
ಬೆಂಗಳೂರು(ಜೂ.17): ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಗೋಶಾಲೆಗಳನ್ನು ಆರಂಭಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಹಾಗೂ ಈಗಾಗಲೇ ಇರುವ ಗೋಶಾಲೆಗಳಿಗೆ ಮೇವು, ನೀರು ಮತ್ತು ಜಾಗ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕಾನೂನು ಸೇವೆಗಳ ಸಮಿತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿರುವ ಸರ್ಕಾರ, ರಾಜ್ಯದಲ್ಲಿ ಗೋಶಾಲೆಗಳ ಆರಂಭದ ಬಗ್ಗೆ ಮಾಹಿತಿ ನೀಡಿದೆ.
ಗೋಶಾಲೆ ಆರಂಭಿಸುವುದು ಪಂಚವಾರ್ಷಿಯ ಯೋಜನೆಯೇ?: ಸರ್ಕಾರಕ್ಕೆ ಛಾಟಿ ಬೀಸಿದ ಹೈಕೋರ್ಟ್
ರಾಜ್ಯದಲ್ಲಿ ಒಟ್ಟು 77,075 ಬಿಡಾಡಿ ದನಗಳಿವೆ. ಅವುಗಳ ನಿರ್ವಹಣೆಗೆ ರಾಜ್ಯದ ಪ್ರತಿ ಜಿಲ್ಲೆಗೊಂದು ಗೋಶಾಲೆ ತೆರೆಯಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ 15 ಕೋಟಿ ರು. ಅನುದಾನ ಮೀಸಲಿಡಲಾಗಿದೆ. ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಹಂತ ಹಂತವಾಗಿ ಎಲ್ಲಾ 30 ಜಿಲ್ಲೆಗಳಲ್ಲಿ ಗೋಶಾಲೆಗಳ ಸ್ಥಾಪನೆ ಪ್ರಕ್ರಿಯೆ ಮುಗಿಯಲಿದೆ. ಇದಲ್ಲದೆ, ಹೆಚ್ಚುವರಿಯಾಗಿ 70 ಗೋಶಾಲೆ ತೆರೆಯಲು ಸರ್ಕಾರ ತೀರ್ಮಾನಿಸಿದ್ದು, ಅದಕ್ಕಾಗಿ 50 ಕೋಟಿ ರು. ಅನುದಾನ ಮೀಸಲಿಟ್ಟಿದೆ’ ಎಂದು ಪ್ರಮಾಣ ಪತ್ರದಲ್ಲಿ ಸರ್ಕಾರ ಮಾಹಿತಿ ನೀಡಿದೆ.
‘ಅಲ್ಲದೆ, ಖಾಸಗಿ ಸಂಘ-ಸಂಸ್ಥೆಗಳು ನಡೆಸುತ್ತಿರುವ 197 ಗೋಶಾಲೆಗಳಿಗೂ ಸರ್ಕಾರ ಆರ್ಥಿಕ ನೆರವು ಕಲ್ಪಿಸಿದೆ. 2021-22ನೇ ಸಾಲಿಗೆ 3.77 ಕೋಟಿ, 2022-23ನೇ ಸಾಲಿನಲ್ಲಿ 3.77 ಕೋಟಿ ಹಣವನ್ನು ಖಾಸಗಿ ಗೋಶಾಲೆಗಳಿಗೆ ಬಿಡುಗಡೆ ಮಾಡಲಾಗಿದೆ. ಸರ್ಕಾರ ಆರಂಭಿಸುವ ಗೋಶಾಲೆಗಳಿಗೆ ಜಾಗ ಗುರುತಿಸುವುದು, ಅದರ ಸ್ಥಾಪನೆ ಮತ್ತು ನಿರ್ವಹಣೆ, ಅನುದಾನದ ಬಳಕೆಯ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳ ನೇತೃತ್ವದ ‘ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಜಿಲ್ಲಾ ಮಟ್ಟದ ಸಮಿತಿ’ (ಡಿಎಸ್‌ಪಿಸಿಎ)ಗಳಿಗೆ ವಹಿಸಲಾಗಿದೆ’ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ. ಸರ್ಕಾರದ ಈ ಪ್ರಮಾಣ ಪತ್ರಕ್ಕೆ ಅರ್ಜಿದಾರರ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಬಹುದು ಎಂದು ತಿಳಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ