಂಪುಟ ಉಪ ಸಮಿತಿ ಅನಧಿಕೃತ ಬಡಾವಣೆಗಳ ಮತ್ತು ಕಂದಾಯ ಭೂಮಿಯಲ್ಲಿ ಮನೆ ನಿರ್ಮಿಸಿದ ಮಧ್ಯಮ ಮತ್ತು ಬಡ ವರ್ಗದವರಿಗೆ ಹೊರೆ ಆಗದ ರೀತಿಯಲ್ಲಿ ತೆರಿಗೆ ನಿಗದಿ ಮಾಡಲು ಶಿಫಾರಸು ಮಾಡಿದೆ.
ಮುಂದಿನ ದಿನಗಳಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಶಾಶ್ವತ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಒಂದು ದಿನಾಂಕ ನಿಗದಿಪಡಿಸಿ ಅಂದಿನಿಂದ ರಾಜ್ಯದ ಯಾವುದೇ ಭಾಗದಲ್ಲಿ ಯಾರೇ ಅನಧಿಕೃತ ಬಡಾವಣೆ ನಿರ್ಮಿಸಿದರೂ ನಿರ್ಮಾಣದರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸಚಿವ ಖಂಡ್ರೆ ನೇತೃತ್ವದ ಸಂಪುಟ ಉಪ ಸಮಿತಿಯು ಮಾಡಿರುವ ಶಿಫಾರಸಿಗೂ ಸಚಿವರ ಸಂಪುಟ ಸಭೆ ಅಂಗೀಕಾರ ನೀಡಿದೆ. ಅನಧಿಕೃತ ಬಡಾವಣೆ ನಿರ್ಮಾಣದಾರರು ಮಾತ್ರವಲ್ಲ, ಅದಕ್ಕೆ ಅವಕಾಶ ನೀಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲು ಮತ್ತು ಲಕ್ಷ ರು. ದಂಡ ವಿಧಿಸಲು ಉಪ ಸಮಿತಿ ಸಲಹೆ ನೀಡಿದೆ ಇದನ್ನು ಸಚಿವ ಸಂಪುಟ ಒಪ್ಪಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಗುತ್ತಿಗೆ ಆಧಾರದಲ್ಲಿ 337 ವೈದ್ಯರ ನೇಮಕಕ್ಕೆ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್
ಅಲ್ಲದೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲ ಅನಧಿಕೃತ ಮಾರಾಟವನ್ನು ನಿಯಂತ್ರಿಸಲು ಇ-ಆಸ್ತಿಯಡಿ ಹೊರತುಪಡಿಸಿ ಯಾವುದೇ ಮಾದರಿಯಲ್ಲಿ ನೋಂದಣಿಗೆ ಅವಕಾಶ ಇಲ್ಲದಂತೆ ಮಾಡಲಾಗಿದೆ. ಅನುಮತಿ ಇಲ್ಲದೆ ಕಂದಾಯ ಭೂಮಿಯಲ್ಲಿ ಬಡಾವಣೆ ನಿರ್ಮಿಸಿದರೆ ನಿವೇಶನ ಮಾರಾಟಕ್ಕೆ ಅವಕಾಶವೇ ಇರುವುದಿಲ್ಲ. ಕಾವೇರಿ ತಂತ್ರಾಂಶದಲ್ಲೇ ಇದಕ್ಕೆ ಕಡಿವಾಣ ಹಾಕಲಾಗಿದೆ. ಇಂತಹ ಬಡಾವಣೆಯ ಪಹಣಿಯಲ್ಲೇ ಅನಧಿಕೃತ ಬಡಾವಣೆ ಎಂದು ನಮೂದಾಗುವ ಕಾರಣ ಖಾತೆ ಇಲ್ಲದ ಯಾವುದೇ ಸ್ವತ್ತಿನ ನೋಂದಣಿಯೇ ಸಾಧ್ಯವಾಗುವುದಿಲ್ಲ ಎಂದು ಕಂದಾಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ