
ಬೆಂಗಳೂರು (ಜೂ.20) ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (ಕೆಎಸ್‌ಡಿಎಲ್) ಮತ್ತೆ ಭ್ರಷ್ಟಾಚಾರದಿಂದಾಗಿ ಸುದ್ದಿಯಾಗಿದ್ದು, ಲೋಕಾಯುಕ್ತ ಪೊಲೀಸರು ನಿಗಮದ ಕಚೇರಿಗೆ ತೆರಳಿ ವ್ಯಾಪಕ ಶೋಧ ಕಾರ್ಯ ಕೈಗೊಂಡಿದ್ದಾರೆ.
ನಿಗಮದ(KSDL) ಮಾಜಿ ಅಧ್ಯಕ್ಷರಾಗಿದ್ದ ಮಾಡಾಳು ವಿರೂಪಾಕ್ಷಪ್ಪ(Madala virupakshappa) ಅವಧಿಯಲ್ಲಿ ಅವ್ಯವಹಾರ ಮತ್ತು ಲಂಚ ಪ್ರಕರಣದಿಂದ ರಾಜ್ಯಾದ್ಯಂತ ತೀವ್ರ ಸುದ್ದಿಯಾಗಿದ್ದ ಕೆಎಸ್‌ಡಿಎಲ್ ಇದೀಗ ಮತ್ತೊಮ್ಮೆ ಭ್ರಷ್ಟಾಚಾರದಿಂದಾಗಿಯೇ ಸುದ್ದಿಯಾಗಿದೆ. ಶಿವಶಂಕರ್ ಎಂಬುವವರು ಸೇರಿದಂತೆ ಹಲವರು ಲೋಕಾಯುಕ್ತ ಸಂಸ್ಥೆಗೆ ನೀಡಿದ ದೂರಿನನ್ವಯ ಪೊಲೀಸರು ಕಾರ್ಯಾಚರಣೆ ಕೈಗೊಂಡರು. ಈ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ಆರಂಭಿಸಿದ್ದಾರೆ. ದಾಖಲೆಗಳನ್ನು ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ತನಿಖೆಗೆ ಗಡುವು
ಸೋಮವಾರ ಓರ್ವ ಡಿವೈಎಸ್‌ಪಿ ಮತ್ತು 10 ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಯಶವಂತಪುರ ಬಳಿ ಇರುವ ಕಚೇರಿಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳು ಟೆಂಡರ್ ವಿಚಾರದಲ್ಲಿ ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಆಗಲೂ ನಿಗಮದ ಕಚೇರಿಯ ಮೇಲೆ ಕಾರ್ಯಾಚರಣೆ ಕೈಗೊಂಡು ಪರಿಶೀಲನೆ ನಡೆಸಿದ್ದರು. ಇದೀಗ ಮತ್ತೆ ಅವ್ಯವ ಹಾರ ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ದೂರನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ಪೊಲೀಸರು ನಿಗಮದಲ್ಲಿ ನಡೆಯುತ್ತಿರುವ ಅವ್ಯವಹಾರ ಬಗ್ಗೆ ಸಮಗ್ರ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಮಾಡಾಳ್ ವಿರುಪಾಕ್ಷಪ್ಪ ಜಾಮೀನು ರದ್ದುಗೊಳಿಸಿ: ಸುಪ್ರೀಂ ಕೋರ್ಟ್ ಮೊರೆಹೋದ ಲೋಕಾಯುಕ್ತ ಪೊಲೀಸರು
ಕೆಎಸ್‌ಡಿಎಲ್ ರಾಸಾಯನಿಕ ವಸ್ತುಗಳನ್ನು ಪೂರೈಸುವ ಟೆಂಡರ್ ನೀಡಲು ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಗುತ್ತಿಗೆದಾರರಿಂದ 80 ಲಕ್ಷ ರು. ಹಣಕ್ಕೆ ಬೇಡಿಕೆ ಇಟ್ಟಿದ್ದರು. 40 ಲಕ್ಷ ರು. ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲ ಆರೋಪಿಯಾಗಿದ್ದು, ಸದ್ಯ ಜಾಮೀನಿನಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ